ಸುಳ್ಯ: ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿ, ಪೊಲೀಸರ ವಶದಿಂದ ಪರಾರಿಯಾದ ಪ್ರಕರಣದಲ್ಲಿ ಆರೋಪಿಗೆ ಸುಳ್ಯದ ಎಸ್ಸಿಜೆ ಹಾಗೂ ಜೆಎಂಎಫ್ಸಿ ನ್ಯಾಯಾಲಯವು ಶಿಕ್ಷೆ ಪ್ರಕಟಿಸಿದೆ. ಸುಳ್ಯ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅ.ಕ್ರ.118/24 ಪ್ರಕರಣ (ಕಲಂ 121(1), 132, 262 BNS) ಸಂಬಂಧ ತನಿಖೆಯನ್ನು ಸುಳ್ಯ ವೃತ್ತ ನಿರೀಕ್ಷಕರಾದ ತಿಮ್ಮಪ್ಪ ನಾಯ್ಕ ಅವರು ನಡೆಸಿ, ಅಗತ್ಯ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ ರಾಘವನ್ @ ಕೋಳಿಕರಣ್ ವಿರುದ್ಧ ದೋಷಾರೋಪಣೆಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆ ಪೂರ್ಣಗೊಂಡ ಬಳಿಕ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ, ಮಾನ್ಯ ನ್ಯಾಯಾಧೀಶರಾದ ಬಿ. ಮೋಹನ್ ಬಾಬು ಅವರು ಆರೋಪಿಗೆ ಶಿಕ್ಷೆ ವಿಧಿಸಿದ್ದಾರೆ. ಕಲಂ 121(1) ಅಡಿಯಲ್ಲಿ 3 ವರ್ಷಗಳ ಸಾದಾ ಕಾರಾಗೃಹ ಶಿಕ್ಷೆ ಹಾಗೂ ₹10,000 ದಂಡ. ದಂಡ ಪಾವತಿಸಲು ವಿಫಲವಾದಲ್ಲಿ 6 ತಿಂಗಳ ಸಾದಾ ಕಾರಾಗೃಹ ಶಿಕ್ಷೆ. ಕಲಂ 132 ಅಡಿಯಲ್ಲಿ ಸಾರ್ವಜನಿಕ ಕರ್ತವ್ಯಕ್ಕೆ ಅಡ್ಡಿಪಡಿಸಿದ ಹಲ್ಲೆಗಾಗಿ 1 ವರ್ಷದ ಸಾದಾ ಕಾರಾಗೃಹ ಶಿಕ್ಷೆ ಹಾಗೂ ₹10,000 ದಂಡ. ದಂಡ ಕಟ್ಟದಿದ್ದಲ್ಲಿ 3 ತಿಂಗಳ ಸಾದಾ ಕಾರಾಗೃಹ ಶಿಕ್ಷೆ. ಕಲಂ 262 ಅಡಿಯಲ್ಲಿ ಕಾನೂನುಬದ್ಧ ವಶಕ್ಕೆ ಪಡೆಯುವ ಸಂದರ್ಭ ತಡೆ ಉಂಟುಮಾಡಿದ ಕಾರಣ 1 ವರ್ಷದ ಸಾದಾ ಕಾರಾಗೃಹ ಶಿಕ್ಷೆ ಹಾಗೂ ₹10,000 ದಂಡ. ದಂಡ ಕಟ್ಟದಿದ್ದಲ್ಲಿ 3 ತಿಂಗಳ ಸಾದಾ ಕಾರಾಗೃಹ ಶಿಕ್ಷೆ.
ಸರ್ಕಾರದ ಪರವಾಗಿ ಸಹಾಯಕ ಸರ್ಕಾರಿ ಅಭಿಯೋಜಕರಾದ ಕುಮಾರಿ ಪ್ರೀತಿ ಎಂ.ಸಿ ಅವರು ಸಮರ್ಥವಾಗಿ ವಾದ ಮಂಡಿಸಿದರು.