ಮಂಗಳೂರು: ನೇತ್ರಾವತಿ ನದಿ ತೀರದಲ್ಲಿ ಅಪಾರ ಪ್ರಮಾಣದ ಆಧಾರ್ ಕಾರ್ಡ್‌ಗಳು ಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದ್ದು, ಈ ಕುರಿತು ತನಿಖೆ ನಡೆಸುವಂತೆ ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.ಮಂಗಳೂರು ವಿಧಾನಸಭಾ ಕ್ಷೇತ್ರದ ಪುದು ಗ್ರಾಮದ ಫರಂಗಿಪೇಟೆ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ನೇತ್ರಾವತಿ ನದಿ ತೀರದಲ್ಲಿ ರಾಶಿ ರಾಶಿಯಾಗಿ ಬಿದ್ದಿದ್ದ ಆಧಾರ್ ಕಾರ್ಡ್‌ಗಳನ್ನು ಕಂಡು ಸಾರ್ವಜನಿಕರು ದಿಗ್ಭ್ರಮೆಗೊಂಡಿದ್ದಾರೆ.
ಆಧಾರ್ ಕಾರ್ಡ್‌ಗಳ ರಾಶಿ ಕಂಡ ಕೂಡಲೇ ಸ್ಥಳೀಯರು ಗ್ರಾಮ ಪಂಚಾಯತ್ ಅಧ್ಯಕ್ಷರಿಗೆ ಮಾಹಿತಿ ನೀಡಿದರು. ಬಳಿಕ ಸ್ಥಳಕ್ಕೆ ಧಾವಿಸಿದ ಪಂಚಾಯತ್ ಅಧ್ಯಕ್ಷರು ಹಾಗೂ ಸಾರ್ವಜನಿಕರು ಸೇರಿ ಸಾವಿರಾರು ಆಧಾರ್ ಕಾರ್ಡ್‌ಗಳನ್ನು ಸಂಗ್ರಹಿಸಿದರು.
ಘಟನೆಯ ಬಗ್ಗೆ ಸ್ಥಳೀಯ ಶಾಸಕ ಹಾಗೂ ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಷ್ಟೊಂದು ದೊಡ್ಡ ಪ್ರಮಾಣದ ಆಧಾರ್ ಕಾರ್ಡ್‌ಗಳು ನದಿ ತೀರಕ್ಕೆ ಹೇಗೆ ಬಂದವು ಎಂಬುದನ್ನು ಪ್ರಶ್ನಿಸಿರುವ ಅವರು, ಈ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ಸಂಬಂಧಿತ ಅಧಿಕಾರಿಗಳಿಗೆ ಆದೇಶ ನೀಡಿದ್ದಾರೆ.
ಆಧಾರ್ ಕಾರ್ಡ್‌ಗಳ ದುರುಪಯೋಗ ಅಥವಾ ನಿರ್ಲಕ್ಷ್ಯ ನಡೆದಿರುವ ಸಾಧ್ಯತೆಯನ್ನೂ ಪರಿಗಣಿಸಿ ತನಿಖೆ ನಡೆಸಬೇಕು ಎಂದು ಅವರು ಸೂಚಿಸಿದ್ದಾರೆ. ಈ ಕೃತ್ಯದ ಹಿಂದೆ ಇರುವವರನ್ನು ಶೀಘ್ರ ಪತ್ತೆ ಹಚ್ಚಿ ಕಾನೂನು ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಸ್ಪೀಕರ್ ಸೂಚನೆ ನೀಡಿದ್ದಾರೆ.