ಮಂಗಳೂರು: ಸಿದ್ದರಾಮಯ್ಯ ಅವರು ಮಂಡಿಸಿದ ದಾಖಲೆಯ 17ನೇ ಬಜೆಟ್‌ನಲ್ಲಿ ರಾಜ್ಯದ ಸಮಗ್ರ ಅಭಿವೃದ್ಧಿ ಹಾಗೂ ಜನಸಾಮಾನ್ಯರ ಕಲ್ಯಾಣವನ್ನು ಗಮನದಲ್ಲಿಟ್ಟುಕೊಂಡು ಹಲವಾರು ಮಹತ್ವದ ಕಾರ್ಯಕ್ರಮಗಳನ್ನು ರೂಪಿಸಿರುವುದು ಶ್ಲಾಘನೀಯ ಎಂದು ಕೆ . ಹರೀಶ್ ಕುಮಾರ್ ಹೇಳಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿದ ಅವರು, ರೈತ ಕಲ್ಯಾಣ, ಕೈಗಾರಿಕಾ ಪ್ರಗತಿ, ಪ್ರವಾಸೋದ್ಯಮ, ನೀರಾವರಿ, ತೋಟಗಾರಿಕೆ, ಹೈನುಗಾರಿಕೆ, ಮೀನುಗಾರಿಕೆ, ಮಹಿಳಾ ಸಬಲೀಕರಣ, ಯುವಕರಿಗೆ ಉದ್ಯೋಗಾವಕಾಶಗಳ ಸೃಷ್ಟಿ, ಪ್ರಾಥಮಿಕ ಮತ್ತು ಉನ್ನತ ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರ, ಗ್ರಾಮೀಣಾಭಿವೃದ್ಧಿ ಮತ್ತು ಮೂಲಸೌಕರ್ಯ ಅಭಿವೃದ್ಧಿಗೆ ಬಜೆಟ್‌ನಲ್ಲಿ ಸಾಕಷ್ಟು ಆದ್ಯತೆ ನೀಡಲಾಗಿದೆ ಎಂದು ತಿಳಿಸಿದ್ದಾರೆ. ಇದು ರಾಜ್ಯದ ಸುಸ್ಥಿರ ಬೆಳವಣಿಗೆಗೆ ದಾರಿ ಮಾಡಿಕೊಡಲಿದೆ ಎಂದು ಹೇಳಿದರು.
ಕರಾವಳಿ ಪ್ರವಾಸೋದ್ಯಮ ಸಾಮರ್ಥ್ಯವನ್ನು ಸದುಪಯೋಗಪಡಿಸಿಕೊಳ್ಳಲು ಸಮಗ್ರ ಕರಾವಳಿ ಪ್ರವಾಸೋದ್ಯಮ ಅಭಿವೃದ್ಧಿ ಯೋಜನೆ ರೂಪಿಸಿರುವುದು ಜಾಗತಿಕ ಮಟ್ಟದಲ್ಲಿ ಮಂಗಳೂರು ನಗರವನ್ನು ಪ್ರಮುಖ ಪ್ರವಾಸಿ ತಾಣವಾಗಿ ಗುರುತಿಸಲು ಸಹಕಾರಿಯಾಗಲಿದೆ ಎಂದು ಅವರು ಅಭಿಪ್ರಾಯಪಟ್ಟರು.
ಮಂಗಳೂರಿನಲ್ಲಿ ಕೌಶಲ್ಯಾಭಿವೃದ್ಧಿ ಕೇಂದ್ರಗಳ ಸ್ಥಾಪನೆ ಹಾಗೂ ಕೃತಕ ಬುದ್ಧಿಮತ್ತೆ (AI) ಆಧಾರಿತ ತರಬೇತಿಗಳಿಗೆ ಆದ್ಯತೆ ನೀಡಿರುವುದು ಯುವಜನತೆಯ ಉಜ್ವಲ ಭವಿಷ್ಯಕ್ಕೆ ಅಡಿಪಾಯ ಹಾಕಲಿದೆ. ಕರಾವಳಿಯ ಹೆದ್ದಾರಿ ಮತ್ತು ಮೂಲಸೌಕರ್ಯ ಅಭಿವೃದ್ಧಿ, ಮಂಗಳೂರು ಮೀನುಗಾರಿಕಾ ಮಹಾವಿದ್ಯಾಲಯದಲ್ಲಿ ಸೆಂಟರ್ ಒಫ್ ಎಕ್ಸೆಲೆನ್ಸ್ ಸ್ಥಾಪನೆ, ಮೀನು ಮಾರುಕಟ್ಟೆ ನಿರ್ಮಾಣ, ಬಂದರುಗಳು ಮತ್ತು ಸರಕು ಸಾಗಣೆ ವಲಯದ ಅಭಿವೃದ್ಧಿಗಾಗಿ ಸಮಗ್ರ ಮಲ್ಟಿಮೋಡಲ್ ಲಾಜಿಸ್ಟಿಕ್ಸ್ ನೀತಿ, ಅಡಿಕೆ ಹಾಗೂ ತೆಂಗು ಬೆಳೆಗಳ ರೋಗ ನಿಯಂತ್ರಣಕ್ಕೆ ಒತ್ತು ನೀಡಿರುವುದನ್ನು ಅವರು ಸ್ವಾಗತಿಸಿದರು.
ಈ ಎಲ್ಲಾ ಕ್ರಮಗಳು ಜಿಲ್ಲೆಯ ಉದ್ಯಮ, ಶಿಕ್ಷಣ ಹಾಗೂ ಪ್ರವಾಸೋದ್ಯಮ ಕ್ಷೇತ್ರಗಳ ಮೇಲೆ ಸಕಾರಾತ್ಮಕ ಪ್ರಭಾವ ಬೀರುವುದಾಗಿ ಕೆ . ಹರೀಶ್ ಕುಮಾರ್ ಹೇಳಿದ್ದಾರೆ.
—
ಕೆ. ಹರೀಶ್ ಕುಮಾರ್
ಅಧ್ಯಕ್ಷರು, ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ.