ಸಮಾಜ ಸೇವಾ ರತ್ನ ಪ್ರಶಸ್ತಿಗೆ ಡಾ. ಮಾಲತಿ ಶೆಟ್ಟಿ ಮಾಣೂರು ಆಯ್ಕೆ

ಬೆಂಗಳೂರಿನ ದಿವ್ಯ ಚೇತನ ಚಾರಿಟೇಬಲ್ ಟ್ರಸ್ಟ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬೆಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ನಡೆಯಲಿರುವ 2026ನೇ ಸಾಲಿನ ಪ್ರತಿಷ್ಠಿತ “ಸಮಾಜ ಸೇವಾ ರತ್ನ” ಪ್ರಶಸ್ತಿಗೆ ಮಂಗಳೂರಿನ ಅಮೃತ ಪ್ರಕಾಶ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕಿ ಡಾ. ಮಾಲತಿ ಶೆಟ್ಟಿ ಮಾಣೂರು ಅವರನ್ನು ಆಯ್ಕೆ ಮಾಡಲಾಗಿದೆ.

ಪ್ರಶಸ್ತಿ ಪ್ರದಾನ ಸಮಾರಂಭವು ಮಾರ್ಚ್ 11ರಂದು ಬೆಂಗಳೂರಿನ ಕನ್ನಡ ಭವನದ ನಯನ ಸಭಾಂಗಣದಲ್ಲಿ ಗಣ್ಯರ ಉಪಸ್ಥಿತಿಯಲ್ಲಿ ನಡೆಯಲಿದೆ. ತುಮಕೂರಿನ ಶ್ರೀ ವಾಲ್ಮೀಕಿ ಆಶ್ರಮದ ಶ್ರೀ ಶ್ರೀ ಸಂಜಯ ಕುಮಾರ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ. ಕರ್ನಾಟಕ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಸಮಾಜ ಸೇವಾ ರತ್ನ ಪ್ರಶಸ್ತಿಯನ್ನು ಪ್ರದಾನ ಮಾಡಲಿದ್ದಾರೆ. ವಿಜಯನಗರ ಕ್ಷೇತ್ರದ ಶಾಸಕ ಎಂ. ಕೃಷ್ಣಪ್ಪ ಅಧ್ಯಕ್ಷತೆ ವಹಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಶಾಸಕ ಪ್ರಿಯಕೃಷ್ಣ, ಸಮಾಜ ಕಲ್ಯಾಣ ಇಲಾಖೆ ನಿವೃತ್ತ ನಿರ್ದೇಶಕ ಕೆ.ಎಸ್. ಮೃತ್ಯುಂಜಯ, ಗಾಯಕಿ ಹಾಗೂ ಸಂಗೀತ ನಿರ್ದೇಶಕಿ ಡಾ. ಗೀತಾ ಕೈವಾರ, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಯ ನಿರ್ದೇಶಕ ಎ.ಎಸ್. ಕಾಂತರಾಜು, ಕರ್ನಾಟಕ ಸ್ಟೇಟ್ ಮಿನರಲ್ ಕಾರ್ಪೊರೇಷನ್ ನಿರ್ದೇಶಕ ಬಸವರಾಜು, ಕಾವೇರಿ ನೀರಾವರಿ ನಿಗಮ ವ್ಯವಸ್ಥಾಪಕ ನಿರ್ದೇಶಕ ಮಹೇಶ್, ಕರ್ನಾಟಕ ಕೊಲ್ಲಗೇರಿ ಅಭಿವೃದ್ಧಿ ಮಂಡಳಿ ಆಯುಕ್ತ ರಾಘವೇಂದ್ರ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ನಿರ್ದೇಶಕ ಯೋಗೀಶ್, ಕರ್ನಾಟಕ ರಾಜ್ಯ ಕಲಾವಿದರ ಕಲ್ಯಾಣ ವೇದಿಕೆ ರಾಜ್ಯಾಧ್ಯಕ್ಷ ಡಾ. ಕೆಂಚನೂರು ಶಂಕರ ಹಾಗೂ ಕರ್ನಾಟಕ ಮಾಧ್ಯಮ ಅಕಾಡೆಮಿ ಮಾಜಿ ಅಧ್ಯಕ್ಷ ಎಂ.ವಿ. ಪೊನ್ನಪ್ಪ ಸೇರಿದಂತೆ ಅನೇಕ ಗಣ್ಯರು ಭಾಗವಹಿಸಲಿದ್ದಾರೆ ಎಂದು ಸಂಸ್ಥೆಯ ಅಧ್ಯಕ್ಷ ಎಂ. ರಾಮ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಡಾ. ಮಾಲತಿ ಶೆಟ್ಟಿ ಮಾಣೂರು ಅವರು ಕಳೆದ 21 ವರ್ಷಗಳಿಂದ ಸಾಹಿತ್ಯ, ಪತ್ರಿಕೋದ್ಯಮ, ಸಮಾಜ ಸೇವೆ ಹಾಗೂ ಸಂಘಟನಾ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಕಳೆದ 13 ವರ್ಷಗಳಿಂದ ಸಾಹಿತ್ಯ ಪರ ಅಮೃತ ಪ್ರಕಾಶ ಪತ್ರಿಕೆಯನ್ನು ನಡೆಸುತ್ತಿದ್ದು, ಒಟ್ಟು 9 ಕೃತಿಗಳನ್ನು ಪ್ರಕಟಿಸಿದ್ದಾರೆ. ಜೊತೆಗೆ ಇತರ ಹಿರಿಯ ಹಾಗೂ ಕಿರಿಯ ಲೇಖಕರ 49 ಕೃತಿಗಳನ್ನು ಪತ್ರಿಕೆಯ ಮೂಲಕ ಬಿಡುಗಡೆಗೊಳಿಸಿದ್ದಾರೆ. ಸಾಹಿತ್ಯದ ಬಗ್ಗೆ ವಿದ್ಯಾರ್ಥಿಗಳಲ್ಲಿ ಆಸಕ್ತಿ ಮೂಡಿಸುವ ಉದ್ದೇಶದಿಂದ ಈಗಾಗಲೇ 117 ಶಾಲಾ-ಕಾಲೇಜುಗಳಲ್ಲಿ ಉಚಿತ ಸಾಹಿತ್ಯ ಅಭಿರುಚಿ ಕಾರ್ಯಕ್ರಮಗಳನ್ನು ನಡೆಸಿ ವಿಶೇಷ ಸಾಧನೆ ಮಾಡಿದ್ದಾರೆ. ಡಾ. ಮಾಲತಿ ಶೆಟ್ಟಿ ಮಾಣೂರು ಅವರು ಹಿರಿಯ ಯಕ್ಷಗಾನ ಕಲಾವಿದ ದಿವಂಗತ ಕಿಟ್ಟಣ್ಣ ಶೆಟ್ಟಿ ಮಾಣೂರು ಹಾಗೂ ರೇವತಿ ಶೆಟ್ಟಿ ಮಾಣೂರು ಅವರ ಪುತ್ರಿಯಾಗಿದ್ದಾರೆ. ಮಂಗಳೂರಿನ ಅತ್ತಾವರ ವೈದ್ಯನಾಥ ನಗರದಲ್ಲಿ ಪತಿ ಸತ್ಯಪ್ರಕಾಶ ಶೆಟ್ಟಿ ಅವರೊಂದಿಗೆ ವಾಸವಾಗಿದ್ದಾರೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!