ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ವೆನ್ಲಾಕ್ ಆಸ್ಪತ್ರೆಗೆ ಭೇಟಿ

ಮಂಗಳೂರು, ಮಾ. 8 (ಕ.ವಾ): ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಅವರು ಶನಿವಾರ ಮಂಗಳೂರಿನ ವೆನ್ಲಾಕ್ ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿ ಮಹಿಳಾ ವಾರ್ಡ್‌ಗಳ ಸ್ಥಿತಿಗತಿಗಳನ್ನು ಪರಿಶೀಲಿಸಿದರು.

ಭೇಟಿಯ ಸಂದರ್ಭದಲ್ಲಿ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಆಸಿಡ್ ದಾಳಿ ಸಂತ್ರಸ್ತೆಯೊಂದಿಗೆ ಮಾತುಕತೆ ನಡೆಸಿ ಆಕೆಗೆ ಸಾಂತ್ವನ ಹೇಳಿದರು. ಸಂತ್ರಸ್ತೆಗೆ ಅಗತ್ಯವಾದ ಪರಿಹಾರ ಮತ್ತು ಸರ್ಕಾರದ ನೆರವು ಒದಗಿಸುವ ಬಗ್ಗೆ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು. ಜೊತೆಗೆ ಸಂತ್ರಸ್ತೆಯ ಆರೋಗ್ಯದ ಬಗ್ಗೆ ವೈದ್ಯರಿಂದ ಮಾಹಿತಿ ಪಡೆದು ಚಿಕಿತ್ಸೆ ಸರಿಯಾದ ರೀತಿಯಲ್ಲಿ ನಡೆಯುತ್ತಿದೆ ಎಂಬುದನ್ನು ಖಚಿತಪಡಿಸಿಕೊಂಡರು.

ಈ ವೇಳೆ ವೆನ್ಲಾಕ್ ಆಸ್ಪತ್ರೆಯಲ್ಲಿ ಲಭ್ಯವಾಗುತ್ತಿರುವ ಚಿಕಿತ್ಸೆ ಮತ್ತು ವೈದ್ಯಕೀಯ ಸೌಲಭ್ಯಗಳನ್ನು ಅವರು ಶ್ಲಾಘಿಸಿದರು. ಸಂಕಷ್ಟದಲ್ಲಿರುವ ಮಹಿಳೆಯರಿಗೆ ತಕ್ಷಣ ಸ್ಪಂದಿಸಿ ಚಿಕಿತ್ಸೆ ನೀಡುತ್ತಿರುವ ವೈದ್ಯರು ಹಾಗೂ ಸಿಬ್ಬಂದಿಯ ಕಾರ್ಯವನ್ನು ಮೆಚ್ಚುಗೆ ವ್ಯಕ್ತಪಡಿಸಿದರು.

ಭೇಟಿಯ ವೇಳೆ ನರ್ಸಿಂಗ್ ಅಧಿಕಾರಿಗಳು ಹಾಗೂ ಸಿಬ್ಬಂದಿ, ಆಸ್ಪತ್ರೆಯಲ್ಲಿ ನರ್ಸಿಂಗ್ ಸಿಬ್ಬಂದಿಗಳ ಕೊರತೆ ಇರುವುದರಿಂದ ಇರುವ ಸಿಬ್ಬಂದಿ ಹೆಚ್ಚು ಒತ್ತಡದಲ್ಲಿ ಕೆಲಸ ಮಾಡಬೇಕಾಗುತ್ತಿದೆ ಎಂಬ ವಿಷಯವನ್ನು ಅಧ್ಯಕ್ಷರ ಗಮನಕ್ಕೆ ತಂದರು. ಇದಕ್ಕೆ ಪ್ರತಿಕ್ರಿಯಿಸಿದ ಡಾ. ನಾಗಲಕ್ಷ್ಮಿ ಚೌಧರಿ, ಈ ವಿಷಯವನ್ನು ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಹರ್ಷ ಗುಪ್ತಾ ಅವರೊಂದಿಗೆ ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳಲು ಪ್ರಯತ್ನಿಸುವುದಾಗಿ ತಿಳಿಸಿದರು.

ಆಸ್ಪತ್ರೆಯ ಮೂಲಸೌಕರ್ಯ, ರೋಗಿಗಳಿಗೆ ನೀಡುತ್ತಿರುವ ಸೌಲಭ್ಯಗಳು ಹಾಗೂ ಸಿಬ್ಬಂದಿಯ ಸಮಸ್ಯೆಗಳ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿದ ಅವರು, ಮಹಿಳೆಯರ ಸುರಕ್ಷತೆ ಮತ್ತು ಆರೋಗ್ಯಕ್ಕೆ ಸಂಬಂಧಿಸಿದ ವಿಷಯಗಳಲ್ಲಿ ಸರ್ಕಾರ ಹೆಚ್ಚಿನ ಗಮನ ಹರಿಸಬೇಕು ಎಂದು ಹೇಳಿದರು.

ಭೇಟಿಯ ವೇಳೆ ಆಸ್ಪತ್ರೆಯ ವೈದ್ಯರು, ನರ್ಸಿಂಗ್ ಅಧಿಕಾರಿಗಳು ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.

SHARE
Loading spinner

Leave a Reply

Your email address will not be published. Required fields are marked *

error: Content is protected !!