ಉಡುಪಿ: ಅಡುಗೆ ಗ್ಯಾಸ್ ಮತ್ತು ವಾಣಿಜ್ಯ ಸಿಲಿಂಡರ್ ದರ ಏರಿಕೆ ವಿರುದ್ಧ ಜಿಲ್ಲಾ ಕಾಂಗ್ರೆಸ್ ವತಿಯಿಂದ ಕಳೆದ ದಿನ ಉಡುಪಿಯಲ್ಲಿ ಪ್ರತಿಭಟನೆ ನಡೆಸಲಾಯಿತು. ಜಿಲ್ಲಾ ಕಾಂಗ್ರೆಸ್ ಭವನದಿಂದ ಬ್ರಹ್ಮಗಿರಿ ಸರ್ಕಲ್ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು ಅಲ್ಲಿಗೆ ತಲುಪಿ ರಸ್ತೆ ಮಧ್ಯೆ ಧರಣಿ ನಡೆಸಿದರು. ಪ್ರತಿಭಟನೆಯ ಭಾಗವಾಗಿ ಮಹಿಳಾ ಕಾರ್ಯಕರ್ತೆಯರು ರಸ್ತೆಯಲ್ಲೇ ಒಲೆ ಹಚ್ಚಿ ಚಹಾ ತಯಾರಿಸಿ ಜನರಿಗೆ ಹಂಚುವ ಮೂಲಕ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.
ಕೇಂದ್ರ ಸರ್ಕಾರ ಇತ್ತೀಚೆಗೆ ಅಡುಗೆ ಗ್ಯಾಸ್ ಸಿಲಿಂಡರ್ ದರವನ್ನು ₹60 ಮತ್ತು ವಾಣಿಜ್ಯ ಸಿಲಿಂಡರ್ ದರವನ್ನು ₹115 ಹೆಚ್ಚಿಸಿರುವುದನ್ನು ಕಾಂಗ್ರೆಸ್ ನಾಯಕರು ತೀವ್ರವಾಗಿ ಖಂಡಿಸಿದರು. “ಹಿಂದೆ ಗ್ಯಾಸ್ ದರ ಸ್ವಲ್ಪ ಪ್ರಮಾಣದಲ್ಲಿ ಏರಿಕೆಯಾಗಿದ್ದರೂ ಬಿಜೆಪಿ ತೀವ್ರ ಪ್ರತಿಭಟನೆ ನಡೆಸುತ್ತಿತ್ತು. ಆದರೆ ಈಗ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಸರ್ಕಾರವೇ ಜನರ ಮೇಲೆ ಹೆಚ್ಚುವರಿ ಭಾರ ಹಾಕುತ್ತಿದೆ,” ಎಂದು ಆರೋಪಿಸಿದರು.
ವಾಣಿಜ್ಯ ಸಿಲಿಂಡರ್ ದರ ಹೆಚ್ಚಳದಿಂದ ಹೋಟೆಲ್ ಉದ್ಯಮಕ್ಕೂ ತೀವ್ರ ಹೊಡೆತ ಬೀಳುವ ಸಾಧ್ಯತೆ ಇದೆ ಎಂದು ಅವರು ಆತಂಕ ವ್ಯಕ್ತಪಡಿಸಿದರು. ಇದೇ ವೇಳೆ ಗ್ಯಾಸ್ ಸಿಲಿಂಡರ್ ಮೇಲೆ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಭಾವಚಿತ್ರಗಳನ್ನು ಅಂಟಿಸಿ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆ ಹಿನ್ನೆಲೆಯಲ್ಲಿ ಬ್ರಹ್ಮಗಿರಿ ಸರ್ಕಲ್ ಪ್ರದೇಶದಲ್ಲಿ ಸುಮಾರು ಅರ್ಧಗಂಟೆ ಕಾಲ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತು.
ಬೈಟ್: ಎಂ.ಎ. ಗಫೂರ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ.