ಕಡಬ : ಪುತ್ತೂರಿನ ಐತಿಹಾಸಿಕ ಮತ್ತು ಭಕ್ತರ ಭಾವನೆಗಳಿಗೆ ಅತ್ಯಂತ ಪವಿತ್ರವಾಗಿರುವ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಭಾ ಭವನದಲ್ಲಿ ರಾಜಕೀಯ ಪ್ರೇರಿತ ಕಾರ್ಯಕ್ರಮ ನಡೆಯಿರುವುದು ಅತ್ಯಂತ ಖಂಡನೀಯ ಘಟನೆ ಎಂದು ವಿಶ್ವ ಹಿಂದೂ ಪರಿಷತ್ ಮಾತೃಶಕ್ತಿ ಪ್ರಮುಖ್ ಪ್ರೇಮಲತಾ ಅವರು ಹೇಳಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ದೇವಸ್ಥಾನಗಳು ಧಾರ್ಮಿಕ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಿಗೆ ಮಾತ್ರ ಮೀಸಲಾಗಿರುವ ಪವಿತ್ರ ಸ್ಥಳಗಳಾಗಿವೆ. ಇಂತಹ ಪವಿತ್ರ ವೇದಿಕೆಗಳನ್ನು ರಾಜಕೀಯ ವೇದಿಕೆಯಾಗಿ ಬಳಸುವುದು ದೇವಾಲಯದ ಪರಂಪರೆ ಮತ್ತು ಭಕ್ತರ ಭಾವನೆಗಳಿಗೆ ಧಕ್ಕೆ ತರುವಂತಾಗಿದೆ ಎಂದು ಅವರು ಅಭಿಪ್ರಾಯಪಟ್ಟರು.
ಶತಮಾನಗಳ ಇತಿಹಾಸ ಹೊಂದಿರುವ ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನವು ದಕ್ಷಿಣ ಕನ್ನಡ ಜಿಲ್ಲೆಯ ಪ್ರಮುಖ ಧಾರ್ಮಿಕ ಕೇಂದ್ರವಾಗಿದ್ದು ಸಾವಿರಾರು ಭಕ್ತರ ಭಕ್ತಿಗೆ ಪಾತ್ರವಾಗಿದೆ. ಇಂತಹ ದೇವಸ್ಥಾನದ ಆವರಣದಲ್ಲಿ ರಾಜಕೀಯ ಪ್ರೇರಿತ ಕಾರ್ಯಕ್ರಮಗಳನ್ನು ನಡೆಸುವುದರಿಂದ ದೇವಾಲಯದ ಪವಿತ್ರತೆಯೇ ಪ್ರಶ್ನಾರ್ಥಕವಾಗುತ್ತದೆ ಎಂದು ಅವರು ಹೇಳಿದ್ದಾರೆ.
ದೇವಾಲಯಗಳ ಆವರಣದಲ್ಲಿ ನಡೆಯುವ ಕಾರ್ಯಕ್ರಮಗಳು ಧಾರ್ಮಿಕ, ಸಾಂಸ್ಕೃತಿಕ ಮತ್ತು ಸಮಾಜೋಪಯೋಗಿ ಕಾರ್ಯಕ್ರಮಗಳಿಗೆ ಮಾತ್ರ ಸೀಮಿತವಾಗಿರಬೇಕು. ರಾಜಕೀಯ ಕಾರ್ಯಕ್ರಮಗಳನ್ನು ದೇವಸ್ಥಾನದ ವೇದಿಕೆಯಲ್ಲಿ ನಡೆಸುವುದನ್ನು ಸಂಬಂಧಪಟ್ಟವರು ಮುಂದಿನ ದಿನಗಳಲ್ಲಿ ತಪ್ಪಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.
ಇದೇ ವೇಳೆ ದೇವಸ್ಥಾನದ ಪಾವಿತ್ರ್ಯವನ್ನು ಕಾಪಾಡುವ ಹೊಣೆಗಾರಿಕೆ ದೇವಸ್ಥಾನದ ಆಡಳಿತ ಮಂಡಳಿ ಹಾಗೂ ಸಾರ್ವಜನಿಕರ ಮೇಲಿರುವುದರಿಂದ, ಇಂತಹ ಘಟನೆಗಳು ಮರುಕಳಿಸದಂತೆ ಕ್ರಮ ಕೈಗೊಳ್ಳಬೇಕೆಂದು ಪ್ರೇಮಲತಾ ತಿಳಿಸಿದ್ದಾರೆ.