ಬೆಂಗಳೂರು: ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಕಾಂಗ್ರೆಸ್ ಪಕ್ಷಕ್ಕೆ ಪ್ರತಿಷ್ಠೆಯ ವಿಷಯವಾಗಿದ್ದು, ಗೆಲುವೇ ಮುಖ್ಯ ಗುರಿಯಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ Lakshmi Hebbalkar ತಿಳಿಸಿದ್ದಾರೆ.
ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಉಸ್ತುವಾರಿ ಸಮಿತಿ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಸಭೆಯಲ್ಲಿ ಎಂಟು ಮಂದಿ ಆಕಾಂಕ್ಷಿಗಳ ಹೆಸರು ಚರ್ಚೆಯಾಗಿದೆ ಎಂದು ತಿಳಿಸಿದರು.
ಜಿಲ್ಲಾ ಹಾಗೂ ತಾಲೂಕು ಪಂಚಾಯತ್ ಮಟ್ಟದ ಸಂಘಟನೆಗಳನ್ನು ಬಲಪಡಿಸುವ ಜೊತೆಗೆ 2028ರ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಕಾರ್ಯತಂತ್ರ ರೂಪಿಸಲಾಗುತ್ತಿದೆ ಎಂದರು. ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಹಾಗೂ ಪಕ್ಷದ ಹೈಕಮಾಂಡ್ ಜೊತೆ ಚರ್ಚಿಸಿ ಅಂತಿಮ ಅಭ್ಯರ್ಥಿಯನ್ನು ಆಯ್ಕೆ ಮಾಡಲಾಗುತ್ತದೆ ಎಂದು ಹೇಳಿದರು.
ಹೈಕಮಾಂಡ್ ತೀರ್ಮಾನಕ್ಕೆ ನಾವು ಬದ್ದರಾಗಿದ್ದೇವೆ. ಅಭ್ಯರ್ಥಿ ಹೆಸರು ಘೋಷಣೆಯಾದ ಬಳಿಕ ಇರುವ ಗೊಂದಲಗಳು ನಿವಾರಣೆಯಾಗಲಿವೆ. ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಅಭ್ಯರ್ಥಿ ಘೋಷಣೆ ಮಾಡಲಾಗುತ್ತದೆ. ಟಿಕೆಟ್ ಕೇಳುವುದು ಯಾರಿಗಾದರೂ ಹಕ್ಕು, ಆದರೆ ಘೋಷಣೆಯಾದ ನಂತರ ಪಕ್ಷದ ನಿರ್ಧಾರಕ್ಕೆ ಎಲ್ಲರೂ ಬದ್ದರಾಗಬೇಕು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.