ಮಂಗಳೂರು: ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 9 ವರ್ಷದ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿ ಆರೋಪಿಯನ್ನು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಆಶೀಶ್ ಪೂಜಾರಿ (33) ಎಂದು ಗುರುತಿಸಲಾಗಿದ್ದು, ಮಡ್ಯಾರ್ ನಿವಾಸಿಯಾಗಿದ್ದಾನೆ.
ಪೊಲೀಸರ ಮಾಹಿತಿಯ ಪ್ರಕಾರ, ಆರೋಪಿಯು ಬಾಲಕನನ್ನು ಹಣ ಹಾಗೂ ತಿಂಡಿ ನೀಡುವ ನೆಪದಲ್ಲಿ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಲ್ಲದೆ, ಅಶ್ಲೀಲ ವಿಡಿಯೋಗಳನ್ನು ತೋರಿಸಿ ಅಸಭ್ಯ ಕ್ರಿಯೆಗಳಿಗೆ ಪ್ರೇರೇಪಿಸಿರುವುದು ತನಿಖೆಯಲ್ಲಿ ಬಹಿರಂಗವಾಗಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಕ್ಸೊ ಕಾಯ್ದೆಯ ಸೆಕ್ಷನ್ 4, 6, 12 ಹಾಗೂ ಭಾರತೀಯ ನ್ಯಾಯ ಸಂಹಿತೆ ಕಾಯ್ದೆಯ ಸೆಕ್ಷನ್ 75 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಆರೋಪಿಯನ್ನು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
ಪ್ರಕರಣದ ಕುರಿತು ಪೊಲೀಸರು ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ.