ಬೆಂಗಳೂರು: ಪರಿಶಿಷ್ಟ ಜಾತಿಗಳ ಒಳಮೀಸಲಾತಿ ರೋಸ್ಟರ್ ಹಂಚಿಕೆ ವಿರುದ್ಧ ಭೋವಿ ಹಾಗೂ ಇತರೆ ಸಮುದಾಯಗಳ ವತಿಯಿಂದ ಮಾರ್ಚ್ 24ರಂದು ಬೆಳಗ್ಗೆ 10 ಗಂಟೆಗೆ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಬೃಹತ್ ಪ್ರತಿಭಟನಾ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಭೋವಿ ಸಮಾಜದ ಯುವ ಮುಖಂಡ ಪವನ್ ಕುಮಾರ್ ತಿಳಿಸಿದ್ದಾರೆ.
ನಗರದ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಪ್ರತಿಭಟನೆಯಲ್ಲಿ ಭೋವಿ ಗುರುಪೀಠದ ಜಗದ್ಗುರು ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ ಸೇರಿದಂತೆ ಬಂಜಾರ, ಭೋವಿ, ಕೊರಮ, ಕೊರಚ, ಚರ್ಮಕಾರ ಹಾಗೂ ಸೂಕ್ಷ್ಮ ಪರಿಶಿಷ್ಟ ಜಾತಿಗಳ ಸಮುದಾಯದವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಹೇಳಿದರು.
ರಾಜ್ಯ ಸರ್ಕಾರ ಪರಿಶಿಷ್ಟ ಜಾತಿಗಳಿಗೆ ಅವೈಜ್ಞಾನಿಕ ಒಳಮೀಸಲಾತಿ ಹಾಗೂ ರೋಸ್ಟರ್ ಪದ್ಧತಿಯನ್ನು ಜಾರಿಗೊಳಿಸಿದ್ದು, ಇದರಿಂದ ಸಿ-ಪ್ರವರ್ಗದಲ್ಲಿ ಇರುವ ಬಂಜಾರ, ಭೋವಿ, ಕೊರಚ, ಕೊರಮ, ಆದಿಯಾ, ಅಗೇರ ಸೇರಿದಂತೆ 63 ಜಾತಿಗಳಿಗೆ ಅನ್ಯಾಯವಾಗಿದೆ ಎಂದು ಅವರು ಆರೋಪಿಸಿದರು.
ಪರಿಶಿಷ್ಟ ಜಾತಿಗಳ ಒಳಮೀಸಲಾತಿಗೆ ಸಂಬಂಧಿಸಿದ ನ್ಯಾ. ನಾಗಮೋಹನ್ ದಾಸ್ ಆಯೋಗದ ವರದಿಯ ದತ್ತಾಂಶ ಪೂರ್ವಾಗ್ರಹಪೀಡಿತವಾಗಿದ್ದು, ಸೋರಿಕೆಯಾಗಿರುವ ವರದಿಯಲ್ಲಿ ಅಪೂರ್ಣ, ಅವೈಜ್ಞಾನಿಕ ಹಾಗೂ ನ್ಯಾಯಸಮ್ಮತವಲ್ಲದ ಶಿಫಾರಸುಗಳಿವೆ ಎಂದು ಪವನ್ ಕುಮಾರ್ ಟೀಕಿಸಿದರು.
ಕಳೆದ 50 ವರ್ಷಗಳಿಂದ ಪರಿಶಿಷ್ಟ ಜಾತಿಗಳ ಪಟ್ಟಿಯಲ್ಲಿರುವ 101 ಸಮುದಾಯಗಳ ಸ್ಥಿತಿಗತಿಗಳ ಕುರಿತು ಸಮಗ್ರ ಸಮೀಕ್ಷೆ ನಡೆಸಿ ದತ್ತಾಂಶವನ್ನು ಬಹಿರಂಗಪಡಿಸಬೇಕು. ಜೊತೆಗೆ ಎಲ್ಲಾ ಸಮುದಾಯಗಳಿಂದ ಆಕ್ಷೇಪಣೆ ಸ್ವೀಕರಿಸಲು ಸರ್ಕಾರ ಕಾಲಾವಕಾಶ ನೀಡಬೇಕು ಎಂದು ಅವರು ಒತ್ತಾಯಿಸಿದರು.
ವರದಿಯಲ್ಲಿ ಛಲವಾದಿ, ಬಂಜಾರ, ಭೋವಿ, ಕೊರಮ, ಕೊರಚ, ಚರ್ಮಕಾರ, ಸಮಗಾರ ಸೇರಿದಂತೆ ಹಲವು ಸಮುದಾಯಗಳಿಗೆ ಅನ್ಯಾಯವಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ಆಯೋಗ ರಚಿಸಿ ಸಮಸ್ಯೆಯನ್ನು ಪರಿಹರಿಸಬೇಕು ಹಾಗೂ ಎಲ್ಲಾ ಸಮುದಾಯಗಳ ಮುಖಂಡರೊಂದಿಗೆ ಚರ್ಚೆ ನಡೆಸಬೇಕು ಎಂಬ ಬೇಡಿಕೆಗೆ ಸ್ಪಂದನೆ ದೊರಕದ ಕಾರಣ ಪ್ರತಿಭಟನೆ ಆಯೋಜಿಸಲಾಗಿದೆ ಎಂದು ಹೇಳಿದರು.