ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಇಂದು 44ನೇ ವಾರ್ಷಿಕ ಘಟಿಕೋತ್ಸವ ವಿವಿ ಆವರಣದ ಮಂಗಳ ಸಭಾಂಗಣದಲ್ಲಿ ನಡೆಯಿತು.
ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಕರ್ನಾಟಕದ ರಾಜ್ಯಪಾಲರು ಹಾಗೂ ವಿಶ್ವವಿದ್ಯಾನಿಲಯದ ಕುಲಾಧಿಪತಿ ಥಾವರ್ ಚಂದ್ ಗೆಹ್ಲೋಟ್ ಅವರು, ಅಕ್ಷರ ಸಂತ ಹಾಗೂ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಮತ್ತು ದೈವ ನರ್ತಕ ರವೀಶ್ ಪಡುಮಲೆ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಈ ಸಂದರ್ಭದಲ್ಲಿ ಮಾಡಿದರು.
ಇದೇ ವೇಳೆ ತೆಂಕುತಿಟ್ಟಿನ ಹಿರಿಯ ಕಲಾವಿದ ಸೂರಿಕುಮೇರು ಗೋವಿಂದ ಭಟ್ (ಮರಣೋತ್ತರ) ಅವರಿಗೆ ಘೋಷಣೆಯಾಗಿರುವ ಗೌರವ ಡಾಕ್ಟರೇಟ್ ಅನ್ನು ಏಪ್ರಿಲ್ 13ರಂದು ಅವರ ನಿವಾಸಕ್ಕೆ ತೆರಳಿ ಕುಟುಂಬಸ್ಥರಿಗೆ ಹಸ್ತಾಂತರಿಸಲಾಗುವುದು ಎಂದು ತಿಳಿಸಲಾಯಿತು.
ಘಟಿಕೋತ್ಸವದಲ್ಲಿ ರಾಜ್ಯಪಾಲರು ಪದವಿ ಪಡೆದ ಎಲ್ಲಾ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಿದರು. ಈ ಸಂದರ್ಭದಲ್ಲಿ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಘಟಿಕೋತ್ಸವ ಭಾಷಣ ಮಾಡಿದರು.
ಕಾರ್ಯಕ್ರಮದಲ್ಲಿ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಪಿ.ಎಲ್. ಧರ್ಮ, ಕುಲಸಚಿವ (ಪರೀಕ್ಷಾಂಗ) ಪ್ರೊ. ದೇವೇಂದ್ರಪ್ಪ, ಪ್ರಭಾರ ಕುಲಸಚಿವ ಗಣೇಶ್ ಸಂಜೀವ ಹಾಗೂ ಹಣಕಾಸು ಅಧಿಕಾರಿ ಡಾ. ವೈ. ಸಂಗಪ್ಪ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.