ಎಂ. ಮೋಹನ್ ಆಳ್ವರಿಗೆ ಗೌರವ ಡಾಕ್ಟರೇಟ್ ಘೋಷಣೆ

ಬೆಂಗಳೂರು: ಶೈಕ್ಷಣಿಕ, ಸಾಂಸ್ಕೃತಿಕ ಹಾಗೂ ಕ್ರೀಡಾ ಕ್ಷೇತ್ರಗಳಲ್ಲಿ ವಿದ್ಯಾರ್ಥಿಗಳ ಸಾಧನೆಗೆ ಮಹತ್ವದ ಕೊಡುಗೆ ನೀಡಿದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಎಂ. ಮೋಹನ್ ಆಳ್ವ ಅವರಿಗೆ ಬೆಂಗಳೂರು ನಗರ ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ಘೋಷಿಸಿದೆ.

ಏಪ್ರಿಲ್ 4ರಂದು ಬೆಂಗಳೂರಿನ ಅರಮನೆ ರಸ್ತೆಯಲ್ಲಿರುವ ಜ್ಞಾನಜ್ಯೋತಿ ಸಭಾಂಗಣದಲ್ಲಿ ನಡೆಯಲಿರುವ ವಿಶ್ವವಿದ್ಯಾಲಯದ 5ನೇ ವಾರ್ಷಿಕ ಘಟಿಕೋತ್ಸವ ಸಮಾರಂಭದಲ್ಲಿ ಈ ಗೌರವವನ್ನು ಪ್ರದಾನ ಮಾಡಲಾಗುತ್ತದೆ.

ಎಂ. ಮೋಹನ್ ಆಳ್ವರು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಸ್ಥಾಪಕ ಅಧ್ಯಕ್ಷರಾಗಿದ್ದು, ಕರಾವಳಿ ಕರ್ನಾಟಕದ ಗ್ರಾಮೀಣ ಪ್ರದೇಶಗಳಿಗೆ ಗುಣಮಟ್ಟದ ಶಿಕ್ಷಣವನ್ನು ತಲುಪಿಸಿದ ಪ್ರಮುಖ ಶಿಕ್ಷಣತಜ್ಞರಲ್ಲಿ ಒಬ್ಬರಾಗಿದ್ದಾರೆ. ಮೂಡುಬಿದಿರೆಯನ್ನು ಕೇಂದ್ರವಾಗಿಟ್ಟುಕೊಂಡು ಕಾರ್ಯನಿರ್ವಹಿಸುತ್ತಿರುವ ಆಳ್ವಾಸ್ ಸಂಸ್ಥೆಗಳ ಮೂಲಕ ಪ್ರಾಥಮಿಕದಿಂದ ಉನ್ನತ ಶಿಕ್ಷಣದವರೆಗೆ ನೂರಾರು ಕೋರ್ಸ್‌ಗಳನ್ನು ಆರಂಭಿಸಿ ಸಾವಿರಾರು ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಅವರು ಮಹತ್ವದ ಪಾತ್ರವಹಿಸಿದ್ದಾರೆ.

ಇವರ ನೇತೃತ್ವದಲ್ಲಿ ಶಿಕ್ಷಣದ ಜೊತೆಗೆ ಕಲೆ, ಸಂಸ್ಕೃತಿ, ಕ್ರೀಡೆ ಮತ್ತು ವ್ಯಕ್ತಿತ್ವ ವಿಕಸನಕ್ಕೂ ಸಮಾನ ಪ್ರಾಮುಖ್ಯತೆ ನೀಡಲಾಗಿದೆ. ‘ಆಳ್ವಾಸ್ ನುಡಿಸಿರಿ’ ಮತ್ತು ‘ವಿರಾಸತ್’ ಸೇರಿದಂತೆ ಹಲವು ಸಾಹಿತ್ಯ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳ ಮೂಲಕ ಭಾರತೀಯ ಪರಂಪರೆಯನ್ನು ಉತ್ತೇಜಿಸುವಲ್ಲಿ ಎಂ. ಮೋಹನ್ ಆಳ್ವರ ಪಾತ್ರ ವಿಶಿಷ್ಟವಾಗಿದೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!