ಮಂಗಳೂರು: ಮಹಿಳೆಯರಿಗೆ ರಾಜಕೀಯ ಪ್ರಾತಿನಿಧ್ಯ ನೀಡುವ ಉದ್ದೇಶದ ‘ನಾರಿ ಶಕ್ತಿ ವಂದನಾ’ ಕಾಯ್ದೆ ಸೋತಿರುವುದು ಮಹಿಳೆಯರಿಗೆ ಮಾಡಿದ ಅಪಮಾನ ಎಂದು ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ಡಾ. ಮಂಜುಳಾ ಅನಿಲ್ ರಾವ್ ಆರೋಪಿಸಿದ್ದಾರೆ.
ಭಾರತೀಯ ಜನತಾ ಪಕ್ಷ ಜಿಲ್ಲಾ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಧಾನಮಂತ್ರಿ ನರೇಂದ್ರ ಮೋದಿ ಮಹಿಳೆಯರಿಗೆ ರಾಜಕೀಯ ಅವಕಾಶ ನೀಡಲು ಮಾಡಿದ ಪ್ರಯತ್ನಕ್ಕೆ ಕಾಂಗ್ರೆಸ್ ಹಾಗೂ ಅದರ ಮಿತ್ರಪಕ್ಷಗಳು ಅಡ್ಡಿಯಾಗಿವೆ ಎಂದು ಕಿಡಿಕಾರಿದರು.
‘ನಾರಿ ಶಕ್ತಿ ವಂದನಾ’ ಕಾಯ್ದೆಗೆ ಸೋಲುಂಟಾಗಿರುವುದು ದೇಶದ ಪ್ರಜಾಪ್ರಭುತ್ವದ ಇತಿಹಾಸದಲ್ಲಿ ಕರಾಳ ದಿನವಾಗಿದೆ ಎಂದು ಅವರು ಅಭಿಪ್ರಾಯಪಟ್ಟರು. ಸಂವಿಧಾನದ ಆಶಯಗಳನ್ನು ಮೀರಿ, ಜನರ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹತ್ತಿಕ್ಕುವುದು ಕಾಂಗ್ರೆಸ್ ಸಂಸ್ಕೃತಿ ಎಂದು ಆರೋಪಿಸಿದರು.
ಪ್ರಸ್ತುತ ರಾಜಕೀಯ ಪರಿಸ್ಥಿತಿಯಲ್ಲಿ ಕಾಂಗ್ರೆಸ್ ಮತ್ತು ಅದರ ಮಿತ್ರಪಕ್ಷಗಳು ‘ಇಂಡಿಯಾ’ ಕೂಟದ ಹೆಸರಿನಲ್ಲಿ ಮಹಿಳೆಯರ ಹಕ್ಕುಗಳನ್ನು ಹಿಂಸಿಸಲು ಯತ್ನಿಸಿವೆ ಎಂದು ಟೀಕಿಸಿದರು. ಡಾ. ಬಿ.ಆರ್. ಅಂಬೇಡ್ಕರ್ ಹಾಗೂ ಬಸವಣ್ಣ ಪ್ರತಿಪಾದಿಸಿದ ಲಿಂಗ ಸಮಾನತೆಯ ಮೌಲ್ಯಗಳಿಗೆ ಧಕ್ಕೆ ತರುವ ರೀತಿಯಲ್ಲಿ ನಡೆದುಕೊಂಡಿವೆ ಎಂದು ಹೇಳಿದರು.
ಮಹಿಳಾ ಮೀಸಲಾತಿ ಜಾರಿಯಾಗಿದ್ದರೆ ಅದು ಇತಿಹಾಸದಲ್ಲಿ ಸುವರ್ಣಾಕ್ಷರದಲ್ಲಿ ದಾಖಲಾಗುತ್ತಿತ್ತು. ಆದರೆ ಕಾಂಗ್ರೆಸ್ ಮತ್ತು ಅದರ ಮಿತ್ರಪಕ್ಷಗಳು ಮಹಿಳಾ ವಿರೋಧಿ ಧೋರಣೆ ತೋರಿಸಿವೆ ಎಂದು ಆರೋಪಿಸಿದರು.
ಪತ್ರಿಕಾಗೋಷ್ಠಿಯಲ್ಲಿ ರಾಜ್ಯ ಮಹಿಳಾ ಮೋರ್ಚಾ ಕಾರ್ಯದರ್ಶಿ ಶ್ವೇತಾ ಪೂಜಾರಿ, ಉಪಾಧ್ಯಕ್ಷೆ ಪೂಜಾ ಪೈ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಂಧ್ಯಾ ವೆಂಕಟೇಶ್ ಹಾಗೂ ದಕ್ಷಿಣ ಮಂಡಲ ಅಧ್ಯಕ್ಷೆ ಪೂರ್ಣಿಮಾ ರಾವ್ ಉಪಸ್ಥಿತರಿದ್ದರು.