ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನ ಬದಲಾವಣೆಯ ಚರ್ಚೆಗಳು ಜೋರಾಗಿದ್ದರೂ ಅಭಿವೃದ್ಧಿ ವಿಷಯಗಳು ಕಡೆಗಣನೆಗೊಳ್ಳುತ್ತಿವೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.
ನಗರದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸ್ಥಾನಕ್ಕಾಗಿ ಸಿದ್ದರಾಮಯ್ಯ, ಡಿ ಕೆ ಶಿವಕುಮಾರ್ ಹಾಗೂ ಜಿ. ಪರಮೇಶ್ವರ ನಡುವೆ ಪೈಪೋಟಿ ನಡೆಯುತ್ತಿದೆ ಎಂದು ಆರೋಪಿಸಿದರು. ಈ ಹಿನ್ನೆಲೆ ನಾಯಕರು ದೆಹಲಿಗೆ ತೆರಳುತ್ತಿದ್ದಾರೆ. ಆದರೆ ಜನರ ಸಮಸ್ಯೆಗಳತ್ತ ಸರ್ಕಾರ ಕಿವಿಗೊಡುತ್ತಿಲ್ಲ ಎಂದು ಟೀಕಿಸಿದರು. ಕ್ಯಾಬಿನೆಟ್‌ನಲ್ಲಿ ಮುಸ್ಲಿಂ ಸಮುದಾಯದ ಕೇರಿ ಅಭಿವೃದ್ಧಿಗೆ ₹600 ಕೋಟಿ ಬಿಡುಗಡೆ ಮಾಡಿರುವುದು ಓಲೈಕೆ ರಾಜಕಾರಣದ ಭಾಗವಾಗಿದೆ. ಆದರೆ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಅಭಿವೃದ್ಧಿಗೆ ಅಗತ್ಯ ಅನುದಾನ ನೀಡದೆ ಹಿಂದುಳಿದ ವರ್ಗಗಳಿಗೆ ಅನ್ಯಾಯ ಮಾಡಲಾಗಿದೆ ಎಂದು ಆರೋಪಿಸಿದರು.
ಸರ್ವರ್ ಸಮಸ್ಯೆಯಿಂದ ಕಂದಾಯ ಇಲಾಖೆಯ ಕಾರ್ಯಗಳು ಸ್ಥಗಿತಗೊಂಡಿದ್ದು, ಜಿಲ್ಲೆಯಲ್ಲಿ 10 ಸಾವಿರದಿಂದ 15 ಸಾವಿರ ಅರ್ಜಿಗಳು ವಿಲೇವಾರಿಯಾಗದೆ ಬಾಕಿ ಉಳಿದಿವೆ. ಇದರಿಂದ ಬಡ ಹಾಗೂ ಮಧ್ಯಮ ವರ್ಗದ ಜನರಿಗೆ ತೀವ್ರ ತೊಂದರೆ ಉಂಟಾಗಿದೆ ಎಂದರು. ಗ್ರಾಮ ಪಂಚಾಯತ್‌ಗಳಲ್ಲಿ ಇ-ಸ್ವತ್ತು 2.0 ತಂತ್ರಾಂಶದ ದೋಷದಿಂದ ಸಾರ್ವಜನಿಕರು ಸಂಕಷ್ಟ ಅನುಭವಿಸುತ್ತಿದ್ದಾರೆ. ಡಿಸೆಂಬರ್ 26ರಿಂದ ಜಾರಿಯಾದ ಈ ವ್ಯವಸ್ಥೆಯಲ್ಲಿ ತಾಂತ್ರಿಕ ತೊಂದರೆಗಳಿಂದ ಫಾರ್ಮ್ 11ಎ ಮತ್ತು 11ಬಿ ಪಡೆಯಲು ಜನರು ಮೂರು ತಿಂಗಳಿಗೂ ಹೆಚ್ಚು ಕಾಲ ಪರದಾಡುವಂತಾಗಿದೆ ಎಂದು ಹೇಳಿದರು.
ಈ ಸಮಸ್ಯೆ ಪರಿಹಾರವಾಗುತ್ತದೆ ಎಂದು ಸಚಿವರು ಭರವಸೆ ನೀಡಿದ್ದರೂ ಇದುವರೆಗೆ ಯಾವುದೇ ಸುಧಾರಣೆ ಕಂಡುಬಂದಿಲ್ಲ. ಭೂ ಖರೀದಿ, ಮನೆ ನಿರ್ಮಾಣ ಮತ್ತು ಬ್ಯಾಂಕ್ ಸಾಲ ಪ್ರಕ್ರಿಯೆಗಳು ಕೂಡ ಅಡಚಣೆಗೆ ಒಳಗಾಗಿವೆ ಎಂದು ಅವರು ಆರೋಪಿಸಿದರು. ಕಂದಾಯ ಮತ್ತು ಪಂಚಾಯತ್ ರಾಜ್ ಇಲಾಖೆಗಳು ಸಮರ್ಪಕ ಸ್ಪಂದನೆ ನೀಡುತ್ತಿಲ್ಲ. ಗ್ರಾಮ ಪಂಚಾಯತ್ ಅವಧಿ ಮುಗಿದಿದ್ದರೂ ಚುನಾವಣೆ ನಡೆಯದ ಹಿನ್ನೆಲೆ ಅಧಿಕಾರಿಗಳ ನಿರ್ಲಕ್ಷ್ಯ ಹೆಚ್ಚಾಗಿದೆ ಎಂದು ಟೀಕಿಸಿದರು. ಸರ್ಕಾರ ತಕ್ಷಣ ಸಮಸ್ಯೆ ಪರಿಹರಿಸದಿದ್ದರೆ ದೊಡ್ಡ ಮಟ್ಟದ ಹೋರಾಟ ಕೈಗೊಳ್ಳುವುದಾಗಿ ಎಚ್ಚರಿಸಿದರು.
ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅಭಿನಂದನೋತ್ಸವ …. ! ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರ ಸಾಮಾಜಿಕ – ರಾಜಕೀಯ ಸೇವೆಯ ಐವತ್ತು ವರ್ಷಗಳ ಸಾಧನೆ ಅಂಗವಾಗಿ ಚಿತ್ರದುರ್ಗದಲ್ಲಿ ಅಭಿನಂದನೋತ್ಸವ ಕಾರ್ಯಕ್ರಮವನ್ನು ರಾಜ್ಯ ಬಿಜೆಪಿ ಆಯೋಜಿಸಿದೆ.
ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿದಂತೆ ಹಲವು ರಾಷ್ಟ್ರೀಯ ನಾಯಕರು ಭಾಗವಹಿಸಲಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಿಂದ ಸುಮಾರು ಐದು ಸಾವಿರಕ್ಕೂ ಅಧಿಕ ಕಾರ್ಯಕರ್ತರು ಭಾಗವಹಿಸುವ ನಿರ್ಧಾರ ಕೈಗೊಳ್ಳಲಾಗಿದೆ.
ರಾಜ್ಯ ತಂಡದ ಪರವಾಗಿ ಶಾಸಕ ವೇದವ್ಯಾಸ್ ಕಾಮತ್ ಅವರಿಗೆ ಜಿಲ್ಲಾ ಜವಾಬ್ದಾರಿ ನೀಡಲಾಗಿದೆ. ಕಾರ್ಯಕ್ರಮ ಸಂಯೋಜನೆಯನ್ನು ವಿಧಾನ ಪರಿಷತ್ ಸದಸ್ಯ ಕಿಶೋರ್ ಪುತ್ತೂರು ವಹಿಸಿಕೊಂಡಿದ್ದು, ಸಹ ಸಂಚಾಲಕರಾಗಿ ನಂದನ್ ಮಲ್ಯ ಮತ್ತು ಮಹೇಶ್ ಜೋಗಿ ನೇಮಕಗೊಂಡಿದ್ದಾರೆ.
ಮೇ 9ರಂದು ನಡೆಯುವ ಕಾರ್ಯಕ್ರಮಕ್ಕೆ ಜಿಲ್ಲೆಯಲ್ಲಿ ವ್ಯಾಪಕ ಪ್ರಚಾರ ಕಾರ್ಯ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಲಾಗಿದೆ.
ಪತ್ರಿಕಾಗೋಷ್ಠಿಯಲ್ಲಿ ವಿಧಾನ ಪರಿಷತ್ ಸದಸ್ಯ ಕಿಶೋರ್ ಪುತ್ತೂರು , ಬಿಜೆಪಿ ಮುಖಂಡರಾದ ಪ್ರೇಮಾನಂದ ಶೆಟ್ಟಿ , ಸಂಜಯ್ ಪ್ರಭು , ಮಹೇಶ್ ಜೋಗಿ , ರಮೇಶ್ ಕಂಡೆಟ್ಟು , ನಂದನ್ ಮಲ್ಯ , ವಸಂತ್ ಪೂಜಾರಿ ಉಪಸ್ಥಿತರಿದ್ದರು .