ಬಿ.ಎಸ್.ವೈ ಅಭಿಮಾನೋತ್ಸವಕ್ಕೆ ಡಿಕೆ ಬಿಜೆಪಿ ಸಜ್ಜು: ವಾಹನ ಸ್ಟಿಕ್ಕರ್ ಅಭಿಯಾನಕ್ಕೆ ಚಾಲನೆ

ಮಂಗಳೂರು, ಮೇ 2: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಸಮಾಜ ಸೇವೆಯ 50 ವರ್ಷಗಳ ಸಂಭ್ರಮಾಚರಣೆಯ ಅಂಗವಾಗಿ ಚಿತ್ರದುರ್ಗದಲ್ಲಿ ನಡೆಯಲಿರುವ ‘ಬಿ.ಎಸ್.ವೈ ಅಭಿಮಾನೋತ್ಸವ’ ಕಾರ್ಯಕ್ರಮದ ಹಿನ್ನೆಲೆ, ದಕ್ಷಿಣ ಕನ್ನಡ ಭಾರತೀಯ ಜನತಾ ಪಾರ್ಟಿ ವತಿಯಿಂದ ವಾಹನಗಳಿಗೆ ಸ್ಟಿಕ್ಕರ್ ಅಂಟಿಸುವ ಅಭಿಯಾನಕ್ಕೆ ಚಾಲನೆ ನೀಡಲಾಯಿತು.

ನಗರದ ಜಿಲ್ಲಾ ಬಿಜೆಪಿ ಕಚೇರಿ ಮುಂಭಾಗ ನಡೆದ ಕಾರ್ಯಕ್ರಮದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಮಾತನಾಡಿ, ಇದೇ ತಿಂಗಳ 9ರಂದು ನಡೆಯಲಿರುವ ಅಭಿಮಾನೋತ್ಸವಕ್ಕೆ ಹಲವು ಗಣ್ಯರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು. ಯಡಿಯೂರಪ್ಪ ಅವರು 50 ವರ್ಷಗಳ ಕಾಲ ಸಾಮಾಜಿಕ ಹಾಗೂ ರಾಜಕೀಯ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆಯನ್ನು ಸ್ಮರಿಸುವ ಉದ್ದೇಶದಿಂದ ಈ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು.

ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಿಂದ ಐದು ಸಾವಿರಕ್ಕೂ ಅಧಿಕ ಕಾರ್ಯಕರ್ತರು ಚಿತ್ರದುರ್ಗಕ್ಕೆ ತೆರಳಲಿದ್ದಾರೆ ಎಂದು ಹೇಳಿದರು.

ಈ ವೇಳೆ ಮಾತನಾಡಿದ ದಕ್ಷಿಣ ಕನ್ನಡ ಜಿಲ್ಲಾ ಸಂಸದ ಬ್ರಿಜೇಶ್ ಚೌಟ, ದಕ್ಷಿಣ ಭಾರತದಲ್ಲಿ ಬಿಜೆಪಿ ಬಲವರ್ಧನೆಗೆ ಮಹತ್ವದ ಪಾತ್ರವಹಿಸಿರುವ ಯಡಿಯೂರಪ್ಪ ಅವರ ಅಭಿಮಾನೋತ್ಸವಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾಗವಹಿಸಲಿದ್ದಾರೆ ಎಂದು ಹೇಳಿದರು.

ಈ ಕಾರ್ಯಕ್ರಮ ಮುಂದಿನ ಚುನಾವಣೆಗೆ ಕಾರ್ಯಕರ್ತರಿಗೆ ಹೊಸ ಉತ್ಸಾಹ ಮತ್ತು ಪ್ರೇರಣೆಯನ್ನು ನೀಡಲಿದ್ದು, ಯಡಿಯೂರಪ್ಪ ಅವರ 50 ವರ್ಷಗಳ ಸಾಧನೆ, ಜನಪರ ಹೋರಾಟಗಳು ಹಾಗೂ ಆಡಳಿತ ಸಾಧನೆಗಳನ್ನು ಸ್ಮರಿಸುವ ಮೂಲಕ ಹೊಸ ಸ್ಫೂರ್ತಿ ತುಂಬುವ ಉದ್ದೇಶ ಹೊಂದಲಾಗಿದೆ ಎಂದು ಹೇಳಿದರು.

ಈ ಅಭಿಯಾನಕ್ಕೆ ಸಂಸದ ಬ್ರಿಜೇಶ್ ಚೌಟ, ಶಾಸಕರಾದ ವೇದವ್ಯಾಸ ಕಾಮತ್ ಹಾಗೂ ಭರತ್ ಶೆಟ್ಟಿ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರಾದ ಪ್ರೇಮಾನಂದ ಶೆಟ್ಟಿ, ಮಹೇಶ್ ಜೋಗಿ, ನಂದನ್ ಮಲ್ಯ, ಸುಧೀರ್ ಶೆಟ್ಟಿ ಕಣ್ಣೂರು, ರವೀಂದ್ರ ಶೆಟ್ಟಿ ಉಳಿದೊಟ್ಟು, ಕವಿತಾ ಸನಿಲ್, ಪೂರ್ಣಿಮಾ ಸೇರಿದಂತೆ ಹಲವರು ಉಪಸ್ಥಿತರಿದ್ದರು.

SHARE
Loading spinner

Leave a Reply

Your email address will not be published. Required fields are marked *

error: Content is protected !!