ಮಂಗಳೂರು: Government Tool Room and Training Centre (ಜಿ.ಟಿ.ಟಿ.ಸಿ.) ಬೈಕಂಪಾಡಿಯ ಡಿಪ್ಲೋಮಾ ಕಾಲೇಜಿನಲ್ಲಿ 2026-27ನೇ ಸಾಲಿನ ಡಿಪ್ಲೋಮಾ ಕೋರ್ಸುಗಳಿಗೆ ಪ್ರವೇಶಾತಿ ಪ್ರಕ್ರಿಯೆ ಪ್ರಾರಂಭವಾಗಿದೆ ಎಂದು ಕಾಲೇಜಿನ ಪ್ರಾಂಶುಪಾಲರಾದ ಲಕ್ಷ್ಮೀ ನಾರಾಯಣ ತಿಳಿಸಿದ್ದಾರೆ.
ನಗರದ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಸ್ತುತ ಕಾಲೇಜಿನಲ್ಲಿ ಡಿಪ್ಲೋಮಾ ಇನ್ ಟೂಲ್ ಅಂಡ್ ಡೈ ಮೇಕಿಂಗ್, ಡಿಪ್ಲೋಮಾ ಇನ್ ಪ್ರಿಸಿಷನ್ ಮ್ಯಾನ್ಯುಫ್ಯಾಕ್ಚರಿಂಗ್ ಹಾಗೂ ಡಿಪ್ಲೋಮಾ ಇನ್ ಆರ್ಟಿಫಿಷಿಯಲ್ ಇಂಟಲಿಜೆನ್ಸ್ ಕೋರ್ಸುಗಳು ಲಭ್ಯವಿವೆ ಎಂದರು. ಮೊದಲ ಎರಡು ಕೋರ್ಸುಗಳು ಮೆಕ್ಯಾನಿಕಲ್ ಇಂಜಿನಿಯರಿಂಗ್‌ಗೆ ಸಂಬಂಧಿಸಿದ್ದಾಗಿದ್ದು, ಮೂರನೆಯದು ಕಂಪ್ಯೂಟರ್ ಸೈನ್ಸ್ ಮತ್ತು ಇಂಜಿನಿಯರಿಂಗ್‌ಗೆ ಸಂಬಂಧಿಸಿದೆ ಎಂದು ತಿಳಿಸಿದರು.
ಈ ಕೋರ್ಸುಗಳಿಗೆ ಸೇರ್ಪಡೆಯಾಗಲು ಕನಿಷ್ಠ ವಿದ್ಯಾರ್ಹತೆ ಎಸ್.ಎಸ್.ಎಲ್.ಸಿ. ಉತ್ತೀರ್ಣರಾಗಿರಬೇಕು. ಕೋರ್ಸುಗಳ ಅವಧಿ ನಾಲ್ಕು ವರ್ಷಗಳಾಗಿದ್ದು, ನಾಲ್ಕನೇ ವರ್ಷದಲ್ಲಿ ವಿದ್ಯಾರ್ಥಿಗಳಿಗೆ ಪ್ರತಿಷ್ಠಿತ ಕೈಗಾರಿಕೆಗಳಲ್ಲಿ ಕಡ್ಡಾಯ ಒಂದು ವರ್ಷದ ಇಂಟರ್ನ್‌ಶಿಪ್ ಅವಕಾಶ ಕಲ್ಪಿಸಲಾಗುತ್ತದೆ ಎಂದರು. ಈ ಅವಧಿಯಲ್ಲಿ ವಿದ್ಯಾರ್ಥಿಗಳಿಗೆ ಪ್ರತಿ ತಿಂಗಳು ರೂ.18,000ರಿಂದ 23,000ರವರೆಗೆ ಸ್ಟೈಪೆಂಡ್ ನೀಡಲಾಗುತ್ತದೆ ಎಂದು ವಿವರಿಸಿದರು.
ಜಿ.ಟಿ.ಟಿ.ಸಿ.ಯಲ್ಲಿ ತರಬೇತಿ ಪಡೆದ ವಿದ್ಯಾರ್ಥಿಗಳು ಕರ್ನಾಟಕ ಸೇರಿದಂತೆ ದೇಶದ ವಿವಿಧ ಭಾಗಗಳು ಹಾಗೂ ವಿದೇಶಗಳಲ್ಲಿನ ಪ್ರಮುಖ ಕಂಪನಿಗಳಲ್ಲಿ ಉದ್ಯೋಗ ಪಡೆದಿದ್ದು, ತಾಂತ್ರಿಕ ಹಾಗೂ ಆರ್ಥಿಕ ಪ್ರಗತಿಯನ್ನು ಸಾಧಿಸಿದ್ದಾರೆ ಎಂಬ ಹೆಗ್ಗಳಿಕೆ ಸಂಸ್ಥೆಗೆ ಇದೆ ಎಂದರು. ಅರ್ಹ ವಿದ್ಯಾರ್ಥಿಗಳಿಗೆ ಸರ್ಕಾರದಿಂದ ವಿದ್ಯಾರ್ಥಿವೇತನ ಸೌಲಭ್ಯವೂ ಲಭ್ಯವಿದ್ದು, ಗ್ರಾಮೀಣ ಮತ್ತು ಸ್ಥಳೀಯ ವಿದ್ಯಾರ್ಥಿಗಳು ಇದರ ಪ್ರಯೋಜನ ಪಡೆಯಬಹುದು ಎಂದು ತಿಳಿಸಿದರು. ಮೇ 13 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದ್ದು, ಆಸಕ್ತ ವಿದ್ಯಾರ್ಥಿಗಳು ಸಮಯಮಿತಿಯೊಳಗೆ ಅರ್ಜಿ ಸಲ್ಲಿಸುವಂತೆ ಮನವಿ ಮಾಡಿದರು. ಪತ್ರಿಕಾಗೋಷ್ಠಿಯಲ್ಲಿ ಉಪನ್ಯಾಸಕರಾದ ಹೇಮಂತ್ ಕುಮಾರ್ ಹಾಗೂ ಸಂಧ್ಯಾ ಕೆ ಉಪಸ್ಥಿತರಿದ್ದರು.
ಹೆಚ್ಚಿನ ಮಾಹಿತಿಗಾಗಿ 9008263660, 7899070548, 9741490625, 0824-2408003 ಸಂಪರ್ಕಿಸಬಹುದು