ಬೆಂಗಳೂರು: ರಾಜ್ಯದ ಹಿರಿಯ ಐಪಿಎಸ್ ಅಧಿಕಾರಿ ಡಾ. ಕೆ. ರಾಮಚಂದ್ರ ರಾವ್ ವಿರುದ್ಧದ ವಿವಾದಾತ್ಮಕ ಪ್ರಕರಣಕ್ಕೆ ಇದೀಗ ಹೊಸ ತಿರುವು ಸಿಕ್ಕಿದ್ದು, ರಾಜ್ಯ ಸರ್ಕಾರ ಅವರ ಮೇಲಿನ ಅಮಾನತು ಆದೇಶವನ್ನು ಹಿಂತೆಗೆದುಕೊಂಡಿದೆ.
ಐಜಿಪಿ ಹುದ್ದೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ವೇಳೆ, ಕಚೇರಿಯಲ್ಲೇ ಪೊಲೀಸ್ ಸಮವಸ್ತ್ರದಲ್ಲಿ ಮಹಿಳೆಯರೊಂದಿಗೆ ಅಸಭ್ಯವಾಗಿ ವರ್ತಿಸಿರುವ ಆರೋಪದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ ಭಾರೀ ವಿವಾದಕ್ಕೆ ಕಾರಣವಾಗಿತ್ತು. ಪ್ರಕರಣ ಸಾರ್ವಜನಿಕ ಆಕ್ರೋಶಕ್ಕೆ ಗುರಿಯಾದ ಹಿನ್ನೆಲೆ ಸರ್ಕಾರ ತಕ್ಷಣ ಕ್ರಮ ಕೈಗೊಂಡು ಅವರನ್ನು ಅಮಾನತು ಮಾಡಿತ್ತು.
ಆದರೆ ಇದೀಗ, ಅವರ ಸೇವಾ ನಿವೃತ್ತಿ ಸಮೀಪಿಸುತ್ತಿರುವ ಹಿನ್ನೆಲೆ ಸರ್ಕಾರ ಅಮಾನತು ಆದೇಶ ಹಿಂಪಡೆದಿದೆ ಎಂದು ಮೂಲಗಳು ತಿಳಿಸಿವೆ. ಇದೇ ತಿಂಗಳ 31ರಂದು ರಾಮಚಂದ್ರ ರಾವ್ ನಿವೃತ್ತಿ ಹೊಂದಲಿದ್ದಾರೆ.ಇದೊಂದಿಗೇ, ಅವರಿಗೆ “ಡಿಜಿಪಿ ಪೊಲೀಸ್ ಮ್ಯಾನ್ಯುವಲ್” ಎಂಬ ಹೊಸ ಹುದ್ದೆ ಸೃಷ್ಟಿಸಿ ನಿಯೋಜನೆ ಮಾಡಲಾಗಿದೆ. ನಿವೃತ್ತಿವರೆಗೆ ಅವರು ಈ ಹುದ್ದೆಯಲ್ಲಿ ಕಾರ್ಯನಿರ್ವಹಿಸಲಿದ್ದಾರೆ ಎಂದು ತಿಳಿದುಬಂದಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಇಲಾಖೆ ಸಂಪೂರ್ಣ ತನಿಖೆ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸಿದ್ದು, ಅದರ ಆಧಾರದ ಮೇಲೆಯೇ ಮುಂದಿನ ಕ್ರಮ ಕೈಗೊಳ್ಳಲಾಗಿದೆ ಎನ್ನಲಾಗಿದೆ.