ಬಂಟ್ವಾಳ: ಕುಡಿಯುವ ನೀರು ಪೂರೈಕೆ ಸಂಬಂಧಿಸಿದಂತೆ ಗ್ರಾಮಮಟ್ಟದಲ್ಲಿ ಅಧಿಕಾರಿಗಳು ವಿಳಂಬ ಮಾಡದೆ ಜನರಿಗೆ ತೊಂದರೆ ಆಗದಂತೆ ಕಟ್ಟುನಿಟ್ಟಿನ ಕ್ರಮ ವಹಿಸಬೇಕು ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಹೇಳಿದರು.ಬಂಟ್ವಾಳ ತಾಪಂ ಸಭಾಂಗಣದಲ್ಲಿ ಸೋಮವಾರ ನಡೆದ ಪೂರ್ವಸಿದ್ಧತಾ ಸಭೆಯಲ್ಲಿ ಅವರು ಮಾತನಾಡಿ, ತಾಂತ್ರಿಕ ಸಮಸ್ಯೆಗಳನ್ನು ಬಗೆಹರಿಸಿಕೊಂಡು ಕ್ರಮ ಕೈಗೊಳ್ಳಲು ಸೂಚಿಸಿದರು.
ಕುಡಿಯುವ ನೀರಿಗೆ ಸಂಬಂಧಿಸಿದಂತೆ ಕೆಲಸ ಮಾಡಿಸಿ ಮತ್ತೆ ಅನುದಾನ ಹೊಂದಿಸಿಕೊಳ್ಳಬಹುದು ಎಂದರು.ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರ ವ್ಯಾಪ್ತಿಯಲ್ಲಿ ಇರುವ ಗ್ರಾಪಂಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾದರೆ ಗಮನಕ್ಕೆ ತನ್ನಿ ಎಂದರು.
ಜಲಜೀವನ್ ಮಿಷನ್, ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಪ್ರಗತಿ ಹಾಗೂ ಅದಕ್ಕೆ ಸಂಬಂಧಿಸಿದ ಸಮಸ್ಯೆಗಳ ಕುರಿತು ಸಮಗ್ರ ವರದಿ ನೀಡುವಂತೆ ಶಾಸಕರು ಸೂಚಿಸಿದರು.ಬಹುಗ್ರಾಮ ಕುಡಿಯುವ ನೀರು ಯೋಜನೆಗೆ ಸಂಬಂಧಿಸಿದಂತೆ ನೀರು ಪೂರೈಕೆಗೆ ವಿದ್ಯುತ್ ಪೂರೈಕೆ ಸಮಸ್ಯೆಯ ಕುರಿತು ಮಾತನಾಡಿದ ಶಾಸಕರು, ಜಲಜೀವನ್ ಮಿಷನ್ ಮತ್ತು ಮೆಸ್ಕಾಂ ಅಧಿಕಾರಿಗಳು ತಹಸೀಲ್ದಾರ್ ನೇತೃತ್ವದಲ್ಲಿ ಸಭೆ ಕರೆದು ಬಗೆಹರಿಸಬೇಕು ಎಂದರು.
ಮಣಿನಾಲ್ಕೂರು ಗ್ರಾಮದ ನೆಕ್ಕರಾಜೆ ಎಂಬಲ್ಲಿ ನೀರಿನ ಸಮಸ್ಯೆ ಇರುವ ಕುರಿತು ಸ್ಥಳೀಯ ಪಿಡಿಒ ಸಭೆಯ ಗಮನಕ್ಕೆ ತಂದರು.
ಹದಿನೈದನೇ ಹಣಕಾಸು ನಿಧಿ ಬಳಕೆ ಮಾಡಿ ಪರಿಹರಿಸುವಂತೆ ಶಾಸಕರು ಸೂಚಿಸಿದರು. ಬಂಟ್ವಾಳ ತಹಸೀಲ್ದಾರ್ ಮಂಜುನಾಥ್, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಸಚಿನ್ ಕುಮಾರ್, ಗ್ರಾಪಂ ಆಡಳಿತಾಧಿಕಾರಿಗಳು, ವಿವಿಧ ಇಲಾಖಾಧಿಕಾರಿಗಳು ಆಗಮಿಸಿದ್ದರು.