ನೀಟ್-ಯುಜಿ 2026 ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ ದೇಶದಾದ್ಯಂತ ವಿದ್ಯಾರ್ಥಿಗಳು ಹಾಗೂ ಪೋಷಕರಲ್ಲಿ ತೀವ್ರ ಆತಂಕ ಮತ್ತು ಗೊಂದಲಕ್ಕೆ ಕಾರಣವಾಗಿದ್ದು, ಕೇಂದ್ರ ಸರಕಾರದ ಶಿಕ್ಷಣ ವ್ಯವಸ್ಥೆಯ ಮೇಲಿನ ನಂಬಿಕೆಗೆ ಧಕ್ಕೆ ತಂದಿದೆ ಎಂದು ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮುಖಂಡೆ K. A. ಅಸ್ಮ ಹಸೈನಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿದ ಅವರು, “ಈ ಹಿಂದೆ ರಾಜ್ಯದಲ್ಲಿ ಯಶಸ್ವಿಯಾಗಿ ನಡೆಯುತ್ತಿದ್ದ CET ವ್ಯವಸ್ಥೆಯನ್ನು ಕಡೆಗಣಿಸಿ ಕೇಂದ್ರ ಸರಕಾರ NEET ಪರೀಕ್ಷೆ ಜಾರಿಗೊಳಿಸಿದ ಸಂದರ್ಭದಲ್ಲೇ ಹಲವು ಅನುಮಾನಗಳು ವ್ಯಕ್ತವಾಗಿದ್ದವು. ಇದೀಗ ಪ್ರಶ್ನೆಪತ್ರಿಕೆ ಸೋರಿಕೆಯಂತಹ ಗಂಭೀರ ಘಟನೆ ಸಂಭವಿಸಿರುವುದು ಆ ಅನುಮಾನಗಳಿಗೆ ಮತ್ತಷ್ಟು ಬಲ ನೀಡಿದೆ. ಇದು ಕೇವಲ ಪರೀಕ್ಷಾ ಲೋಪವಲ್ಲ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯದ ಮೇಲೆ ನಡೆದ ಅಕ್ಷಮ್ಯ ಅಪರಾಧ” ಎಂದು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದರು.
ಪರೀಕ್ಷೆ ಬರೆದು ಮಾನಸಿಕ ಒತ್ತಡದಿಂದ ಹೊರಬರುವಷ್ಟರಲ್ಲಿ ಮತ್ತೆ ಪರೀಕ್ಷೆ ಬರೆಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿರುವುದು ವಿದ್ಯಾರ್ಥಿಗಳ ಮನೋಸ್ಥೈರ್ಯಕ್ಕೆ ಧಕ್ಕೆಯಾಗಿದೆ. ಗ್ರಾಮೀಣ ಭಾಗದ ಹಾಗೂ ಮಧ್ಯಮ ವರ್ಗದ ವಿದ್ಯಾರ್ಥಿಗಳು ಅಪಾರ ಶ್ರಮಪಟ್ಟು ಪರೀಕ್ಷೆಗೆ ಸಿದ್ಧತೆ ನಡೆಸಿದ್ದು, ಇಂತಹ ಘಟನೆಗಳು ಅವರಲ್ಲಿ ನಿರಾಸೆ ಮೂಡಿಸುತ್ತಿವೆ ಎಂದು ಅವರು ಹೇಳಿದರು.
ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಬಿಜೆಪಿ ಏಜೆಂಟ್‌ಗಳಿಗೆ ಸಂಬಂಧಿಸಿದ ಮುದ್ರಣ ಘಟಕಗಳ ಪಾತ್ರವಿದೆ ಎಂಬ ಅನುಮಾನ ಸಾರ್ವಜನಿಕ ವಲಯದಲ್ಲಿ ವ್ಯಕ್ತವಾಗುತ್ತಿದ್ದು, ಪ್ರಕರಣವನ್ನು ಉನ್ನತ ಮಟ್ಟದ ತನಿಖೆಗೆ ಒಪ್ಪಿಸಬೇಕು. ಇದರೊಂದಿಗೆ ಶಾಮೀಲಾದ ಅಧಿಕಾರಿಗಳನ್ನು ತಕ್ಷಣ ಅಮಾನತುಗೊಳಿಸಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಚೆಲ್ಲಾಟವಾಡುತ್ತಿರುವ ಕೇಂದ್ರ ಶಿಕ್ಷಣ ಸಚಿವರು ನೈತಿಕ ಹೊಣೆ ಹೊತ್ತು ತಕ್ಷಣ ರಾಜೀನಾಮೆ ನೀಡಬೇಕು. ಶಿಕ್ಷಣ ಕ್ಷೇತ್ರದಲ್ಲಿ ಪಾರದರ್ಶಕತೆ ಮತ್ತು ವಿಶ್ವಾಸ ಉಳಿಸುವುದು ಕೇಂದ್ರ ಸರಕಾರದ ಕರ್ತವ್ಯವಾಗಿದ್ದು, ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕು ದೇಶಾದ್ಯಂತ ಎಲ್ಲಾ ವಿದ್ಯಾರ್ಥಿ ಸಂಘಡನೆಗಳು ಎಚ್ಚೆತ್ತುಕೊಳ್ಳಬೇಕು ಎಂದು K. A. ಅಸ್ಮ ಹಸೈನಾರ್ ತಾಳಿತ್ತನೂಜಿ ತಿಳಿಸಿದರು.