ಕರ್ನಾಟಕದ ಅವಿಭಾಜ್ಯ ಭಾಗವಾಗಿರುವ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಭೋವಿ ಜನಾಂಗದವರಿಗೆ ಜಾತಿ ಪ್ರಮಾಣ ಪತ್ರ ನೀಡುವುದನ್ನು ಕಳೆದ 7-8 ವರ್ಷಗಳಿಂದ ನಿರಾಕರಿಸಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ.
ಈ ಕುರಿತು ಪ್ರತಿಕ್ರಿಯಿಸಿರುವ ಭೋವಿ ಸಮಾಜದ ಯುವ ಮುಖಂಡ ಪವನ್ ಕುಮಾರ್, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುಮಾರು 30 ಸಾವಿರ ಹಾಗೂ ಉಡುಪಿ ಜಿಲ್ಲೆಯಲ್ಲಿ ಸುಮಾರು 40 ಸಾವಿರ ಭೋವಿ ಸಮುದಾಯದ ಜನರು ವಾಸವಾಗಿದ್ದು, ರಾಜ್ಯದ ಇತರ 31 ಜಿಲ್ಲೆಗಳಲ್ಲಿ ಜಾರಿಯಲ್ಲಿರುವ ಒಂದೇ ಕಾನೂನು ಈ ಎರಡು ಜಿಲ್ಲೆಗಳಲ್ಲಿ ಅನ್ವಯವಾಗದಿರುವುದು ಖಂಡನೀಯ ಎಂದು ತಿಳಿಸಿದ್ದಾರೆ.
“ಪ್ರಸ್ತುತ ದೊಡ್ಡ ಸಮಸ್ಯೆ ಎಂದರೆ, ಕೆಲವೆಡೆ ತಂದೆಗೆ ಜಾತಿ ಪ್ರಮಾಣ ಪತ್ರ ನೀಡಲಾಗುತ್ತಿದ್ದು ಮಕ್ಕಳಿಗೆ ನಿರಾಕರಿಸಲಾಗುತ್ತಿದೆ. ಮತ್ತೆ ಕೆಲವು ಸಂದರ್ಭಗಳಲ್ಲಿ ಮಕ್ಕಳಿಗೆ ನೀಡಿ ತಂದೆಗೆ ನೀಡಲಾಗುತ್ತಿಲ್ಲ. ಇದು ಎಷ್ಟರ ಮಟ್ಟಿಗೆ ನ್ಯಾಯಸಮ್ಮತ?” ಎಂದು ಅವರು ಪ್ರಶ್ನಿಸಿದ್ದಾರೆ.
ಜಾತಿ ಪ್ರಮಾಣ ಪತ್ರಕ್ಕಾಗಿ ಅರ್ಜಿ ಸಲ್ಲಿಸುವ ವೇಳೆ ಅಧಿಕಾರಿಗಳು ಸರಿಯಾದ ಹಿಂಬರಹ ಅಥವಾ ಸ್ಪಷ್ಟ ಕಾರಣ ನೀಡದೇ ಇರುವುದರಿಂದ ಜನರು ಸಂಕಷ್ಟ ಅನುಭವಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ಇದೇ ರೀತಿಯ ಸಮಸ್ಯೆ ಮುಂದುವರಿದರೆ ಮುಂದಿನ ದಿನಗಳಲ್ಲಿ ದೊಡ್ಡ ಮಟ್ಟದ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿರುವ ಪವನ್ ಕುಮಾರ್, ಜಿಲ್ಲಾಧಿಕಾರಿಗಳು ತಕ್ಷಣ ಮಧ್ಯಪ್ರವೇಶಿಸಿ ಸಮಸ್ಯೆಯನ್ನು ಶೀಘ್ರ ಪರಿಹರಿಸಬೇಕೆಂದು ಆಗ್ರಹಿಸಿದ್ದಾರೆ.