ಬಂಟ್ವಾಳ, ಮೇ 23: ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಅವರು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರ ನಿವಾಸಕ್ಕೆ ಭೇಟಿ ನೀಡಿ ಜಿಲ್ಲೆಯ ಅಭಿವೃದ್ಧಿ ಹಾಗೂ ಪಕ್ಷ ಸಂಘಟನೆಯ ಕುರಿತು ಜನಪ್ರತಿನಿಧಿಗಳೊಂದಿಗೆ ಚರ್ಚಿಸಿದರು.
ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಸಚಿವರನ್ನು ಹೂಗುಚ್ಚ ಹಾಗೂ ಶಾಲು ಹೊದಿಸಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಸಂಸದ ಕ್ಯಾ. ಬ್ರಿಜೇಶ್ ಚೌಟ, ಮಂಗಳೂರು ಉತ್ತರ ಶಾಸಕ ಡಾ. ವೈ. ಭರತ್ ಶೆಟ್ಟಿ ಹಾಗೂ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಉಪಸ್ಥಿತರಿದ್ದರು.
ಖಾಸಗಿ ಕಾರ್ಯಕ್ರಮದ ನಿಮಿತ್ತ ಮಂಗಳೂರಿಗೆ ಆಗಮಿಸಿದ್ದ ಸಚಿವರು ಬಳಿಕ ಗುರುಪುರ ಜಂಗಮ ಮಠಕ್ಕೆ ಭೇಟಿ ನೀಡಿ ಶ್ರೀ ಶ್ರೀ ರುದ್ರಮುನಿ ಮಹಾಸ್ವಾಮಿ ಹಾಗೂ ವಜ್ರದೇಹಿ ಮಠದ ಶ್ರೀ ಶ್ರೀ ರಾಜಶೇಖರಾನಂದ ಸ್ವಾಮೀಜಿಯವರ ಆಶೀರ್ವಾದ ಪಡೆದರು. ಮಠದ ಜೀರ್ಣೋದ್ಧಾರ ಕಾಮಗಾರಿಯನ್ನೂ ವೀಕ್ಷಿಸಿದರು.
ನಂತರ ಬಂಟ್ವಾಳ ಶಾಸಕರ ಗಂಜಿಮಠದ ಒಡ್ಡೂರು ಫಾರ್ಮ್ಸ್‌ಗೆ ಭೇಟಿ ನೀಡಿದ ಸಚಿವರು, ಜಿಲ್ಲೆಯ ಅಭಿವೃದ್ಧಿ, ಸ್ಥಳೀಯ ಸಂಸ್ಥೆ ಹಾಗೂ ವಿಧಾನಸಭಾ ಚುನಾವಣಾ ಸಿದ್ಧತೆಗಳ ಬಗ್ಗೆ ಮುಖಂಡರೊಂದಿಗೆ ಸಮಾಲೋಚನೆ ನಡೆಸಿದರು.
ಈ ವೇಳೆ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಬಂಟ್ವಾಳ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದ ರೈಲ್ವೆ ಅಭಿವೃದ್ಧಿ ಕಾಮಗಾರಿಗಳ ಕುರಿತು ಸಚಿವರಿಗೆ ಮನವಿ ಸಲ್ಲಿಸಿದರು.
ಮನವಿಯಲ್ಲಿ ಅಜ್ಜಿಬೆಟ್ಟು ಶಾಲೆ ಬಳಿ ರೈಲ್ವೆ ಬ್ರಿಡ್ಜ್ ನಿರ್ಮಾಣ, ಕುಂಭೋಧರಿ ದೇವಸ್ಥಾನ ಬಳಿ ಅಂಡರ್‌ಪಾಸ್, ಬಿ.ಮೂಡ ರೈಲ್ವೆ ನಿಲ್ದಾಣದ ಸಂಪರ್ಕ ರಸ್ತೆ ಅಭಿವೃದ್ಧಿ, ದೇವಸ್ಯ-ಕುದ್ರೆಮಾರ್ ಭಾಗಕ್ಕೆ ಅಂಡರ್‌ಪಾಸ್, ನೇರಳಕಟ್ಟೆ ರೈಲ್ವೆ ನಿಲ್ದಾಣ ಬಳಿ ಫುಟ್ ಬ್ರಿಡ್ಜ್ ನಿರ್ಮಾಣ ಹಾಗೂ ಮಂಗಳೂರು-ಬೆಂಗಳೂರು ರೈಲುಗಳಿಗೆ ನೇರಳಕಟ್ಟೆ ನಿಲ್ದಾಣದಲ್ಲಿ ನಿಲುಗಡೆ ನೀಡುವಂತೆ ಒಟ್ಟು ಆರು ಪ್ರಮುಖ ಬೇಡಿಕೆಗಳನ್ನು ಒಳಗೊಂಡಿತ್ತು.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಪೂಜಾ ಪೈ, ನಿತಿನ್ ಕುಮಾರ್, ಕವಿತಾ ಸನಿಲ್, ಅಮಿತ್ ಶೆಟ್ಟಿ, ಚೆನ್ನಪ್ಪ ಆರ್. ಕೋಟ್ಯಾನ್, ಶಿವಪ್ರಸಾದ್ ಶೆಟ್ಟಿ ಸೇರಿದಂತೆ ಹಲವು ಬಿಜೆಪಿ ಮುಖಂಡರು ಉಪಸ್ಥಿತರಿದ್ದರು.