ಮಂಗಳೂರು: ರಾಜ್ಯ ಸರ್ಕಾರ ಕೈಗೊಂಡಿರುವ ಸರಕಾರಿ ಆಸ್ಪತ್ರೆಗಳ ಖಾಸಗೀಕರಣ ನೀತಿಯನ್ನು ಖಂಡಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಮಂಗಳೂರು ನಗರ ಜಿಲ್ಲಾ ಸಮಿತಿಯ ವತಿಯಿಂದ ನಗರದ ಕ್ಲಾಕ್ ಟವರ್ ಬಳಿ ಪ್ರತಿಭಟನೆ ನಡೆಯಿತು.
ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ SDPI ಮಂಗಳೂರು ನಗರ ಜಿಲ್ಲಾ ಉಪಾಧ್ಯಕ್ಷ ಅಶ್ರಪ್ ಅಡ್ಡೂರು ಜಿಲ್ಲೆಯ ನಾಲ್ಕು ತಾಲೂಕು ಆಸ್ಪತ್ರೆಗಳನ್ನು ಖಾಸಗಿ ಆಸ್ಪತ್ರೆಗಳ ಸುಪರ್ದಿಗೆ ಒಪ್ಪಿಸುವ ಬದಲು ಅಲ್ಲಿಗೆ ಸರಕಾರಿ ತಜ್ಞ ವೈದ್ಯರನ್ನು ನೇಮಿಸಿ, ಅಗತ್ಯ ವೈದ್ಯಕೀಯ ಸೌಲಭ್ಯಗಳನ್ನು ಒದಗಿಸಿ ಉತ್ತಮ ಆರೋಗ್ಯ ಸೇವೆ ನೀಡುವಂತೆ ಮೇಲ್ದರ್ಜೆಗೆ ಏರಿಸಬೇಕೆಂದು ಒತ್ತಾಯಿಸಿದರು. ಸಾರ್ವಜನಿಕ ಆಸ್ಪತ್ರೆಗಳನ್ನು ಬಲಪಡಿಸುವುದೇ ಸರ್ಕಾರದ ಆದ್ಯತೆಯಾಗಬೇಕು ಎಂದು ಹೇಳಿದರು.
ಅವರು ಮುಂದುವರೆದು ಜನಸಾಮಾನ್ಯರ ಆರೋಗ್ಯ ಸೇವೆಯನ್ನು ವ್ಯಾಪಾರೀಕರಣಗೊಳಿಸುವ ಯಾವುದೇ ಪ್ರಯತ್ನವನ್ನು ಸಹಿಸಲಾಗುವುದಿಲ್ಲ ಎಂದು ಹೇಳಿದರು. ಮಂಗಳೂರಿನ ವೆನ್ಲಾಕ್ ಜಿಲ್ಲಾ ಆಸ್ಪತ್ರೆಗೆ ಕರಾವಳಿ ಸೇರಿದಂತೆ ಸುಮಾರು ಎಂಟು ಜಿಲ್ಲೆಗಳಿಂದ ರೋಗಿಗಳು ಚಿಕಿತ್ಸೆಗೆ ಬರುತ್ತಿದ್ದು, ಈ ಆಸ್ಪತ್ರೆಯನ್ನು ಪ್ರಾದೇಶಿಕ ಮಟ್ಟದಲ್ಲಿ ಮೇಲ್ದರ್ಜೆಗೆ ಏರಿಸಿ ಹೆಚ್ಚಿನ ಸೌಲಭ್ಯಗಳನ್ನು ಒದಗಿಸಬೇಕೆಂದು ಒತ್ತಾಯಿಸಿದರು.
SDPI ಮಂಗಳೂರು ನಗರ ಜಿಲ್ಲಾ ಕೋಶಾಧಿಕಾರಿ ಯಾಸೀನ್ ಅರ್ಕುಳ ಮಾತನಾಡಿ, ಆರೋಗ್ಯ ಸೇವೆ ಜನರ ಮೂಲಭೂತ ಹಕ್ಕಾಗಿದ್ದು ಅದನ್ನು ವ್ಯಾಪಾರವಾಗಿ ಪರಿವರ್ತಿಸುವುದು ಖಂಡನೀಯ ಎಂದರು. ಸರ್ಕಾರವು ಖಾಸಗಿ ಲಾಬಿಗಳ ಒತ್ತಡಕ್ಕೆ ಮಣಿಯದೆ ಬಡ ಹಾಗೂ ಮಧ್ಯಮ ವರ್ಗದ ಜನರ ಹಿತದೃಷ್ಟಿಯಿಂದ ಸರಕಾರಿ ಆಸ್ಪತ್ರೆಗಳನ್ನು ಮತ್ತಷ್ಟು ಬಲಪಡಿಸಬೇಕೆಂದು ಆಗ್ರಹಿಸಿದರು.
ಸರಕಾರ ತನ್ನ ಖಾಸಗೀಕರಣ ನೀತಿಯಿಂದ ಹಿಂದೆ ಸರಿಯದಿದ್ದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಹಮ್ಮಿಕೊಳ್ಳುವುದಾಗಿ ಪ್ರತಿಭಟನಾಕಾರರು ಎಚ್ಚರಿಕೆ ನೀಡಿದರು.
ಪ್ರತಿಭಟನೆಯಲ್ಲಿ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.