ಮಂಗಳೂರು, ಮೇ 25: ಸಮಾಜದ ಸ್ವಾಸ್ಥ್ಯ ಕಾಪಾಡುವ ಮಹತ್ವದ ಜವಾಬ್ದಾರಿಯನ್ನು ಪತ್ರಕರ್ತರು ನಿಭಾಯಿಸುತ್ತಿದ್ದು, ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸುವ ಪತ್ರಕರ್ತರನ್ನು ರಕ್ಷಿಸುವುದು ಸರ್ಕಾರದ ಕರ್ತವ್ಯ ಎಂದು ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ಹೇಳಿದರು.
ನಗರದ ರೆಡ್‌ಕ್ರಾಸ್ ಶತಮಾನೋತ್ಸವ ಕಟ್ಟಡದ ಪ್ರೇರಣಾ ಸಭಾಂಗಣದಲ್ಲಿ ಭಾನುವಾರ ನಡೆದ ಮಂಗಳೂರು ಪ್ರೆಸ್ ಕ್ಲಬ್ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
“ಪೊಲೀಸರಷ್ಟೇ ವೇಗವಾಗಿ ಘಟನಾ ಸ್ಥಳಗಳಿಗೆ ತೆರಳಿ, ಸಮಾಜಕ್ಕೆ ತಪ್ಪು ಸಂದೇಶ ಹೋಗದಂತೆ ವಿವೇಚನೆಯಿಂದ ವರದಿ ಮಾಡುವ ಪತ್ರಕರ್ತರ ಬದ್ಧತೆ ಶ್ಲಾಘನೀಯ” ಎಂದು ಹೇಳಿದರು.
ಈ ಸಂದರ್ಭದಲ್ಲಿ ಸಮಾಜಸೇವಕ ಹಾಗೂ ರಾಜಕೇಸರಿ ಟ್ರಸ್ಟ್ ಸಂಸ್ಥಾಪಕ ದೀಪಕ್ ಜಿ. ಬೆಳ್ತಂಗಡಿ ಅವರಿಗೆ 2016ನೇ ಸಾಲಿನ ಮಂಗಳೂರು ಪ್ರೆಸ್ ಕ್ಲಬ್ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಪ್ರಶಸ್ತಿ ಪ್ರದಾನ ಮಾಡಿದ ಮಂಗಳೂರು ನಗರ ಉಪ ಪೊಲೀಸ್ ಆಯುಕ್ತ ಎಚ್.ಎನ್. ಮಿಥುನ್ ಮಾತನಾಡಿ, “ಮಂಗಳೂರಿನ ಪತ್ರಕರ್ತರು ಸಂಯಮ ಮತ್ತು ಸಾಮಾಜಿಕ ಕಳಕಳಿಯಿಂದ ಕೆಲಸ ಮಾಡುತ್ತಿದ್ದಾರೆ. ನಿಸ್ವಾರ್ಥ ಸೇವಕರನ್ನು ಗುರುತಿಸುವ ಮೂಲಕ ಸಮಾಜಕ್ಕೆ ಉತ್ತಮ ಸಂದೇಶ ನೀಡಲಾಗಿದೆ” ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ. ಹರೀಶ್ ರೈ ವಹಿಸಿದ್ದರು. ರೆಡ್‌ಕ್ರಾಸ್ ಸೊಸೈಟಿ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಅಧ್ಯಕ್ಷ ಸಿಎ ಶಾಂತಾರಾಮ ಶೆಟ್ಟಿ ಪತ್ರಕರ್ತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಿಸಿದರು.
ವಾರ್ತಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಬಿ.ಎ. ಖಾದರ್ ಶಾ ಅವರು ಪ್ರೆಸ್ ಗೌರವ ಸನ್ಮಾನಕ್ಕೆ ಆಯ್ಕೆಯಾದವರನ್ನು ಗೌರವಿಸಿದರು.
ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಪುಷ್ಪರಾಜ್ ಬಿ.ಎನ್., ಪ್ರಧಾನ ಕಾರ್ಯದರ್ಶಿ ರಾಜೇಶ್ ಕೆ. ಪೂಜಾರಿ, ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ಅನ್ನು ಮಂಗಳೂರು, ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಶ್ರೀನಿವಾಸ ನಾಯಕ್ ಇಂದಾಜೆ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಈ ವೇಳೆ ಬಾಲಸುಬ್ರಹ್ಮಣ್ಯ ಕಾಯಾರ, ರಾಮಣ್ಣ ವೈ., ಹರ್ಷ, ರೇಮಂಡ್ ಡಿಕೂನಾ, ಆರ್.ಎಂ. ರಾಜೇಂದ್ರನ್ ಸೇರಿದಂತೆ ಹಲವು ಗಣ್ಯರನ್ನು ‘ಪ್ರೆಸ್ ಗೌರವ ಸನ್ಮಾನ’ ನೀಡಿ ಗೌರವಿಸಲಾಯಿತು.