ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ವಿರೋಧಿಸಿ ‘ನನ್ನ ಮತ ನನ್ನ ಹಕ್ಕು’ ಸಂಘಟನೆ ಹಾಗೂ ಸಮಾನ ಮನಸ್ಕ ಸಂಘಟನೆಗಳ ನೇತೃತ್ವದಲ್ಲಿ ನಗರದ ಕ್ಲಾಕ್ ಟವರ್ ಬಳಿ ಶನಿವಾರ ಪ್ರತಿಭಟನೆ ನಡೆಯಿತು.
ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಸಾಮಾಜಿಕ ಹೋರಾಟಗಾರ ವಿನೋದ್ ಎಂ., ಎಸ್‌ಐಆರ್ ಪ್ರಕ್ರಿಯೆಯು ಜನರ ಪ್ರಜಾಪ್ರಭುತ್ವದ ಹಕ್ಕುಗಳನ್ನು ಕಸಿಯುವ ಹುನ್ನಾರವಾಗಿದೆ ಎಂದು ಆರೋಪಿಸಿದರು. ಚುನಾವಣಾ ಆಯೋಗವು ಕ್ಷುಲ್ಲಕ ಕಾರಣಗಳನ್ನು ಮುಂದಿಟ್ಟುಕೊಂಡು ಅರ್ಹ ಮತದಾರರನ್ನು ಚುನಾವಣಾ ಪ್ರಕ್ರಿಯೆಯಿಂದ ವಂಚಿಸುತ್ತಿದ್ದು, ಇದು ಪ್ರಜಾಪ್ರಭುತ್ವವನ್ನು ದುರ್ಬಲಗೊಳಿಸುವ ಪ್ರಯತ್ನವಾಗಿದೆ ಎಂದು ಅವರು ಹೇಳಿದರು.
ಕರ್ನಾಟಕ ವೆಲ್ಫೇರ್ ಪಾರ್ಟಿಯ ಕಾರ್ಯದರ್ಶಿ ಅಬ್ದುಲ್ ಸಲಾಮ್ ಮಾತನಾಡಿ, ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ನೆಪದಲ್ಲಿ ಸಣ್ಣಪುಟ್ಟ ತಪ್ಪುಗಳನ್ನು ಆಧಾರವನ್ನಾಗಿ ಮಾಡಿಕೊಂಡು ಅರ್ಹ ಮತದಾರರ ಹೆಸರನ್ನೂ ಪಟ್ಟಿಯಿಂದ ಕೈಬಿಡಲಾಗುತ್ತಿದೆ ಎಂದು ಆರೋಪಿಸಿದರು. ಇದರ ಪರಿಣಾಮವಾಗಿ ವಿವಿಧ ರಾಜ್ಯಗಳಲ್ಲಿ ಸುಮಾರು 7.2 ಕೋಟಿ ಜನರು ಮತದಾನದ ಹಕ್ಕಿನಿಂದ ವಂಚಿತರಾಗಿದ್ದಾರೆ ಎಂದು ಅವರು ತಿಳಿಸಿದರು. ಇದನ್ನು ಪ್ರಜಾಪ್ರಭುತ್ವದ ಕಗ್ಗೋಲೆ ಎಂದು ಅವರು ಬಣ್ಣಿಸಿದರು.
ಪ್ರತಿಭಟನೆಯಲ್ಲಿ ಮಾತನಾಡಿದ ಮುಖಂಡರು, ಮತದಾನದ ಹಕ್ಕು ಕಳೆದುಕೊಂಡವರಲ್ಲಿ ಮಹಿಳೆಯರು, ವಲಸೆ ಕಾರ್ಮಿಕರು, ದಲಿತರು, ಆದಿವಾಸಿಗಳು, ಅಲೆಮಾರಿ ಸಮುದಾಯದವರು, ಲಿಂಗತ್ವ ಅಲ್ಪಸಂಖ್ಯಾತರು ಹಾಗೂ ಧಾರ್ಮಿಕ ಅಲ್ಪಸಂಖ್ಯಾತರ ಸಂಖ್ಯೆಯೇ ಹೆಚ್ಚಾಗಿದೆ ಎಂದು ಆತಂಕ ವ್ಯಕ್ತಪಡಿಸಿದರು. ಸಂವಿಧಾನವು 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬ ಪ್ರಜೆಗೂ ಮತದಾನದ ಹಕ್ಕು ನೀಡಿದ್ದು, ಅದನ್ನು ರಕ್ಷಿಸುವ ಹೊಣೆಗಾರಿಕೆ ಚುನಾವಣಾ ಆಯೋಗದ ಮೇಲಿದೆ ಎಂದು ಹೇಳಿದರು.
ಕೇಂದ್ರ ಸರ್ಕಾರವು ಚುನಾವಣಾ ಆಯೋಗವನ್ನು ದುರ್ಬಳಕೆ ಮಾಡಿಕೊಂಡು ಅಲ್ಪಸಂಖ್ಯಾತರು, ದಲಿತರು ಹಾಗೂ ಹಿಂದುಳಿದ ವರ್ಗದವರನ್ನು ಮತದಾರರ ಪಟ್ಟಿಯಿಂದ ಹೊರಗಿಡುವ ಪ್ರಯತ್ನ ನಡೆಸುತ್ತಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು. ಮತದಾರರ ಪಟ್ಟಿಯಲ್ಲಿ ಲೋಪದೋಷಗಳಿದ್ದರೆ ಅವುಗಳನ್ನು ಸರಿಪಡಿಸಿಕೊಳ್ಳಲು ಮತದಾರರಿಗೆ ಸಮರ್ಪಕ ಕಾಲಾವಕಾಶ ನೀಡಬೇಕು. ಆದರೆ ಏಕಾಏಕಿ ಎಸ್‌ಐಆರ್ ಹೆಸರಿನಲ್ಲಿ ಹೆಸರುಗಳನ್ನು ಕೈಬಿಡುವುದು ಸರಿಯಾದ ಕ್ರಮವಲ್ಲ ಎಂದು ಅವರು ಅಭಿಪ್ರಾಯಪಟ್ಟರು.
ಪ್ರತಿಭಟನೆಯಲ್ಲಿ ಎಸ್‌ಡಿಪಿಐ ಜಿಲ್ಲಾ ಅಧ್ಯಕ್ಷ ಅನ್ವರ್ ಸಾದತ್ ಬಜತ್ತೂರು, ಸಿಪಿಎಂ ಮುಖಂಡ ರಾಮಣ್ಣ ವಿಟ್ಲ ಸೇರಿದಂತೆ ವಿವಿಧ ಪ್ರಗತಿಪರ ಸಂಘಟನೆಗಳ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.
ಕರ್ನಾಟಕ ರಾಜ್ಯದಾದ್ಯಂತ ಜಿಲ್ಲಾ ಕೇಂದ್ರಗಳಲ್ಲಿ ಕರ್ನಾಟಕ ಪ್ರಗತಿಪರ ಸಂಘಟನೆಗಳ ವತಿಯಿಂದ ಹಮ್ಮಿಕೊಳ್ಳಲಾಗಿರುವ ‘ನನ್ನ ಮತ ನನ್ನ ಹಕ್ಕು’ ಅಭಿಯಾನದ ಅಂಗವಾಗಿ ಈ ಪ್ರತಿಭಟನೆ ನಡೆಸಲಾಯಿತು.