ಬೆಂಗಳೂರು: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಇಂದು ಪ್ರಮಾಣವಚನ ಸ್ವೀಕರಿಸಲಿದ್ದು, ಅವರೊಂದಿಗೆ 13 ಮಂದಿ ಹಿರಿಯ ಹಾಗೂ ಪ್ರಭಾವಿ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ ಇದೆ.
ಡಿ.ಕೆ. ಶಿವಕುಮಾರ್ ಅವರ ಪ್ರಮಾಣವಚನ ಸಮಾರಂಭಕ್ಕೆ ಬೆಂಗಳೂರಿನ ಲೋಕಭವನದ ಗಾಜಿನ ಮನೆಯಲ್ಲಿ ಭರದ ಸಿದ್ಧತೆಗಳು ನಡೆದಿವೆ. ವೇದಿಕೆಯಲ್ಲಿ 20 ಆಸನಗಳ ವ್ಯವಸ್ಥೆ ಮಾಡಲಾಗಿದ್ದು, ಸರ್ವಧರ್ಮ ಸಮಭಾವದ ಸಂದೇಶ ಸಾರುವ ಉದ್ದೇಶದಿಂದ ವಿವಿಧ ಧರ್ಮಗಳ 55 ಮಂದಿ ಸ್ವಾಮೀಜಿಗಳು, ಫಾದರ್ಗಳು ಹಾಗೂ ಮೌಲ್ವಿಗಳಿಗೆ ಆಹ್ವಾನ ನೀಡಲಾಗಿದೆ. ಅವರ ಸಮ್ಮುಖದಲ್ಲೇ ಡಿ.ಕೆ. ಶಿವಕುಮಾರ್ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ.
ಸಮಾರಂಭಕ್ಕೆ ಕಾಂಗ್ರೆಸ್ ನಾಯಕರು ಸೇರಿದಂತೆ ಹಲವು ಗಣ್ಯರಿಗೆ ಆಹ್ವಾನ ನೀಡಲಾಗಿದೆ. ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ, ಎಐಸಿಸಿ ನಾಯಕ ಕೆ.ಸಿ. ವೇಣುಗೋಪಾಲ್ ಹಾಗೂ ರಣದೀಪ್ ಸಿಂಗ್ ಸುರ್ಜೇವಾಲಾ ಸೇರಿದಂತೆ ಪ್ರಮುಖ ನಾಯಕರು ಭಾಗವಹಿಸುವ ನಿರೀಕ್ಷೆಯಿದೆ.
ಸಚಿವ ಸಂಪುಟದ ಅಂತಿಮ ಪಟ್ಟಿಗೆ ಸಂಬಂಧಿಸಿದಂತೆ ದೆಹಲಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ನಿವಾಸದಲ್ಲಿ ನಡೆದ ಮಹತ್ವದ ಸಭೆಯಲ್ಲಿ ರಾಹುಲ್ ಗಾಂಧಿ, ಕೆ.ಸಿ. ವೇಣುಗೋಪಾಲ್, ರಣದೀಪ್ ಸಿಂಗ್ ಸುರ್ಜೇವಾಲಾ, ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಚರ್ಚೆ ನಡೆಸಿ ಪಟ್ಟಿ ಅಂತಿಮಗೊಳಿಸಿದ್ದಾರೆ ಎನ್ನಲಾಗಿದೆ. ಬಳಿಕ ವೇಣುಗೋಪಾಲ್ ನಿವಾಸದಲ್ಲಿ ಮತ್ತೊಂದು ಸುತ್ತಿನ ಸಭೆ ನಡೆಸಿ ಸಚಿವರ ಆಯ್ಕೆಗೆ ಅಂತಿಮ ಮುದ್ರೆ ಒತ್ತಲಾಗಿದೆ.
ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರದಲ್ಲಿ ಡಾ. ಜಿ. ಪರಮೇಶ್ವರ್ ಉಪ ಮುಖ್ಯಮಂತ್ರಿ (ಡಿಸಿಎಂ) ಆಗಿ ಅಧಿಕಾರ ಸ್ವೀಕರಿಸುವ ಸಾಧ್ಯತೆ ಇದೆ. ಸಚಿವರಾಗಿ ರಾಮಲಿಂಗಾರೆಡ್ಡಿ, ಕೆ.ಜೆ. ಜಾರ್ಜ್, ಪ್ರಿಯಾಂಕ್ ಖರ್ಗೆ, ಸತೀಶ್ ಜಾರಕಿಹೊಳಿ, ಎಂ.ಬಿ. ಪಾಟೀಲ್, ಕೃಷ್ಣ ಬೈರೇಗೌಡ, ಯತೀಂದ್ರ ಸಿದ್ದರಾಮಯ್ಯ, ಬೈರತಿ ಸುರೇಶ್, ಕೆ.ಎಚ್. ಮುನಿಯಪ್ಪ, ಈಶ್ವರ್ ಖಂಡ್ರೆ ಹಾಗೂ ಶರಣಪ್ರಕಾಶ್ ಪಾಟೀಲ್ ಹೆಸರುಗಳು ಕೇಳಿಬರುತ್ತಿವೆ.
ಸುಮಾರು ನಾಲ್ಕು ದಶಕಗಳ ರಾಜಕೀಯ ಅನುಭವ ಹೊಂದಿರುವ ಡಿ.ಕೆ. ಶಿವಕುಮಾರ್, ಹಲವು ರಾಜಕೀಯ ಏರಿಳಿತಗಳು, ತನಿಖೆಗಳು ಹಾಗೂ ಜೈಲುವಾಸದ ಸವಾಲುಗಳನ್ನು ಎದುರಿಸಿ ಇದೀಗ ರಾಜ್ಯದ ಅತ್ಯುನ್ನತ ಹುದ್ದೆಯನ್ನು ಅಲಂಕರಿಸುತ್ತಿದ್ದಾರೆ. ಅವರ ನೇತೃತ್ವದ ಹೊಸ ಸರ್ಕಾರದ ಮೇಲೆ ರಾಜ್ಯದ ಜನರ ನಿರೀಕ್ಷೆಗಳು ಹೆಚ್ಚಾಗಿವೆ.