ಉಡುಪಿ: ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರನೊಬ್ಬ ಸ್ಥಳದಲ್ಲೇ ಸಾವನ್ನಪ್ಪಿದ ದುರ್ಘಟನೆ ಉಡುಪಿ ಜಿಲ್ಲೆಯ ತೆಕ್ಕಟ್ಟೆ ಪ್ರಮುಖ ಸರ್ಕಲ್ ಬಳಿ ನಡೆದಿದೆ.
ಮೃತರನ್ನು ಮಣೂರು ನಿವಾಸಿ ಗಣೇಶ್ ಎಂದು ಗುರುತಿಸಲಾಗಿದ್ದು, ಅವರು ಕೋಟಿ ಪೂಜಾರಿ ಅವರ ಪುತ್ರರಾಗಿದ್ದಾರೆ.
ಮಂಗಳವಾರ ರಾತ್ರಿ ಸುಮಾರು 9.47ರ ವೇಳೆಗೆ ಈ ದುರ್ಘಟನೆ ಸಂಭವಿಸಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಗಣೇಶ್ ಅವರ ಬೈಕ್‌ಗೆ ಜೀಪ್ ಡಿಕ್ಕಿ ಹೊಡೆದ ಪರಿಣಾಮ ಅವರು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಅಪಘಾತದ ಸಂಪೂರ್ಣ ದೃಶ್ಯ ಸಮೀಪದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಘಟನೆಯ ತೀವ್ರತೆಯನ್ನು ಬಿಂಬಿಸಿದೆ.
ಮಾಹಿತಿ ತಿಳಿದ ತಕ್ಷಣ ಕೋಟ ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ.
ಈ ಸಂಬಂಧ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಪಘಾತದ ನಿಖರ ಕಾರಣ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.