ಡಿ.ಕೆ. ಶಿವಕುಮಾರ್ ಕರ್ನಾಟಕದ 25ನೇ ಮುಖ್ಯಮಂತ್ರಿ: ಸರ್ವಧರ್ಮ ಸೌಹಾರ್ದದ ನಡುವೆ ಭವ್ಯ ಪ್ರಮಾಣವಚನ

ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಬುಧವಾರ ಪ್ರಮಾಣವಚನ ಸ್ವೀಕರಿಸಿದರು. ರಾಜಭವನದಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರು ಅವರಿಗೆ ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣವಚನ ಬೋಧಿಸಿದರು.

ಇದೇ ವೇಳೆ ಡಾ. ಜಿ. ಪರಮೇಶ್ವರ್ ಅವರು ಉಪ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಅವರೊಂದಿಗೆ 12 ಮಂದಿ ಶಾಸಕರು ಸಚಿವರಾಗಿ ಅಧಿಕಾರ ಮತ್ತು ಗೌಪ್ಯತೆಯ ಪ್ರತಿಜ್ಞಾವಿಧಿ ಸ್ವೀಕರಿಸಿ ನೂತನ ಸಚಿವ ಸಂಪುಟವನ್ನು ಸೇರ್ಪಡೆಗೊಂಡರು.

ಪ್ರಮಾಣವಚನ ಸಮಾರಂಭದಲ್ಲಿ ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ, ಹಿಮಾಚಲ ಪ್ರದೇಶ ಮುಖ್ಯಮಂತ್ರಿ ಸುಖ್ವಿಂದರ್ ಸಿಂಗ್ ಸುಖು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಣದೀಪ್ ಸಿಂಗ್ ಸುರ್ಜೇವಾಲಾ, ಕೆ.ಸಿ. ವೇಣುಗೋಪಾಲ್ ಸೇರಿದಂತೆ ಹಲವು ರಾಷ್ಟ್ರೀಯ ನಾಯಕರು ಹಾಗೂ ಗಣ್ಯರು ಉಪಸ್ಥಿತರಿದ್ದರು.

ಸಮಾರಂಭದ ವಿಶೇಷವಾಗಿ ಹಿಂದೂ, ಮುಸ್ಲಿಂ, ಕ್ರೈಸ್ತ ಹಾಗೂ ಬೌದ್ಧ ಧರ್ಮಗಳ 55 ಮಂದಿ ಸರ್ವಧರ್ಮ ಗುರುಗಳಿಗೆ ಆಹ್ವಾನ ನೀಡಲಾಗಿತ್ತು. ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ, ಸುತ್ತೂರು ಮಠದ ಶಿವರಾತ್ರಿದೇಶಿಕೇಂದ್ರ ಸ್ವಾಮೀಜಿ, ಸಿದ್ಧಗಂಗಾ ಮಠದ ಸಿದ್ಧಲಿಂಗ ಸ್ವಾಮೀಜಿ, ನೊಣವಿನಕೆರೆ ಕಾಡಸಿದ್ಧೇಶ್ವರ ಮಠದ ಸ್ವಾಮೀಜಿ ಸೇರಿದಂತೆ ವಿವಿಧ ಮಠಾಧೀಶರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಅಲ್ಲದೆ ಮಹಾಬೋಧಿ ಸೊಸೈಟಿಯ ಆನಂದ ಬಿಕ್ಕು, ಮಂಗಳೂರು ಧರ್ಮಪ್ರಾಂತ್ಯದ ಆರ್ಚ್‌ಬಿಷಪ್ ಡಾ. ಪೀಟರ್ ಮಚಾಡೋ, ಖ್ವಾಜಾ ಬಂದೇನವಾಜ್ ದರ್ಗಾದ ಧರ್ಮಗುರು ಸೇರಿದಂತೆ ವಿವಿಧ ಧಾರ್ಮಿಕ ಮುಖಂಡರು ಉಪಸ್ಥಿತರಿದ್ದು, ಸಮಾರಂಭಕ್ಕೆ ಸರ್ವಧರ್ಮ ಸೌಹಾರ್ದದ ಸ್ಪರ್ಶ ನೀಡಿದರು.

SHARE
Loading spinner

Leave a Reply

Your email address will not be published. Required fields are marked *

error: Content is protected !!