ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಸೇರಿದಂತೆ ಶಿಕ್ಷಣ ಕ್ಷೇತ್ರದಲ್ಲಿ ನಡೆಯುತ್ತಿರುವ ಅಕ್ರಮಗಳನ್ನು ತಡೆಯುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಸದಸ್ಯರು ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸಿದರು.
ಪಕ್ಷದ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಶಿಕ್ಷಣ ಕ್ಷೇತ್ರದ ಅಕ್ರಮಗಳು ಮತ್ತು ಪರೀಕ್ಷಾ ಹಗರಣಗಳ ವಿರುದ್ಧ ಒಂದು ತಿಂಗಳಿನಿಂದ ಅಭಿಯಾನ ನಡೆಸುತ್ತಿದ್ದರೂ ಸರ್ಕಾರ ಕ್ರಮ ಕೈಗೊಂಡಿಲ್ಲ ಎಂದು ಅಭಿಜೀತ್ ದೀಪ ಆರೋಪಿಸಿದರು.
“ನಮ್ಮ ಪೋಸ್ಟ್‌ಗಳನ್ನು ಅಳಿಸಬಹುದು, ಆದರೆ ನಮ್ಮ ಧ್ವನಿಯನ್ನು ಅಳಿಸಲು ಸಾಧ್ಯವಿಲ್ಲ. ವಿದ್ಯಾರ್ಥಿಗಳ ಭವಿಷ್ಯಕ್ಕಾಗಿ ಹೋರಾಟ ಮುಂದುವರಿಯಲಿದೆ” ಎಂದು ಅವರು ಹೇಳಿದರು. ಪ್ರತಿಭಟನಾಕಾರರು ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರ ಹಿಡಿದು ಶಿಕ್ಷಣ ಕ್ಷೇತ್ರದಲ್ಲಿ ಪಾರದರ್ಶಕತೆ ಮತ್ತು ಹೊಣೆಗಾರಿಕೆಗೆ ಒತ್ತಾಯಿಸಿದರು.
ಸಾಮಾಜಿಕ ಜಾಲತಾಣ ಆಧಾರಿತ ಚಳುವಳಿಯಾಗಿ ಆರಂಭವಾದ ಕಾಕ್ರೋಚ್ ಜನತಾ ಪಕ್ಷ ಇತ್ತೀಚೆಗೆ ಯುವಜನರಲ್ಲಿ ಗಮನ ಸೆಳೆಯುತ್ತಿದ್ದು, ಜೂನ್ 23ರಂದು ಮತ್ತೊಂದು ಪ್ರತಿಭಟನೆ ನಡೆಸಲು ನಿರ್ಧರಿಸಿದೆ. ಪ್ರತಿಭಟನೆಯ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದ್ದು, ವಿಮಾನ ನಿಲ್ದಾಣ, ಗಡಿ ಪ್ರವೇಶ ದ್ವಾರಗಳು ಹಾಗೂ ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚುವರಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು.