ಕುಂಬಳೆಯಲ್ಲಿ ‘ಚಿರಂಜೀವಿ’ ಸಂಸ್ಥೆಯಿಂದ 109 ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆಶೈಕ್ಷಣಿಕ ಸಾಧಕರಿಗೆ ಸನ್ಮಾನ; ಶಿಕ್ಷಣದ ಮಹತ್ವ ಸಾರಿದ ಗಣ್ಯರು

ಕುಂಬಳೆ ಜೂನ್ 8: ಶಿಕ್ಷಣದ ಮೂಲಕ ಸಮಾಜದ ಉನ್ನತಿಗೆ ಕೊಡುಗೆ ನೀಡುವ ಉದ್ದೇಶದಿಂದ ಕುಂಬಳೆಯ ಚಿರಂಜೀವಿ (ರಿ.) ಸಂಸ್ಥೆಯು ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳ ಸನ್ಮಾನ ಕಾರ್ಯಕ್ರಮವನ್ನು ಆಯೋಜಿಸಿತು.

ಕಾರ್ಯಕ್ರಮದಲ್ಲಿ 109 ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕಗಳನ್ನು ವಿತರಿಸಲಾಗಿದ್ದು, ವಿವಿಧ ಪರೀಕ್ಷೆಗಳಲ್ಲಿ ಸಾಧನೆಗೈದ ಒಂಬತ್ತು ವಿದ್ಯಾರ್ಥಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು. ವಿದ್ಯಾರ್ಥಿಗಳ ಶೈಕ್ಷಣಿಕ ಬೆಳವಣಿಗೆಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮವನ್ನು ಉದ್ಘಾಟಿಸಿದ ಕುಂಬಳೆ ಗ್ರಾಮ ಪಂಚಾಯತ್ ಅಧ್ಯಕ್ಷ ವಿ.ಪಿ. ಅಬ್ದುಲ್ ಖಾದರ್ ಮಾತನಾಡಿ, ವಿದ್ಯಾರ್ಥಿಗಳ ಕೈಗೆ ಪುಸ್ತಕ ನೀಡುವುದು ಅವರ ಭವಿಷ್ಯದ ಕನಸುಗಳಿಗೆ ಬಲ ತುಂಬಿದಂತೆಯೇ ಎಂದು ಹೇಳಿದರು. ಚಿರಂಜೀವಿ ಸಂಸ್ಥೆಯ ಸಮಾಜಮುಖಿ ಕಾರ್ಯವನ್ನು ಶ್ಲಾಘಿಸಿದ ಅವರು, ಶಿಕ್ಷಣ ಕ್ಷೇತ್ರದಲ್ಲಿ ಇಂತಹ ಸೇವಾ ಚಟುವಟಿಕೆಗಳು ನಿರಂತರವಾಗಿ ನಡೆಯಬೇಕೆಂದು ಆಶಿಸಿದರು.

ಸಮಾರಂಭದ ಅಧ್ಯಕ್ಷತೆಯನ್ನು ಕ್ಲಬ್ ಅಧ್ಯಕ್ಷ ಬಾಲಕೃಷ್ಣ ಗಟ್ಟಿ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಪೃಥ್ವಿರಾಜ್ ಶೆಟ್ಟಿ, ರಮೇಶ ಭಟ್, ಸ್ನೇಹಾ, ರವಿ ನಾಯ್ಕಾಪು ಹಾಗೂ ಎಂ. ನಾ. ಚಂಬಲ್ತಿಮಾರ್ ಉಪಸ್ಥಿತರಿದ್ದು, ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಕೃಷ್ಣ ಗಟ್ಟಿ ಸ್ವಾಗತಿಸಿದರು. ಪ್ರಜೀಶ್ ಪೆರುವಾಡ್ ವಂದನಾರ್ಪಣೆ ಸಲ್ಲಿಸಿದರೆ, ಸಂತೋಷ್ ಕುಮಾರ್ ಕಾರ್ಯಕ್ರಮವನ್ನು ನಿರೂಪಿಸಿದರು.

ವಿದ್ಯಾರ್ಥಿಗಳ ಶಿಕ್ಷಣಕ್ಕೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ನಡೆದ ಈ ಕಾರ್ಯಕ್ರಮವು ಪೋಷಕರು ಹಾಗೂ ಸಾರ್ವಜನಿಕರಿಂದ ಮೆಚ್ಚುಗೆಗೆ ಪಾತ್ರವಾಯಿತು.

SHARE
Loading spinner

Leave a Reply

Your email address will not be published. Required fields are marked *

error: Content is protected !!