ಮೂರ್ಜೆ ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್, ಎಲ್‌ಕೆಜಿ-ಯುಕೆಜಿ ಕೊಠಡಿ ಹಾಗೂ ಶೌಚಾಲಯ ಉದ್ಘಾಟನೆ

ವಿದ್ಯಾರ್ಥಿಗಳಿಗೆ ಉಚಿತ ಶೈಕ್ಷಣಿಕ ಸಾಮಗ್ರಿ ವಿತರಣೆ; ಶಾಲೆ ಅಭಿವೃದ್ಧಿಗೆ ಸಮುದಾಯದ ಸಹಕಾರ ಅಗತ್ಯ: ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ, ಜೂನ್ 9: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ ಹಿರಿಯ ಪ್ರಾಥಮಿಕ ಶಾಲೆ ಮೂರ್ಜೆಯಲ್ಲಿ ನೂತನವಾಗಿ ನಿರ್ಮಿಸಲಾದ ಎಲ್‌ಕೆಜಿ, ಯುಕೆಜಿ ಸ್ಮಾರ್ಟ್ ಕ್ಲಾಸ್ ಕೊಠಡಿ ಹಾಗೂ ಶೌಚಾಲಯದ ಉದ್ಘಾಟನಾ ಸಮಾರಂಭ ಮತ್ತು ಯುವಸ್ಪಂದನ ವಾಮದಪದವು ವಲಯದ ವತಿಯಿಂದ ವಿದ್ಯಾರ್ಥಿಗಳಿಗೆ ಉಚಿತ ಬರಹ ಪುಸ್ತಕ ಹಾಗೂ ಶೈಕ್ಷಣಿಕ ಪರಿಕರಗಳ ವಿತರಣಾ ಕಾರ್ಯಕ್ರಮ ಸೋಮವಾರ ನಡೆಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್, ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ದೊರೆಯಬೇಕಾದರೆ ಆಧುನಿಕ ಸೌಲಭ್ಯಗಳಿರುವ ಸ್ಮಾರ್ಟ್ ತರಗತಿಗಳ ಅಗತ್ಯವಿದೆ ಎಂದು ಹೇಳಿದರು. ಈ ನಿಟ್ಟಿನಲ್ಲಿ ಸ್ಮಾರ್ಟ್ ಕ್ಲಾಸ್ ಕೊಠಡಿಗಳನ್ನು ನಿರ್ಮಿಸುವ ಮೂಲಕ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಉತ್ತಮ ಕಾರ್ಯ ನಿರ್ವಹಿಸುತ್ತಿದೆ ಎಂದು ಶ್ಲಾಘಿಸಿದರು.

ಶಾಲೆಯ ಸಮಗ್ರ ಅಭಿವೃದ್ಧಿಗೆ ಸ್ಥಳೀಯ ಸಮುದಾಯ ಮತ್ತು ಹಳೆಯ ವಿದ್ಯಾರ್ಥಿಗಳು ಹೆಚ್ಚಿನ ಜವಾಬ್ದಾರಿ ವಹಿಸಬೇಕು ಎಂದು ಕರೆ ನೀಡಿದ ಅವರು, ಶಾಲೆಯನ್ನು ದತ್ತು ಪಡೆದು ಅದರ ಅಭಿವೃದ್ಧಿಗೆ ಕೈಜೋಡಿಸುವಂತೆ ಸಲಹೆ ನೀಡಿದರು. ಅಭಿವೃದ್ಧಿ ಕಾರ್ಯಗಳಿಗಾಗಿ ಕೇವಲ ಸರ್ಕಾರವನ್ನು ಅವಲಂಬಿಸದೇ ‘ನಮ್ಮ ಶಾಲೆ’ ಎಂಬ ಮನೋಭಾವದೊಂದಿಗೆ ಎಲ್ಲರೂ ಸಹಕರಿಸಬೇಕು ಎಂದು ಹೇಳಿದರು.

ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಹಾಗೂ ಶಾಲೆಯ ಹಳೆಯ ವಿದ್ಯಾರ್ಥಿ ಎಂ. ತುಂಗಪ್ಪ ಬಂಗೇರ ಪ್ರಾಸ್ತಾವಿಕವಾಗಿ ಮಾತನಾಡಿದರು.

ಕ್ಷೇತ್ರ ಸಂಪನ್ಮೂಲ ಕೇಂದ್ರದ ಸಮನ್ವಯಾಧಿಕಾರಿ ವಿದ್ಯಾ, ಪಿಲಾತಬೆಟ್ಟು ಗ್ರಾಮ ಪಂಚಾಯಿತಿ ಆಡಳಿತಾಧಿಕಾರಿ ನಾರಾಯಣ ಭಟ್ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಂಟ್ವಾಳ ತಾಲೂಕು ಯೋಜನಾಧಿಕಾರಿ ಜಯಾನಂದ ಪಿ. ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಬೆಂಗಳೂರಿನ ವಕೀಲೆ ಸ್ವರ್ಣಲತಾ ಹೆಗ್ಡೆ, ಯುವಸ್ಪಂದನ ಅಧ್ಯಕ್ಷ ನಿತಿನ್ ಮೂರ್ಜೆ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಹೇಮಂತ್ ಕುಮಾರ್, ಪ್ರಮುಖರಾದ ಅಬ್ದುಲ್ ಶುಕೂರ್, ಉದ್ಯಮಿ ಓಂ ಪ್ರಸಾದ್, ಪಿ.ಟಿ. ಜೋಸೆಫ್, ಪಂಚಾಯಿತಿ ಮಾಜಿ ಅಧ್ಯಕ್ಷೆ ಹರ್ಷಿಣಿ ಪುಷ್ಪಾನಂದ, ಹರಿಪ್ರಸಾದ್ ನೂಜಿದಡಿ, ಲಕ್ಷ್ಮೀ ಜೆ. ಬಂಗೇರ, ನಿವೃತ್ತ ಗ್ರಾಮ ಆಡಳಿತಾಧಿಕಾರಿ ಅಣ್ಣು ಪೂಜಾರಿ, ಯಕ್ಷಗಾನ ಕಲಾವಿದ ದಿನೇಶ್ ಶೆಟ್ಟಿ ಕಾವಳಕಟ್ಟೆ, ಎಸ್‌ಡಿಎಂಸಿ ಅಧ್ಯಕ್ಷೆ ನಂದಿನಿ ಹಾಗೂ ಸಂತೋಷ್ ಕುಮಾರ್ ಉಪಸ್ಥಿತರಿದ್ದರು.

ಮುಖ್ಯ ಶಿಕ್ಷಕಿ ಕಮಲ ಸ್ವಾಗತಿಸಿದರು. ಜ್ಞಾನದೀಪ ಶಿಕ್ಷಕಿ ಸುಷ್ಮಾ ವಂದಿಸಿದರು. ರಂಗಕಲಾವಿದ ಎಚ್.ಕೆ. ನಯನಾಡು ಕಾರ್ಯಕ್ರಮ ನಿರೂಪಿಸಿದರು.

ಈ ಸಂದರ್ಭದಲ್ಲಿ ಶಾಲೆಯಲ್ಲಿ ನಾರಾಯಣಗುರು ಅಧ್ಯಯನ ಪೀಠ ಸ್ಥಾಪನೆ ಹಾಗೂ ಶಾಲಾ ಕಟ್ಟಡದ ದುರಸ್ತಿ ಕಾಮಗಾರಿಗಳನ್ನು ಕೈಗೊಳ್ಳುವಂತೆ ಶಾಸಕರಿಗೆ ಮನವಿ ಸಲ್ಲಿಸಲಾಯಿತು.

ಯುವಸ್ಪಂದನ ವಾಮದಪದವು ವಲಯದ ವತಿಯಿಂದ ವಿದ್ಯಾರ್ಥಿಗಳಿಗೆ ಉಚಿತ ಬರಹ ಪುಸ್ತಕಗಳು ಹಾಗೂ ವಿವಿಧ ಶೈಕ್ಷಣಿಕ ಪರಿಕರಗಳನ್ನು ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಶಿಕ್ಷಕರು, ವಿದ್ಯಾರ್ಥಿಗಳು, ಪೋಷಕರು, ಹಳೆ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

SHARE
Loading spinner

Leave a Reply

Your email address will not be published. Required fields are marked *

error: Content is protected !!