ಬೀದಿ ಬದಿ ವ್ಯಾಪಾರಿಗಳ ತೆರವು ಕಾರ್ಯಾಚರಣೆ ಖಂಡಿಸಿ ಪ್ರತಿಭಟನೆ

ಮಂಗಳೂರು, ಜೂ.11: ಮಂಗಳೂರಿನ ಬೀದಿ ಬದಿ ವ್ಯಾಪಾರಿಗಳನ್ನು ತೆರವುಗೊಳಿಸುವ ಪ್ರಯತ್ನವನ್ನು ಖಂಡಿಸಿ ಹಾಗೂ ಸಾಂಪ್ರದಾಯಿಕ ಸಂಡೆ ಬಜಾರ್ ವ್ಯಾಪಾರಕ್ಕೆ ಅವಕಾಶ ನೀಡುವಂತೆ ಒತ್ತಾಯಿಸಿ ದಕ್ಷಿಣ ಕನ್ನಡ ಜಿಲ್ಲಾ ಬೀದಿ ಬದಿ ವ್ಯಾಪಾರಸ್ಥರ ಸಂಘ (ರಿ), ಸಿಐಟಿಯು (CITU) ನೇತೃತ್ವದಲ್ಲಿ ಮಂಗಳೂರು ಮಹಾನಗರ ಪಾಲಿಕೆ ಕಚೇರಿ ಮುಂಭಾಗ ಬುಧವಾರ ಬೃಹತ್ ಪ್ರತಿಭಟನೆ ನಡೆಯಿತು.

ಪ್ರತಿಭಟನಾಕಾರರು ನಗರಪಾಲಿಕೆ ಅಧಿಕಾರಿಗಳ ಮೇಲೆ ಒತ್ತಡ ಹೇರಿ ಬೀದಿ ಬದಿ ವ್ಯಾಪಾರಿಗಳ ವಿರುದ್ಧ ದಾಳಿ ನಡೆಸಲು ಕುಮ್ಮಕ್ಕು ನೀಡುತ್ತಿದ್ದಾರೆ ಎಂದು ಆರೋಪಿಸಿ ಪ್ರಸನ್ನ ರವಿ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು.

ಬೀದಿ ಬದಿ ವ್ಯಾಪಾರವು ಸಾವಿರಾರು ಕುಟುಂಬಗಳ ಜೀವನೋಪಾಯವಾಗಿದ್ದು, ಯಾವುದೇ ಪರ್ಯಾಯ ವ್ಯವಸ್ಥೆ ಕಲ್ಪಿಸದೆ ವ್ಯಾಪಾರಿಗಳನ್ನು ತೆರವುಗೊಳಿಸುವ ಕ್ರಮವನ್ನು ಕೈಬಿಡಬೇಕು. ಅಲ್ಲದೆ, ಹಲವು ವರ್ಷಗಳಿಂದ ನಡೆಯುತ್ತಿರುವ ಸಾಂಪ್ರದಾಯಿಕ ಸಂಡೆ ಬಜಾರ್ ವ್ಯಾಪಾರಕ್ಕೆ ನಿರ್ಬಂಧವಿಲ್ಲದೆ ಅವಕಾಶ ನೀಡಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಪ್ರತಿಭಟನೆ ಬಳಿಕ ಸಂಘದ ಪದಾಧಿಕಾರಿಗಳು ತಮ್ಮ ಬೇಡಿಕೆಗಳ ಮನವಿಯನ್ನು ಮಂಗಳೂರು ಮಹಾನಗರ ಪಾಲಿಕೆಯ ಉಪ ಆಯುಕ್ತರು (ಆಡಳಿತ) ಎ.ಎಲ್. ಸ್ವಾಮಿ ಅವರಿಗೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಸಂಘದ ಮುಖಂಡರಾದ ಸುನಿಲ್ ಕುಮಾರ್ ಬಜಾಲ್, ಬಿ.ಕೆ. ಇಮ್ತಿಯಾಸ್, ಸಂತೋಷ್ ಬಜಾಲ್, ಯೋಗೀಶ್ ಜಪ್ಪಿನಮೊಗೇರ್ ಸೇರಿದಂತೆ ನೂರಾರು ಬೀದಿ ಬದಿ ವ್ಯಾಪಾರಸ್ಥರು ಹಾಗೂ ಸಂಘದ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

SHARE
Loading spinner

Leave a Reply

Your email address will not be published. Required fields are marked *

error: Content is protected !!