ಕೇರಳದಲ್ಲಿ ಮತ್ತೆ ನಿಫಾ ಆತಂಕ; ಶಂಕಿತ ಪ್ರಕರಣ ಪತ್ತೆ, ರಾಜ್ಯಾದ್ಯಂತ ಹೈ ಅಲರ್ಟ್

ತಿರುವನಂತಪುರ: ಕೇರಳದಲ್ಲಿ ಮತ್ತೊಮ್ಮೆ ನಿಫಾ ವೈರಸ್ ಆತಂಕ ಸೃಷ್ಟಿಯಾಗಿದ್ದು, ಕೋಯಿಕ್ಕೋಡ್ ಜಿಲ್ಲೆಯ 43 ವರ್ಷದ ವ್ಯಕ್ತಿಯಲ್ಲಿ ಸೋಂಕಿನ ಶಂಕೆ ವ್ಯಕ್ತವಾಗಿದೆ. ಪ್ರಾಥಮಿಕ ಪರೀಕ್ಷೆಯಲ್ಲಿ ನಿಫಾ ಸೋಂಕಿನ ಲಕ್ಷಣಗಳು ಕಂಡುಬಂದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ತುರ್ತು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದ್ದು, ರಾಜ್ಯಾದ್ಯಂತ ಹೈ ಅಲರ್ಟ್ ಘೋಷಿಸಲಾಗಿದೆ.

ಕೇರಳ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ನಡೆಸಿದ ಪ್ರಾಥಮಿಕ ಪರೀಕ್ಷೆಯಲ್ಲಿ ಸೋಂಕಿನ ಶಂಕೆ ವ್ಯಕ್ತವಾಗಿದ್ದು, ಅಂತಿಮ ದೃಢೀಕರಣಕ್ಕಾಗಿ ರೋಗಿಯ ಮಾದರಿಯನ್ನು ಪುಣೆಯ ರಾಷ್ಟ್ರೀಯ ವೈರಾಲಜಿ ಸಂಸ್ಥೆಗೆ (NIV) ಕಳುಹಿಸಲಾಗಿದೆ. ಅಂತಿಮ ವರದಿ ಶೀಘ್ರದಲ್ಲೇ ಲಭ್ಯವಾಗುವ ನಿರೀಕ್ಷೆಯಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ಫೆರೋಕ್ ಮೂಲದ ಉದ್ಯಮಿಯಾಗಿರುವ ರೋಗಿ ಮೊದಲಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆರೋಗ್ಯ ಸ್ಥಿತಿ ಗಂಭೀರವಾಗಿದ್ದ ಹಿನ್ನೆಲೆಯಲ್ಲಿ ಅವರನ್ನು ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದ್ದು, ವೆಂಟಿಲೇಟರ್ ಸಹಾಯದೊಂದಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಸೋಂಕು ಹರಡುವಿಕೆಯನ್ನು ತಡೆಯುವ ಉದ್ದೇಶದಿಂದ ರೋಗಿಯ ಸಂಪರ್ಕಕ್ಕೆ ಬಂದವರನ್ನು ಗುರುತಿಸಿ ಪ್ರತ್ಯೇಕಿಸುವ ಕಾರ್ಯವನ್ನು ಆರೋಗ್ಯ ಇಲಾಖೆ ಆರಂಭಿಸಿದೆ. ಆರೋಗ್ಯ ಸಿಬ್ಬಂದಿ ಸೇರಿದಂತೆ ನಿಕಟ ಸಂಪರ್ಕದಲ್ಲಿದ್ದವರಿಗೆ ಕ್ವಾರಂಟೈನ್‌ನಲ್ಲಿ ಇರುವಂತೆ ಸೂಚಿಸಲಾಗಿದೆ.

ಆರೋಗ್ಯ ಇಲಾಖೆ ಪರಿಸ್ಥಿತಿಯನ್ನು ನಿಕಟವಾಗಿ ಗಮನಿಸುತ್ತಿದ್ದು, ಅಗತ್ಯ ಔಷಧಿ ಹಾಗೂ ಚಿಕಿತ್ಸಾ ಸೌಲಭ್ಯಗಳನ್ನು ಸಜ್ಜುಗೊಳಿಸಲಾಗಿದೆ. ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ, ಆದರೆ ಮುನ್ನೆಚ್ಚರಿಕಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಆರೋಗ್ಯ ಇಲಾಖೆ ಮನವಿ ಮಾಡಿದೆ.

ಕೇರಳದಲ್ಲಿ ಈ ಹಿಂದೆ ಹಲವು ಬಾರಿ ನಿಫಾ ಸೋಂಕು ಕಾಣಿಸಿಕೊಂಡಿದ್ದ ಹಿನ್ನೆಲೆಯಲ್ಲಿ ಸೋಂಕು ನಿಯಂತ್ರಣಕ್ಕೆ ವಿಶೇಷ ತಂಡಗಳನ್ನು ನಿಯೋಜಿಸಲಾಗಿದ್ದು, ಪರಿಸ್ಥಿತಿಯ ಪರಿಶೀಲನೆಗಾಗಿ ಹಿರಿಯ ಆರೋಗ್ಯ ಅಧಿಕಾರಿಗಳ ಸಭೆಯನ್ನು ಕರೆಯಲಾಗಿದೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!