ಳ್ಳಾಲ, ಜೂನ್ 12: ಸರಕಾರಿ ಆಸ್ಪತ್ರೆಗಳನ್ನು ಖಾಸಗಿ ಮೆಡಿಕಲ್ ಕಾಲೇಜುಗಳಿಗೆ ಹಸ್ತಾಂತರಿಸುವ ಒಪ್ಪಂದವನ್ನು ರದ್ದುಗೊಳಿಸಿ, ಸಾರ್ವಜನಿಕ ಆರೋಗ್ಯ ವ್ಯವಸ್ಥೆಯನ್ನು ಉಳಿಸಬೇಕು ಎಂದು ಒತ್ತಾಯಿಸಿ ಸಿಪಿಐಎಂ ಉಳ್ಳಾಲ ವಲಯ ಸಮಿತಿಯ ನೇತೃತ್ವದಲ್ಲಿ ಉಳ್ಳಾಲ ಸಮುದಾಯ ಆಸ್ಪತ್ರೆಯ ಮುಂಭಾಗ ಮಾನವ ಸರಪಳಿ ಪ್ರತಿಭಟನೆ ನಡೆಯಿತು.
ಮಾನವ ಸರಪಳಿ ಬಳಿಕ ನಡೆದ ಸಭೆಯನ್ನುದ್ದೇಶಿಸಿ ಮಾತನಾಡಿದ ಸಿಪಿಐಎಂ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯದರ್ಶಿ ಮುನೀರ್ ಕಾಟಿಪಳ್ಳ, ಆರೋಗ್ಯ ಕ್ಷೇತ್ರದ ವ್ಯಾಪಾರೀಕರಣವು ಸಂವಿಧಾನದ ಆಶಯಕ್ಕೆ ವಿರುದ್ಧವಾಗಿದೆ ಎಂದು ಆರೋಪಿಸಿದರು. ಖಾಸಗಿ ಆಸ್ಪತ್ರೆಗಳ ಏಕಸ್ವಾಮ್ಯದಿಂದ ಜಿಲ್ಲೆಯ ಆರೋಗ್ಯ ಕ್ಷೇತ್ರ ಸಂಕಷ್ಟಕ್ಕೆ ಸಿಲುಕಿದ್ದು, ಸರಕಾರಿ ಆಸ್ಪತ್ರೆಗಳನ್ನು ಖಾಸಗಿ ಮೆಡಿಕಲ್ ಕಾಲೇಜುಗಳಿಗೆ ಹಸ್ತಾಂತರಿಸುವ ಕ್ರಮವು ಸಾರ್ವಜನಿಕ ಆರೋಗ್ಯ ಸೇವೆಗೆ ಹೊಡೆತ ನೀಡಲಿದೆ ಎಂದು ಅವರು ಹೇಳಿದರು.
ಜಿಲ್ಲೆಯ ಬಿಜೆಪಿ ಹಾಗೂ ಕಾಂಗ್ರೆಸ್ ಜನಪ್ರತಿನಿಧಿಗಳು ಖಾಸಗಿ ಮೆಡಿಕಲ್ ಕಾಲೇಜುಗಳ ಪರವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಟೀಕಿಸಿದ ಅವರು, ಉಳ್ಳಾಲ ಸಮುದಾಯ ಆಸ್ಪತ್ರೆಯ ನಿರ್ವಹಣೆ ಹಾಗೂ ಅದರ ಕಾರ್ಯವೈಖರಿಯ ಕುರಿತು ಶಾಸಕ ಯು.ಟಿ. ಖಾದರ್ ವಿರುದ್ಧವೂ ವಾಗ್ದಾಳಿ ನಡೆಸಿದರು.
ಪ್ರಾಸ್ತಾವಿಕವಾಗಿ ಮಾತನಾಡಿದ ಸಿಪಿಐಎಂ ಉಳ್ಳಾಲ ವಲಯ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್, ಜನರ ಆರೋಗ್ಯ ರಕ್ಷಣೆಯ ಹೊಣೆ ಹೊತ್ತಿರುವ ರಾಜ್ಯ ಸರ್ಕಾರ ಆರೋಗ್ಯ ಕ್ಷೇತ್ರವನ್ನು ಖಾಸಗಿ ವಲಯಕ್ಕೆ ಒಪ್ಪಿಸುತ್ತಿದೆ ಎಂದು ಆರೋಪಿಸಿದರು. ಸಾರ್ವಜನಿಕ ಆರೋಗ್ಯ ವ್ಯವಸ್ಥೆಯನ್ನು ದುರ್ಬಲಗೊಳಿಸುವ ಯಾವುದೇ ಕ್ರಮವನ್ನು ಜನರು ವಿರೋಧಿಸಬೇಕು ಎಂದು ಅವರು ಕರೆ ನೀಡಿದರು.
ಸಭೆಯಲ್ಲಿ ಸಿಪಿಐಎಂ ಹಿರಿಯ ಮುಖಂಡರಾದ ಕೃಷ್ಣಪ್ಪ ಸಾಲ್ಯಾನ್ ಹಾಗೂ ಯು. ಜಯಂತ ನಾಯಕ್ ಮಾತನಾಡಿದರು. ಪ್ರತಿಭಟನೆಯಲ್ಲಿ ಸಿಪಿಐಎಂ ಜಿಲ್ಲಾ ನಾಯಕರು, ಡಿವೈಎಫ್ಐ ಕಾರ್ಯಕರ್ತರು, ಸ್ಥಳೀಯ ಮುಖಂಡರು ಹಾಗೂ ಸಾರ್ವಜನಿಕರು ಸೇರಿದಂತೆ ನೂರಾರು ಮಂದಿ ಭಾಗವಹಿಸಿದರು.