ಕೊಲ್ಲೂರು, ಜೂನ್ 12: ತಮಿಳುನಾಡಿನ ರಾಜಕೀಯ ನಾಯಕ ಹಾಗೂ ತಮಿಳಗ ವೆಟ್ರಿ ಕಳಗಂ (TVK) ಅಧ್ಯಕ್ಷ ವಿಜಯ್ ಅವರು ಜೂನ್ 12ರಂದು ಮಧ್ಯಾಹ್ನ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆಯಲಿದ್ದಾರೆ ಎಂದು ದೇವಸ್ಥಾನ ಆಡಳಿತ ಮಂಡಳಿ ತಿಳಿಸಿದೆ.
ವಿಜಯ್ ಅವರ ಭೇಟಿಯ ಹಿನ್ನೆಲೆಯಲ್ಲಿ ದೇವಸ್ಥಾನದಲ್ಲಿ ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆಗಳನ್ನು ಕೈಗೊಳ್ಳಲಾಗಿದೆ. ಮಧ್ಯಾಹ್ನ 3 ಗಂಟೆಯಿಂದ 3.30 ಗಂಟೆಯವರೆಗೆ ಸಾರ್ವಜನಿಕರ ದರ್ಶನಕ್ಕೆ ತಾತ್ಕಾಲಿಕ ನಿರ್ಬಂಧ ವಿಧಿಸಲಾಗಿದ್ದು, ಈ ಅವಧಿಯಲ್ಲಿ ಭಕ್ತರಿಗೆ ದೇವಸ್ಥಾನ ಪ್ರವೇಶ ಹಾಗೂ ದರ್ಶನಕ್ಕೆ ಅವಕಾಶ ಇರುವುದಿಲ್ಲ.
ಭದ್ರತಾ ಕಾರಣಗಳಿಂದ ಕೈಗೊಳ್ಳಲಾಗಿರುವ ಈ ಕ್ರಮಕ್ಕೆ ಭಕ್ತರು ಹಾಗೂ ಸಾರ್ವಜನಿಕರು ಸಹಕರಿಸುವಂತೆ ದೇವಸ್ಥಾನ ಆಡಳಿತ ಮನವಿ ಮಾಡಿದೆ.
ವಿಜಯ್ ಅವರ ಭೇಟಿ ಸುಗಮವಾಗಿ ನಡೆಯುವ ನಿಟ್ಟಿನಲ್ಲಿ ದೇವಸ್ಥಾನದಲ್ಲಿ ಅಗತ್ಯ ಸಿದ್ಧತೆಗಳನ್ನು ಪೂರ್ಣಗೊಳಿಸಲಾಗಿದ್ದು, ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿಸಲು ಎಲ್ಲಾ ರೀತಿಯ ವ್ಯವಸ್ಥೆಗಳನ್ನು ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮಧ್ಯಾಹ್ನ 3.30 ಗಂಟೆಯ ಬಳಿಕ ಎಂದಿನಂತೆ ಭಕ್ತರಿಗೆ ದರ್ಶನದ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ದೇವಸ್ಥಾನ ಆಡಳಿತ ಸ್ಪಷ್ಟಪಡಿಸಿದೆ.