ಶಾಲೆ, ಅಂಗನವಾಡಿಗಳ ಕುಡಿಯುವ ನೀರಿನ ಗುಣಮಟ್ಟ ಪರೀಕ್ಷೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಸಿಇಒ ಸೂಚನೆ

ಮಂಗಳೂರು, ಜೂ.12: ಅಂಗನವಾಡಿ ಕೇಂದ್ರಗಳು, ಶಾಲೆಗಳು ಹಾಗೂ ಕಾಲೇಜುಗಳಲ್ಲಿ ಮಕ್ಕಳ ಆರೋಗ್ಯ ಮತ್ತು ಸುರಕ್ಷತೆಯನ್ನು ಕಾಪಾಡುವ ನಿಟ್ಟಿನಲ್ಲಿ ಕುಡಿಯುವ ನೀರಿನ ಗುಣಮಟ್ಟವನ್ನು ನಿಯಮಿತವಾಗಿ ಪರೀಕ್ಷಿಸುವಂತೆ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನರ್ವಾಡೆ ವಿನಾಯಕ ಕಾರ್ಬಾರಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಗುರುವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಜಿಲ್ಲಾ ನೀರು ಮತ್ತು ನೈರ್ಮಲ್ಯ ಮಿಷನ್ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ನೀರಿನಿಂದ ಹರಡುವ ರೋಗಗಳನ್ನು ತಡೆಗಟ್ಟಲು ಎಲ್ಲಾ ನೀರಿನ ಮೂಲಗಳನ್ನು ನಿರಂತರವಾಗಿ ಪರೀಕ್ಷೆಗೆ ಒಳಪಡಿಸುವುದು ಅತ್ಯಗತ್ಯ ಎಂದು ತಿಳಿಸಿದರು.

ಶಾಲೆ ಮತ್ತು ಅಂಗನವಾಡಿಗಳಲ್ಲಿ ಬಳಕೆಯಲ್ಲಿರುವ ನೀರಿನ ಟ್ಯಾಂಕ್‌ಗಳ ಸ್ವಚ್ಛತೆಗೆ ವಿಶೇಷ ಆದ್ಯತೆ ನೀಡಬೇಕು. ಟ್ಯಾಂಕ್‌ಗಳನ್ನು ಕಾಲಕಾಲಕ್ಕೆ ಸ್ವಚ್ಛಗೊಳಿಸುವ ಮೂಲಕ ಮಕ್ಕಳಿಗೆ ಶುದ್ಧ ಹಾಗೂ ಸುರಕ್ಷಿತ ಕುಡಿಯುವ ನೀರನ್ನು ಒದಗಿಸಬೇಕು ಎಂದು ಅವರು ಹೇಳಿದರು.

ಸಭೆಯಲ್ಲಿ ಜಲಜೀವನ್ ಮಿಷನ್ ಸೇರಿದಂತೆ ವಿವಿಧ ಕುಡಿಯುವ ನೀರು ಸರಬರಾಜು ಯೋಜನೆಗಳ ಪ್ರಗತಿಯನ್ನು ಪರಿಶೀಲಿಸಿದ ಸಿಇಒ, ಬಾಕಿ ಉಳಿದಿರುವ ಕಾಮಗಾರಿಗಳನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸುವಂತೆ ಸಂಬಂಧಿತ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಕುಡಿಯುವ ನೀರಿನ ಯೋಜನೆಗಳ ಅನುಷ್ಠಾನದಲ್ಲಿ ಯಾವುದೇ ವಿಳಂಬಕ್ಕೆ ಅವಕಾಶ ನೀಡಬಾರದು ಎಂದು ಎಚ್ಚರಿಸಿದರು.

ಜಿಲ್ಲೆಯ ಎಲ್ಲಾ ಗ್ರಾಮಗಳಲ್ಲಿರುವ ನೀರಿನ ಟ್ಯಾಂಕ್‌ಗಳನ್ನು ಸ್ವಚ್ಛಗೊಳಿಸುವುದರ ಜೊತೆಗೆ, ದುರಸ್ತಿಗೆ ಅಗತ್ಯವಿರುವ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಶೀಘ್ರವಾಗಿ ದುರಸ್ತಿಗೊಳಿಸುವಂತೆ ಸೂಚಿಸಿದರು. ಅಲ್ಲದೆ, ಪ್ರತಿಯೊಂದು ಕುಡಿಯುವ ನೀರಿನ ಮೂಲದಿಂದ ಕಡ್ಡಾಯವಾಗಿ ನೀರಿನ ಮಾದರಿಗಳನ್ನು ಸಂಗ್ರಹಿಸಿ ಪರೀಕ್ಷೆ ನಡೆಸುವಂತೆ ಅಧಿಕಾರಿಗಳಿಗೆ ಆದೇಶಿಸಿದರು.

ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಪೂರೈಕೆಯಲ್ಲಿ ಯಾವುದೇ ವ್ಯತ್ಯಯ ಉಂಟಾಗದಂತೆ ಮುನ್ನೆಚ್ಚರಿಕೆ ವಹಿಸಿ, ಸಾರ್ವಜನಿಕರಿಗೆ ನಿರಂತರವಾಗಿ ಶುದ್ಧ ಕುಡಿಯುವ ನೀರು ಒದಗಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಅವರು ಸೂಚಿಸಿದರು.

ಸಭೆಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದು, ನೀರು ಸರಬರಾಜು ಹಾಗೂ ನೈರ್ಮಲ್ಯಕ್ಕೆ ಸಂಬಂಧಿಸಿದ ಹಲವು ವಿಷಯಗಳ ಕುರಿತು ಚರ್ಚೆ ನಡೆಸಲಾಯಿತು.

SHARE
Loading spinner

Leave a Reply

Your email address will not be published. Required fields are marked *

error: Content is protected !!