ಮಂಗಳೂರು: ತಮಿಳುನಾಡು ಮುಖ್ಯಮಂತ್ರಿ ಹಾಗೂ ನಟ ವಿಜಯ್ ಗುರುವಾರ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿ, ಅಲ್ಲಿಂದ ರಸ್ತೆ ಮಾರ್ಗವಾಗಿ ಉಡುಪಿ ಜಿಲ್ಲೆಯ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ತೆರಳಿದರು.
ಕೊಲ್ಲೂರು ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಲು ವಿಜಯ್ ಆಗಮಿಸಿದ್ದು, ಅವರ ಭೇಟಿಯ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ವತಿಯಿಂದ ಬಿಗಿ ಭದ್ರತಾ ವ್ಯವಸ್ಥೆ ಕೈಗೊಳ್ಳಲಾಗಿದೆ.
ತಮಿಳುನಾಡಿನ ರಾಜಕೀಯ ಹಾಗೂ ಸಿನಿರಂಗದ ಪ್ರಮುಖ ವ್ಯಕ್ತಿಗಳಿಗೆ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನವು ಬಹುಕಾಲದಿಂದಲೂ ಆಕರ್ಷಣೀಯ ಧಾರ್ಮಿಕ ಕೇಂದ್ರವಾಗಿದ್ದು, ಅನೇಕ ಗಣ್ಯರು ಇಲ್ಲಿಗೆ ಭೇಟಿ ನೀಡಿರುವುದು ವಿಶೇಷ.
ಹಿಂದೆ ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಎಂ.ಜಿ. ರಾಮಚಂದ್ರನ್ (ಎಂಜಿಆರ್), ಮಾಜಿ ಮುಖ್ಯಮಂತ್ರಿ ಜಾನಕಿ ರಾಮಚಂದ್ರನ್ ಹಾಗೂ ಮಾಜಿ ಮುಖ್ಯಮಂತ್ರಿ ಜೆ. ಜಯಲಲಿತಾ ಅವರು ಕೂಡ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದರು.
ವಿಜಯ್ ಅವರ ಭೇಟಿ ಹಿನ್ನೆಲೆಯಲ್ಲಿ ದೇವಸ್ಥಾನ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದ್ದು, ಭಕ್ತರ ಸಂಚಾರಕ್ಕೂ ಅಗತ್ಯ ವ್ಯವಸ್ಥೆ ಮಾಡಲಾಗಿದೆ.