ಶಿವಮೊಗ್ಗ, ಜೂನ್ 13: ಸಾಗರ ತಾಲೂಕಿನ ಕಣಪಗಾರು ಗ್ರಾಮದಲ್ಲಿ ನೂತನವಾಗಿ ನಿರ್ಮಿಸಲಾದ ಬಿಎಸ್‌ಎನ್‌ಎಲ್ ಮೊಬೈಲ್ ಟವರ್ ಅನ್ನು ಸಂಸದ ಬಿ.ವೈ. ರಾಘವೇಂದ್ರ ಅವರು ಸಾರ್ವಜನಿಕ ಸೇವೆಗೆ ಲೋಕಾರ್ಪಣೆಗೊಳಿಸಿದರು.
ಮೊಬೈಲ್ ಸಂಪರ್ಕ ಸೌಲಭ್ಯವನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ನಿರ್ಮಿಸಲಾದ ಈ ಟವರ್‌ನಿಂದ ಕಣಪಗಾರು ಹಾಗೂ ಸುತ್ತಮುತ್ತಲಿನ ಗ್ರಾಮಗಳ ಜನರಿಗೆ ಉತ್ತಮ ದೂರಸಂಪರ್ಕ ಸೇವೆ ದೊರೆಯಲಿದೆ.
ಬಳಿಕ ಭಾನುಕುಳ್ಳಿ ತಾಲೂಕು ಪಂಚಾಯತ್ ಕಚೇರಿಯಲ್ಲಿ ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರೊಂದಿಗೆ ಜನಸಂಪರ್ಕ ಸಭೆ ನಡೆಸಿದ ಸಂಸದರು, ಗ್ರಾಮಸ್ಥರ ಕುಂದುಕೊರತೆಗಳನ್ನು ಆಲಿಸಿ ಸಮಸ್ಯೆಗಳ ಪರಿಹಾರಕ್ಕೆ ಅಗತ್ಯ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.
ಕಾರ್ಯಕ್ರಮದಲ್ಲಿ ಮಾಜಿ ಶಾಸಕರಾದ ಹರತಾಳು ಹಾಲಪ್ಪ ಮತ್ತು ಟಿ.ಡಿ. ಮೇಘರಾಜ್, ಸ್ಥಳೀಯ ಜನಪ್ರತಿನಿಧಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.