2028ರಲ್ಲೂ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲಿದೆ: ಶಾಸಕ ಅಶೋಕ್ ರೈ

ಪುತ್ತೂರು, ಜೂ.13: ದೇಶದಲ್ಲಿ ಬೆಲೆ ಏರಿಕೆಯಿಂದ ಜನರು ಸಂಕಷ್ಟಕ್ಕೆ ಸಿಲುಕಿದ್ದು, ಹಲವು ರಾಜ್ಯಗಳಲ್ಲಿ ಭವಿಷ್ಯದ ಬಗ್ಗೆ ಅನಿಶ್ಚಿತತೆ ಎದುರಿಸುತ್ತಿದ್ದಾರೆ. ಆದರೆ ಕರ್ನಾಟಕದಲ್ಲಿ ಜನರು ನೆಮ್ಮದಿಯಿಂದ ಬದುಕುತ್ತಿದ್ದಾರೆ. ಇದಕ್ಕೆ ಕಾಂಗ್ರೆಸ್ ಸರ್ಕಾರದ ಜನಪರ ಯೋಜನೆಗಳೇ ಕಾರಣ ಎಂದು ಶಾಸಕ ಅಶೋಕ್ ರೈ ಹೇಳಿದರು.ಅವರು ಉಪ್ಪಿನಂಗಡಿಯ ರೋಟರಿ ಸಭಾಭವನದಲ್ಲಿ ನಡೆದ ಬ್ಲಾಕ್ ಕಾಂಗ್ರೆಸ್ ಸಭೆಯಲ್ಲಿ ಮಾತನಾಡಿದರು.

ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಜನಪರ ಯೋಜನೆಗಳನ್ನು ಕಾರ್ಯಕರ್ತರು ಮನೆಮನೆಗೆ ತಲುಪಿಸುವ ಕೆಲಸ ಮಾಡಬೇಕು. ಪಕ್ಷದ ಬಲವರ್ಧನೆಗೆ ಕಾರ್ಯಕರ್ತರ ಶ್ರಮ ಅತ್ಯಗತ್ಯ. ಜನರ ಬೇಡಿಕೆಗಳಿಗೆ ಪಕ್ಷಭೇದವಿಲ್ಲದೆ ಸ್ಪಂದಿಸಿ, ಅವುಗಳನ್ನು ಈಡೇರಿಸುವ ಪ್ರಯತ್ನ ಮಾಡಲಾಗಿದೆ. ಜನರ ಸಂಕಷ್ಟಗಳಿಗೆ ಸ್ಪಂದಿಸುವ ಕಾರ್ಯವನ್ನು ಮುಂದುವರಿಸಬೇಕಿದೆ ಎಂದು ಅವರು ಹೇಳಿದರು.

ಉಪ್ಪಿನಂಗಡಿ ಬ್ಲಾಕ್ ವ್ಯಾಪ್ತಿಯಲ್ಲಿ ಪಕ್ಷ ಸಂಘಟನೆ ಉತ್ತಮವಾಗಿ ನಡೆಯುತ್ತಿದ್ದು, ಗ್ರಾಮ ಮಟ್ಟದಲ್ಲಿ ಜನರನ್ನು ಭೇಟಿ ಮಾಡಿ ಅವರ ಸಮಸ್ಯೆಗಳು ಮತ್ತು ಬೇಡಿಕೆಗಳನ್ನು ಆಲಿಸುವ ಮೂಲಕ ಮತ್ತಷ್ಟು ಜನಬೆಂಬಲ ಗಳಿಸಬಹುದು ಎಂದು ಅಭಿಪ್ರಾಯಪಟ್ಟರು.

2028ರಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಮತ್ತೊಮ್ಮೆ ಅಧಿಕಾರಕ್ಕೆ ಬರಲಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಹೆಚ್ಚಿನ ಸ್ಥಾನಗಳನ್ನು ಗೆಲ್ಲುವ ಗುರಿ ಹೊಂದಿದ್ದು, ಅದನ್ನು ಸಾಧಿಸಲು ಕಾರ್ಯಕರ್ತರ ಪರಿಶ್ರಮವೇ ಪ್ರಮುಖವಾಗಿದೆ ಎಂದು ಹೇಳಿದರು.

ಸಭೆಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಯು.ಟಿ. ತೌಸೀಫ್, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಉಮಾನಾಥ ಶೆಟ್ಟಿ ಪೆರ್ನೆ, ಯುವ ಕಾಂಗ್ರೆಸ್ ಅಧ್ಯಕ್ಷ ಫಾರೂಕ್ ಪೆರ್ನೆ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮುರಳೀಧರ್ ರೈ ಮಟಂತಬೆಟ್ಟು, ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಡಾ. ರಾಜಾರಾಂ ಕೆ.ಬಿ., ಹಿರಿಯ ಮುಖಂಡರಾದ ಡಾ. ರಘು, ಸೇಸಪ್ಪ ನೆಕ್ಕಿಲು ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

SHARE
Loading spinner

Leave a Reply

Your email address will not be published. Required fields are marked *

error: Content is protected !!