ಪುತ್ತೂರು: ಪ್ರಭು ಶ್ರೀರಾಮಚಂದ್ರರ ಕುರಿತು ಪ್ರೊ. ಕೆ.ಎಸ್. ಭಗವಾನ್ ನೀಡಿರುವ ಅವಹೇಳನಕಾರಿ ಹೇಳಿಕೆಯನ್ನು ಖಂಡಿಸಿರುವ ಪುತ್ತೂರು ಕಾಂಗ್ರೆಸ್ ಶಾಸಕ ಅಶೋಕ್ ಕುಮಾರ್ ರೈ, ಅವರ ವಿರುದ್ಧ ಕೂಡಲೇ ಸುಮೊಟೊ ಪ್ರಕರಣ ದಾಖಲಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಪ್ರೊ. ಭಗವಾನ್ ಯಾವ ಧರ್ಮವನ್ನು ನಂಬುತ್ತಾರೆ ಎಂಬುದು ನಮಗೆ ತಿಳಿದಿಲ್ಲ. ಆದರೆ ಅವರು ಪದೇಪದೇ ಹಿಂದೂ ಧರ್ಮದ ಭಾವನೆಗಳಿಗೆ ಧಕ್ಕೆ ಉಂಟುಮಾಡುವ ರೀತಿಯ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಇಂತಹ ಹೇಳಿಕೆಗಳಿಂದ ಸಮಾಜದಲ್ಲಿ ಅಶಾಂತಿ ಉಂಟಾಗುವ ಸಾಧ್ಯತೆ ಇದೆ” ಎಂದು ಹೇಳಿದರು.
“ಪ್ರತಿಯೊಬ್ಬರಿಗೂ ತಮ್ಮ ಧರ್ಮ ಮತ್ತು ನಂಬಿಕೆ ಮುಖ್ಯವಾಗಿರುತ್ತದೆ. ಯಾವುದೇ ಧರ್ಮದ ಭಾವನೆಗಳಿಗೆ ಧಕ್ಕೆ ತರುವಂತಹ ಹೇಳಿಕೆಗಳು ಸಮರ್ಥನೀಯವಲ್ಲ. ಭಗವಾನ್ ಅವರ ಈ ರೀತಿಯ ಹೇಳಿಕೆಗಳಿಂದ ಯಾರಿಗೂ ಪ್ರಯೋಜನವಿಲ್ಲ” ಎಂದು ಅಶೋಕ್ ರೈ ಅಭಿಪ್ರಾಯಪಟ್ಟರು.
ಈ ವಿಚಾರವಾಗಿ ಯಾವುದೇ ಹಿಂದೂ ಸಂಘಟನೆಗಳು ತಮ್ಮನ್ನು ಸಂಪರ್ಕಿಸಿ ಮನವಿ ಸಲ್ಲಿಸಿಲ್ಲ. ಆದರೂ ಸಾರ್ವಜನಿಕರ ಧಾರ್ಮಿಕ ಭಾವನೆಗಳಿಗೆ ಗೌರವ ನೀಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದರು.
“ಈ ಸಂಬಂಧ ಗೃಹ ಸಚಿವರು ಹಾಗೂ ಮುಖ್ಯಮಂತ್ರಿ ಅವರ ಗಮನಕ್ಕೆ ವಿಷಯವನ್ನು ತಂದು, ಪ್ರೊ. ಭಗವಾನ್ ವಿರುದ್ಧ ಸುಮೊಟೊ ಪ್ರಕರಣ ದಾಖಲಿಸಿ ಕಠಿಣ ಕ್ರಮ ಜರುಗಿಸುವಂತೆ ಮನವಿ ಮಾಡುತ್ತೇನೆ” ಎಂದು ಶಾಸಕ ಅಶೋಕ್ ಕುಮಾರ್ ರೈ ತಿಳಿಸಿದ್ದಾರೆ.