ಮಂಗಳೂರು: ಕಾಡುಪ್ರಾಣಿಗಳ ಹಾವಳಿಯಿಂದ ಬೆಳೆ ರಕ್ಷಣೆಗಾಗಿ ಅಗತ್ಯವಿರುವ ಕೋವಿ ಪರವಾನಗಿ ನವೀಕರಣಕ್ಕೆ ನಿರಪೇಕ್ಷಣಾ ಪತ್ರ (ಎನ್‌ಒಸಿ) ಪಡೆಯುವಲ್ಲಿ ರೈತರು ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಹರಿಸುವಂತೆ ಆಗ್ರಹಿಸಿ ಭಾರತೀಯ ಜನತಾ ಪಕ್ಷದ ನಿಯೋಗವು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು.
ಉಡುಪಿ-ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಅವರ ಮುಂದಾಳತ್ವದಲ್ಲಿ ಹಾಗೂ ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ ಅವರ ನೇತೃತ್ವದಲ್ಲಿ ನಿಯೋಗವು ಎಸ್‌ಪಿ ಅವರನ್ನು ಭೇಟಿ ಮಾಡಿ, ಎನ್‌ಒಸಿ ನೀಡುವ ಪ್ರಕ್ರಿಯೆಯಲ್ಲಿನ ವಿಳಂಬವನ್ನು ತಪ್ಪಿಸಿ ಕೋವಿ ಪರವಾನಗಿ ನವೀಕರಣಕ್ಕೆ ಅಗತ್ಯ ಕ್ರಮಗಳನ್ನು ತ್ವರಿತವಾಗಿ ಕೈಗೊಳ್ಳುವಂತೆ ಒತ್ತಾಯಿಸಿತು.
ಮನವಿಗೆ ಸ್ಪಂದಿಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ರೈತರ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿದ್ದು, ಎನ್‌ಒಸಿ ವಿತರಣೆಗೆ ಸಂಬಂಧಿಸಿದಂತೆ ಶೀಘ್ರ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ ಎಂದು ತಿಳಿಸಲಾಗಿದೆ.
ಈ ಸಂದರ್ಭದಲ್ಲಿ ಮಾತನಾಡಿದ ಕಿಶೋರ್ ಕುಮಾರ್ ಪುತ್ತೂರು, ಕೃಷಿಕರಿಗೆ ನ್ಯಾಯ ದೊರಕುವವರೆಗೆ ಹಾಗೂ ಎನ್‌ಒಸಿ ಸಮಸ್ಯೆ ಸಂಪೂರ್ಣವಾಗಿ ಬಗೆಹರಿಯುವವರೆಗೆ ಬಿಜೆಪಿ ರೈತರ ಪರವಾಗಿ ನಿರಂತರ ಹೋರಾಟ ನಡೆಸಲಿದೆ ಎಂದು ಹೇಳಿದರು.
ನಿಯೋಗದಲ್ಲಿ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಪ್ರೇಮಾನಂದ ಶೆಟ್ಟಿ, ಪುತ್ತೂರು ನಗರ ಮಂಡಲ ಅಧ್ಯಕ್ಷ ಶಿವಕುಮಾರ್ ಕಲ್ಲಿಮಾರ್ ಹಾಗೂ ಪುತ್ತೂರು ತಾಲೂಕಿನ ಹಲವು ರೈತರು ಭಾಗವಹಿಸಿದ್ದರು.