ವಿದ್ಯಾರ್ಥಿ ಸಮಸ್ಯೆಗಳ ನಿರ್ವಹಣೆಯಲ್ಲಿ ವಿಫಲ: ಮಂಗಳೂರು ವಿವಿ ಉಪಕುಲಪತಿ ರಾಜೀನಾಮೆಗೆ ಎಬಿವಿಪಿ ಒತ್ತಾಯ

ಮಂಗಳೂರು ವಿಶ್ವವಿದ್ಯಾನಿಲಯದ ಮೂಲಭೂತ ಸಮಸ್ಯೆಗಳ ಪರಿಹಾರಕ್ಕೆ ಆಗ್ರಹಿಸಿ ಜೂನ್ 12ರಂದು ಹಮ್ಮಿಕೊಳ್ಳಲಾಗಿದ್ದ ಶಾಂತಿಯುತ ಪ್ರತಿಭಟನೆಯಲ್ಲಿ ಪಾಲ್ಗೊಂಡ ವಿದ್ಯಾರ್ಥಿಗಳನ್ನು ಬಂಧಿಸಿರುವುದು ಪ್ರಜಾಪ್ರಭುತ್ವದ ಹಕ್ಕುಗಳ ಉಲ್ಲಂಘನೆಯಾಗಿದ್ದು, ಈ ಕ್ರಮವನ್ನು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ತೀವ್ರವಾಗಿ ಖಂಡಿಸಿದೆ.

ನಗರದ ಪತ್ರಿಕಾಭವದಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎವಿವಿಪಿ ಕರ್ನಾಟಕ ದಕ್ಷಿಣ ರಾಜ್ಯ ಸಹ ಕಾರ್ಯದರ್ಶಿ ಸುವಿತ್ ಶೆಟ್ಟಿ , ವಿಶ್ವವಿದ್ಯಾನಿಲಯದಲ್ಲಿ ವಿದ್ಯಾರ್ಥಿಗಳು ಎದುರಿಸುತ್ತಿರುವ ಒಂಬತ್ತು ಪ್ರಮುಖ ಸಮಸ್ಯೆಗಳ ಪರಿಹಾರಕ್ಕಾಗಿ ಆಡಳಿತ ಸೌಧದ ಎದುರು ಶಾಂತಿಯುತವಾಗಿ ಪ್ರತಿಭಟನೆ ನಡೆಸಲಾಗಿತ್ತು. ಯಾವುದೇ ರೀತಿಯ ಗದ್ದಲ ಅಥವಾ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗದ ರೀತಿಯಲ್ಲಿ ನಡೆದ ಪ್ರತಿಭಟನೆಯ ನಡುವೆಯೇ ವಿದ್ಯಾರ್ಥಿಗಳನ್ನು ಬಂಧಿಸಲು ಪೊಲೀಸ್ ಇಲಾಖೆಗೆ ಸೂಚನೆ ನೀಡಿರುವುದು ಖಂಡನೀಯ ಎಂದು ಆರೋಪಿಸಿದರು.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಶಾಂತಿಯುತ ಪ್ರತಿಭಟನೆ ನಡೆಸುವುದು ಸಂವಿಧಾನ ನೀಡಿರುವ ಮೂಲಭೂತ ಹಕ್ಕಾಗಿದೆ. ಆದರೆ ವಿದ್ಯಾರ್ಥಿಗಳ ಸಮಸ್ಯೆಗಳಿಗೆ ಸ್ಪಂದಿಸುವ ಬದಲು ಪ್ರತಿಭಟನೆಯನ್ನು ಹತ್ತಿಕ್ಕಲು ಪೊಲೀಸ್ ಇಲಾಖೆಯನ್ನು ಬಳಸಿಕೊಳ್ಳಲಾಗಿದೆ. ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳ ಪರವಾಗಿ ನಿಲ್ಲಬೇಕಾದ ಉಪಕುಲಪತಿಗಳೇ ವಿದ್ಯಾರ್ಥಿಗಳ ಬಂಧನಕ್ಕೆ ಕಾರಣರಾಗಿರುವುದು ವಿಷಾದನೀಯ ಬೆಳವಣಿಗೆಯಾಗಿದೆ.ವಿದ್ಯಾರ್ಥಿಗಳ ಸ್ಥಿತಿಯನ್ನು ಅರೆಯದ ಉಪಕುಲಪತಿಗಳು ಕೂಡಲೇ ರಾಜೀನಾಮೆ ನೀಡಬೇಕೆಂದರು .

ವಿದ್ಯಾರ್ಥಿಗಳ ಸಮಸ್ಯೆಗಳ ಬಗ್ಗೆ ಚರ್ಚಿಸುವ ಸಂದರ್ಭದಲ್ಲಿ ಉಪಕುಲಪತಿಗಳು ನೀಡಿದ ಪ್ರತಿಕ್ರಿಯೆಗಳು ಜವಾಬ್ದಾರಿಯುತ ಆಡಳಿತಾಧಿಕಾರಿಗೆ ತಕ್ಕಂತಿರಲಿಲ್ಲ. ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಬದಲು ವಿದ್ಯಾರ್ಥಿಗಳಿಗೆ ಬೇರೆ ಆಯ್ಕೆಗಳನ್ನು ಹುಡುಕಿಕೊಳ್ಳುವಂತೆ ಹೇಳಿರುವುದು ಹಾಗೂ ಪ್ರತಿಭಟನಾಕಾರರನ್ನು ಗುರಿಯಾಗಿಸಿ ಮಾತನಾಡಿರುವುದು ಸೂಕ್ತವಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದರು.

ಮಂಗಳೂರು ವಿಶ್ವವಿದ್ಯಾನಿಲಯವು ಒಂದು ಕಾಲದಲ್ಲಿ ರಾಜ್ಯದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾಗಿತ್ತು. ಆದರೆ ಮೂಲಸೌಕರ್ಯಗಳ ಕೊರತೆ, ಕುಡಿಯುವ ನೀರಿನ ಸಮಸ್ಯೆ, ಉದ್ಯೋಗಾವಕಾಶಗಳ ಅಭಾವ ಸೇರಿದಂತೆ ಹಲವು ಸಮಸ್ಯೆಗಳಿಂದಾಗಿ ವಿದ್ಯಾರ್ಥಿಗಳ ಪ್ರವೇಶ ಸಂಖ್ಯೆ ವರ್ಷದಿಂದ ವರ್ಷಕ್ಕೆ ಕಡಿಮೆಯಾಗುತ್ತಿದೆ. ಪ್ರತಿಭಟನೆಯ ಬಳಿಕ ತಕ್ಷಣವೇ ಮೂರು ನೀರು ಶುದ್ಧೀಕರಣ ಘಟಕಗಳನ್ನು ಮಂಜೂರು ಮಾಡಿರುವುದೇ ವಿದ್ಯಾರ್ಥಿಗಳು ಪ್ರಸ್ತಾಪಿಸಿದ್ದ ಸಮಸ್ಯೆಗಳ ಗಂಭೀರತೆಯನ್ನು ತೋರಿಸುತ್ತದೆ ಎಂದು ಹೇಳಿದರು.

ವಿದ್ಯಾರ್ಥಿ ಪರಿಷತ್ತು ಯಾವುದೇ ವ್ಯಕ್ತಿ ಅಥವಾ ವ್ಯವಸ್ಥೆಯ ವಿರುದ್ಧ ಹೋರಾಟ ನಡೆಸುತ್ತಿಲ್ಲ. ಬದಲಾಗಿ ವಿಶ್ವವಿದ್ಯಾನಿಲಯದ ಅಭಿವೃದ್ಧಿ ಹಾಗೂ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಸಮಸ್ಯೆಗಳ ಪರಿಹಾರಕ್ಕೆ ಒತ್ತಾಯಿಸುತ್ತಿದೆ. ಮಂಗಳೂರು ವಿಶ್ವವಿದ್ಯಾನಿಲಯದ ಉಳಿವು ಮತ್ತು ಅಭಿವೃದ್ಧಿಗಾಗಿ ಜನಪ್ರತಿನಿಧಿಗಳು, ಶಿಕ್ಷಣ ತಜ್ಞರು ಹಾಗೂ ಸಾರ್ವಜನಿಕರು ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಬೇಕು ಎಂದು ಅವರು ಮನವಿ ಮಾಡಿದರು.

ಸುದ್ದಿಗೋಷ್ಠಿಯಲ್ಲಿ ವಿದ್ಯಾರ್ಥಿ ಸಂಘದ ಪ್ರಮುಖರಾದ ಮನೋಹರ್ , ನಿಹಾರ್ , ಯಶ್ವಿನ್ ಉಪಸ್ಥಿತರಿದ್ದರು .

SHARE
Loading spinner

Leave a Reply

Your email address will not be published. Required fields are marked *

error: Content is protected !!