ಹೊಸ ನಾಯಕತ್ವದಲ್ಲಿ ಸರ್ಕಾರ, ಪಕ್ಷ ಇನ್ನಷ್ಟು ಬಲಿಷ್ಠ: ಜಿಲ್ಲಾ ಕಾಂಗ್ರೆಸ್

ಮಂಗಳೂರು:ರಾಜ್ಯ ಕಾಂಗ್ರೆಸ್ ಸಂಘಟನೆಯಲ್ಲಿ ನಡೆದಿರುವ ಇತ್ತೀಚಿನ ನೇಮಕಾತಿಗಳು ಪಕ್ಷದ ಸಂಘಟನೆಗೆ ಹೊಸ ಚೈತನ್ಯ ಮತ್ತು ಬಲವನ್ನು ನೀಡಲಿದ್ದು, ಹೊಸ ನಾಯಕತ್ವದಡಿ ಸರ್ಕಾರ ಹಾಗೂ ಪಕ್ಷ ಇನ್ನಷ್ಟು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಲಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ. ಹರೀಶ್ ಕುಮಾರ್ ಸಂತಸ ವ್ಯಕ್ತಪಡಿಸಿದರು .

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ಉಪಮುಖ್ಯಮಂತ್ರಿಯಾಗಿದ್ದ ಹಾಗೂ ಕೆಪಿಸಿಸಿ ಅಧ್ಯಕ್ಷರಾಗಿದ್ದ ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿರುವುದು ಪಕ್ಷದ ಕಾರ್ಯಕರ್ತರಲ್ಲಿ ಹೊಸ ಉತ್ಸಾಹ ಮೂಡಿಸಿದೆ ಎಂದರು. ಇದೇ ವೇಳೆ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ, ಎಐಸಿಸಿಯಲ್ಲಿ ಹಲವು ವರ್ಷಗಳ ಕಾಲ ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸಿರುವ ಬಿ.ಕೆ. ಹರಿಪ್ರಸಾದ್ ಅವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾಗಿ ನೇಮಕ ಮಾಡಿರುವುದನ್ನು ಸ್ವಾಗತಿಸಿದರು.

ಅಲ್ಲದೆ, ದಕ್ಷಿಣ ಕನ್ನಡ ಜಿಲ್ಲೆಯ ಹಿರಿಯ ಕಾಂಗ್ರೆಸ್ ಮುಖಂಡ ಹಾಗೂ ಜನಪರ ಹೋರಾಟಗಾರ ಪಿ.ವಿ. ಮೋಹನ್ ಅವರಿಗೆ ವಿಧಾನ ಪರಿಷತ್ ಸದಸ್ಯರಾಗುವ ಅವಕಾಶ ದೊರೆತಿರುವುದು ಜಿಲ್ಲೆಯ ಕಾಂಗ್ರೆಸ್ ಕಾರ್ಯಕರ್ತರಿಗೆ ಸಂತಸದ ವಿಷಯವಾಗಿದೆ ಎಂದು ಹೇಳಿದರು.

ಈ ಎಲ್ಲಾ ನೇಮಕಾತಿಗಳಿಗೆ ಕಾರಣಕರ್ತರಾದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್, ಕರ್ನಾಟಕ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ, ಜಂಟಿ ಕಾರ್ಯದರ್ಶಿ ರೋಜಿ ಜಾನ್ ಹಾಗೂ ಪಕ್ಷದ ಹಿರಿಯ ನಾಯಕರಿಗೆ ಜಿಲ್ಲಾ ಕಾಂಗ್ರೆಸ್ ಪರವಾಗಿ ಕೃತಜ್ಞತೆ ಮತ್ತು ಅಭಿನಂದನೆಗಳನ್ನು ಸಲ್ಲಿಸಿದರು.

ಬಿ.ಕೆ. ಹರಿಪ್ರಸಾದ್ ಅವರ ಪದಗ್ರಹಣ ಸಮಾರಂಭವು ಬೆಂಗಳೂರಿನ ಪ್ಯಾಲೇಸ್ ಗ್ರೌಂಡ್ಸ್‌ನಲ್ಲಿ ನಡೆಯಲಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಬ್ಲಾಕ್‌ಗಳು ಹಾಗೂ ವಿಧಾನಸಭಾ ಕ್ಷೇತ್ರಗಳಿಂದ ಸಾವಿರಾರು ಸಂಖ್ಯೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸಲಿದ್ದಾರೆ. ಈಗಾಗಲೇ ಜಿಲ್ಲೆಯಲ್ಲಿ ಕಾರ್ಯಕರ್ತರ ಪ್ರಯಾಣ ಮತ್ತು ಭಾಗವಹಿಸುವಿಕೆಗೆ ಅಗತ್ಯ ವ್ಯವಸ್ಥೆಗಳನ್ನು ಮಾಡಲಾಗಿದೆ ಎಂದು ತಿಳಿಸಿದರು.

ರಾಜ್ಯದ ಹೊಸ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ಆಡಳಿತಕ್ಕೆ ಮತ್ತಷ್ಟು ವೇಗ ಸಿಗಲಿದ್ದು, ಜನಪರ ಕಾರ್ಯಕ್ರಮಗಳು ಹಾಗೂ ಅಭಿವೃದ್ಧಿ ಕಾರ್ಯಗಳು ಇನ್ನಷ್ಟು ಪರಿಣಾಮಕಾರಿಯಾಗಿ ಜಾರಿಯಾಗಲಿವೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ಇದೇ ವೇಳೆ ಜೂನ್ 23ರಂದು ಕೆಪಿಸಿಸಿ ವತಿಯಿಂದ “ಎಸ್‌ಐಆರ್ ಜಾಗೃತಿ ಸಮಾವೇಶ”ವನ್ನು ರಾಜ್ಯದ ಐದು ವಿಭಾಗಗಳಲ್ಲಿ ಆಯೋಜಿಸಲಾಗಿದೆ ಎಂದು ಮಾಹಿತಿ ನೀಡಿದರು. ಮಂಗಳೂರಿನಲ್ಲಿ ಬೆಳಿಗ್ಗೆ 10.30 ಗಂಟೆಗೆ ಸಮಾವೇಶ ನಡೆಯಲಿದ್ದು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಬೂತ್ ಮಟ್ಟದ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ಹೇಳಿದರು.

ಎಐಸಿಸಿ ಹಾಗೂ ಕೆಪಿಸಿಸಿ ನಿರ್ದೇಶನದ ಮೇರೆಗೆ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ರಾಜ್ಯದ ವಿವಿಧ ಕೇಂದ್ರಗಳಲ್ಲಿ ನಡೆಯುವ ಸಮಾವೇಶಗಳಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಭಾಗವಹಿಸಲಿದ್ದಾರೆ. ಮಂಗಳೂರು ಸಮಾವೇಶದಲ್ಲಿ ಬಿ.ಕೆ. ಹರಿಪ್ರಸಾದ್ ಭಾಗವಹಿಸುವ ಸಾಧ್ಯತೆ ಹೆಚ್ಚಿದ್ದು, ಈ ಕಾರ್ಯಕ್ರಮಕ್ಕೆ ಪಕ್ಷದ ಎಲ್ಲಾ ಮುಖಂಡರು ಹಾಗೂ ಕಾರ್ಯಕರ್ತರಿಗೆ ಆಹ್ವಾನ ನೀಡಲಾಗಿದೆ ಎಂದು ತಿಳಿಸಿದರು

ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಮುಖಂಡರಾದ ಪದ್ಮರಾಜ್ ಆರ್. ಪೂಜಾರಿ, ಶಶಿಧರ್ ಹೆಗ್ಡೆ, ಶುಭೋದಯ ಆಳ್ವ, ಅಪ್ಪಿ, ಶಾಹುಲ್ ಹಮೀದ್, ಪ್ರಕಾಶ್ ಸಾಲಿಯಾನ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

SHARE
Loading spinner

Leave a Reply

Your email address will not be published. Required fields are marked *

error: Content is protected !!