ಸಜಿಪದಲ್ಲಿ ಭೀಕರ ರಸ್ತೆ ಅಪಘಾತ 22 ವರ್ಷದ ಅಹಮದ್ ಆಸೀರ್ ಸ್ಥಳದಲ್ಲೇ ಸಾವು

ಬಂಟ್ವಾಳ, ಜೂನ್ 20: ಮುಡಿಪು–ಬಿ.ಸಿ.ರೋಡ್ ರಸ್ತೆಯ ಸಜಿಪ ಎಂಬಲ್ಲಿ ಶುಕ್ರವಾರ ಸಂಜೆ ಕಾರು ಮತ್ತು ಆಕ್ಟಿವಾ ಸ್ಕೂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಯುವ ಸವಾರರೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.

ಸಜಿಪ ನಿವಾಸಿ ಅಬ್ದುಲ್ ರಹಿಮಾನ್ ಅವರ ಪುತ್ರ ಅಹಮದ್ ಆಸೀರ್ (22) ಮೃತಪಟ್ಟವರು ಎಂದು ಗುರುತಿಸಲಾಗಿದೆ.

ಅಹಮದ್ ಆಸೀರ್ ಅವರು ಸಂಜೆ ತಮ್ಮ ಮನೆಯಿಂದ ಸುಮಾರು ಒಂದು ಕಿಲೋಮೀಟರ್ ದೂರದಲ್ಲಿರುವ ಸಜಿಪ ಬೇಂಕೆ ಪ್ರದೇಶಕ್ಕೆ ಆಕ್ಟಿವಾ ಸ್ಕೂಟರ್‌ನಲ್ಲಿ ತೆರಳುತ್ತಿದ್ದ ವೇಳೆ ಎದುರಿನಿಂದ ಬಂದ ಮಾರುತಿ ಕಾರು ಅವರ ದ್ವಿಚಕ್ರ ವಾಹನಕ್ಕೆ ನೇರವಾಗಿ ಡಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ.

ಅಪಘಾತದ ತೀವ್ರತೆಗೆ ಆಕ್ಟಿವಾ ಸಂಪೂರ್ಣ ಜಖಂಗೊಂಡಿದ್ದು, ಆಸೀರ್ ಅವರ ತಲೆ ಮತ್ತು ದೇಹಕ್ಕೆ ಗಂಭೀರ ಗಾಯಗಳಾಗಿವೆ. ಪರಿಣಾಮ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮೃತ ಅಹಮದ್ ಆಸೀರ್ ಸಮಾಜಮುಖಿ ಕಾರ್ಯಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ಯುವಕರಾಗಿದ್ದರು. ಅವರು ಎಸ್‌ಕೆಎಸ್‌ಎಸ್‌ಎಫ್ ಸಜೀಪನಡು ಶಾಖೆಯ ಸಕ್ರಿಯ ಸದಸ್ಯರಾಗಿದ್ದು, ತುರ್ತು ಸಂದರ್ಭಗಳಲ್ಲಿ ಸಾರ್ವಜನಿಕರ ನೆರವಿಗೆ ಧಾವಿಸುವ “ವಿಖಾಯ್ ಆ್ಯಕ್ಟಿವ್ ವಿಂಗ್” ತಂಡದಲ್ಲಿಯೂ ಸೇವೆ ಸಲ್ಲಿಸುತ್ತಿದ್ದರು.

ಯುವ ಸಮಾಜಸೇವಕರ ಅಕಾಲಿಕ ನಿಧನದ ಸುದ್ದಿ ಸಜಿಪ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ತೀವ್ರ ದುಃಖದ ವಾತಾವರಣ ಸೃಷ್ಟಿಸಿದೆ.

ಘಟನಾ ಸ್ಥಳಕ್ಕೆ ಭೇಟಿ ನೀಡಿದ ಸಂಚಾರಿ ಪೊಲೀಸ್ ಠಾಣೆಯ ಅಧಿಕಾರಿಗಳು ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!