ಬೆಂಗಳೂರು, ಜೂ.25: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ನೂತನ ಆಯುಕ್ತರಾಗಿ ಐಪಿಎಸ್ ಅಧಿಕಾರಿ ಡಿಐಜಿ ಎಂ.ಎನ್. ಅನುಚೇತ್ ಅವರು ಗುರುವಾರ ಅಧಿಕಾರ ಸ್ವೀಕರಿಸಿದರು.
ಇದುವರೆಗೆ ಇಲಾಖೆಯ ಆಯುಕ್ತರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಹಿರಿಯ ಐಪಿಎಸ್ ಅಧಿಕಾರಿ ಹಾಗೂ ಎಡಿಜಿಪಿ ಹೇಮಂತ್ ಎಂ. ನಿಂಬಾಳ್ಕರ್ ಅವರು ನೂತನ ಆಯುಕ್ತರಿಗೆ ಅಧಿಕಾರ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಇಲಾಖೆಯ ಹಿರಿಯ ಅಧಿಕಾರಿಗಳು ಅನುಚೇತ್ ಅವರಿಗೆ ಶುಭ ಹಾರೈಸಿದರು.
ಸರ್ಕಾರವು ಎಂ.ಎನ್. ಅನುಚೇತ್ ಅವರಿಗೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತ ಹುದ್ದೆಯ ಜೊತೆಗೆ ಯುವಜನ ಸೇವೆ ಮತ್ತು ಕ್ರೀಡಾ ಇಲಾಖೆಯ ಆಯುಕ್ತರ ಹೆಚ್ಚುವರಿ ಪ್ರಭಾರವನ್ನೂ ವಹಿಸಿದೆ.
ಮೂಲತಃ ಕೋಲಾರ ಜಿಲ್ಲೆಯವರಾದ ಅನುಚೇತ್ ಅವರು ಬೆಂಗಳೂರಿನ ಆರ್.ವಿ. ಇಂಜಿನಿಯರಿಂಗ್ ಕಾಲೇಜಿನಲ್ಲಿ 2006ರಲ್ಲಿ ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ ಪದವಿ ಪಡೆದಿದ್ದಾರೆ. ನಂತರ ನಾಗರಿಕ ಸೇವೆಗೆ ಸೇರುವ ಉದ್ದೇಶದಿಂದ ಸಿವಿಲ್ ಸರ್ವಿಸ್ ಪರೀಕ್ಷೆ ಬರೆದು 2008ರಲ್ಲಿ ಉತ್ತಮ ಸಾಧನೆ ತೋರಿದ್ದರು. ತದನಂತರ 2009ರ ಬ್ಯಾಚ್‌ನ ಕರ್ನಾಟಕ ಕೇಡರ್‌ನ ಐಪಿಎಸ್ ಅಧಿಕಾರಿಯಾಗಿ ಆಯ್ಕೆಯಾಗಿದ್ದರು.
ತಂತ್ರಜ್ಞಾನ ಆಧಾರಿತ ಪೊಲೀಸ್ ವ್ಯವಸ್ಥೆ ಹಾಗೂ ಸಮರ್ಥ ಆಡಳಿತಕ್ಕಾಗಿ ಹೆಸರುವಾಸಿಯಾಗಿರುವ ಅನುಚೇತ್ ಅವರು, ಪೊಲೀಸ್ ಇಲಾಖೆಯಲ್ಲಿ ಹಲವು ಮಹತ್ವದ ಹುದ್ದೆಗಳನ್ನು ನಿರ್ವಹಿಸಿದ್ದಾರೆ. ಅತ್ಯುತ್ತಮ ತನಿಖಾ ಕಾರ್ಯಗಳಿಗಾಗಿ ಕೇಂದ್ರ ಸರ್ಕಾರದಿಂದ ಪ್ರತಿಷ್ಠಿತ ‘ಕೇಂದ್ರ ಗೃಹ ಸಚಿವರ ಅತ್ಯುತ್ತಮ ತನಿಖಾ ಪದಕ’ಕ್ಕೂ ಭಾಜನರಾಗಿದ್ದಾರೆ.
2011ರಲ್ಲಿ ಪುತ್ತೂರಿನ ಸಹಾಯಕ ಪೊಲೀಸ್ ಅಧೀಕ್ಷಕರಾಗಿ (ಎಎಸ್ಪಿ) ವೃತ್ತಿಜೀವನ ಆರಂಭಿಸಿದ ಅವರು, ಬಳಿಕ ಸಿಐಡಿ ವಿಭಾಗದ ಎಸ್ಪಿ, ಬೆಂಗಳೂರು ಕೇಂದ್ರ ವಿಭಾಗದ ಡಿಸಿಪಿ ಸೇರಿದಂತೆ ವಿವಿಧ ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ. ಇತ್ತೀಚೆಗೆ ಬೆಂಗಳೂರು ನಗರದ ಜಂಟಿ ಪೊಲೀಸ್ ಆಯುಕ್ತ (ಸಂಚಾರ)ರಾಗಿ ಕಾರ್ಯನಿರ್ವಹಿಸಿದ್ದ ಅವರು, ನಗರ ಸಂಚಾರ ನಿರ್ವಹಣೆಯಲ್ಲಿ ಕೃತಕ ಬುದ್ಧಿಮತ್ತೆ (ಎಐ) ತಂತ್ರಜ್ಞಾನ ಅಳವಡಿಕೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಈ ಹುದ್ದೆಗೆ ಮುನ್ನ ಪೊಲೀಸ್ ನೇಮಕಾತಿ ವಿಭಾಗದ ಡಿಐಜಿಪಿಯಾಗಿ ಕಾರ್ಯನಿರ್ವಹಿಸುತ್ತಿದ್ದರು.
ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ಇಲಾಖೆಯ ಜಂಟಿ ನಿರ್ದೇಶಕರಾದ ಮಂಜುನಾಥ ಡೊಳ್ಳಿನ್, ಸಿದ್ದೇಶ್ವರಪ್ಪ ಜಿ.ಬಿ., ಸಿ.ಆರ್. ನವೀನ್, ಉಪನಿರ್ದೇಶಕರಾದ ಬಿ.ಕೆ. ರಾಮಲಿಂಗಪ್ಪ, ಶಫಿ ಸಾದುದ್ದೀನ್ ಸೇರಿದಂತೆ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.