ಬಂಟ್ವಾಳ, ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್, ಬಂಟ್ವಾಳ ಉಪವಿಭಾಗ, ಬಂಟ್ವಾಳ ನಗರ ಪೊಲೀಸ್ ಠಾಣೆ, ಶಿಕ್ಷಣ ಇಲಾಖೆ, ಬಂಟ್ವಾಳ ತಾಲೂಕಿನ ವಿವಿಧ ಶಿಕ್ಷಣ ಸಂಸ್ಥೆಗಳು ಹಾಗೂ ಲಯನ್ಸ್ ಮತ್ತು ವಿವಿಧ ಸಂಘ-ಸಂಸ್ಥೆಗಳ ಸಹಯೋಗದಲ್ಲಿ ‘ಮಾದಕ ವಸ್ತುಗಳ ದುರುಪಯೋಗ ಮತ್ತು ಅಕ್ರಮ ಸಾಗಾಣಿಕೆ ವಿರುದ್ಧ ಅಂತರಾಷ್ಟ್ರೀಯ ದಿನ–2026’ ಅಂಗವಾಗಿ ಜನಜಾಗೃತಿ ಕಾರ್ಯಕ್ರಮ ಹಾಗೂ ಕಾಲ್ನಡಿಗೆ ಜಾಥಾ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಬಂಟ್ವಾಳ ಉಪವಿಭಾಗದ ಎಎಸ್ಪಿ ಯಶ್ ಕುಮಾರ್ ಶರ್ಮಾ (ಐಪಿಎಸ್) ಮಾತನಾಡಿ, ವಿದ್ಯಾರ್ಥಿಗಳು ಮಾದಕ ವಸ್ತುಗಳ ದುಷ್ಪರಿಣಾಮಗಳ ಬಗ್ಗೆ ಸದಾ ಜಾಗೃತರಾಗಿರಬೇಕು. ಡ್ರಗ್ಸ್ ಮುಕ್ತ ಬಂಟ್ವಾಳ ನಿರ್ಮಾಣಕ್ಕೆ ಯುವ ಸಮುದಾಯ ಪೊಲೀಸ್ ಇಲಾಖೆಯೊಂದಿಗೆ ಕೈಜೋಡಿಸಬೇಕು ಎಂದು ಕರೆ ನೀಡಿದರು.
ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದ ತಾಲೂಕು ಆಸ್ಪತ್ರೆಯ ಆಪ್ತ ಸಮಾಲೋಚಕಿ ಅಕ್ಷತಾ ಹಾಗೂ ಜಿಲ್ಲಾ ಮಾನಸಿಕ ಆರೋಗ್ಯ ವಿಭಾಗದ ಆಪ್ತ ಸಮಾಲೋಚಕಿ ದಿವ್ಯಾ ಎನ್ ವಿದ್ಯಾರ್ಥಿಗಳಿಗೆ ಮಾದಕ ವಸ್ತುಗಳ ದುಷ್ಪರಿಣಾಮ ಹಾಗೂ ತಡೆಗಟ್ಟುವ ಕ್ರಮಗಳ ಕುರಿತು ಅರಿವು ಮೂಡಿಸಿದರು.
ಕಾರ್ಯಕ್ರಮದಲ್ಲಿ ಬಂಟ್ವಾಳ ನಗರ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಅನಂತ ಪದ್ಮನಾಭ ಕೆ.ವಿ., ಲಯನ್ಸ್ ಕ್ಲಬ್ ಹಾಗೂ ರೋಟರಿ ಕ್ಲಬ್ನ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಬಂಟ್ವಾಳ ತಾಲೂಕಿನ ವಿವಿಧ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳು, ಶಿಕ್ಷಕರು, ಬಂಟ್ವಾಳ ನಗರ ಮತ್ತು ಸಂಚಾರ ಪೊಲೀಸ್ ಠಾಣೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ವೇದಿಕೆ ಕಾರ್ಯಕ್ರಮದ ಬಳಿಕ ವಿದ್ಯಾರ್ಥಿಗಳು ಡ್ರಗ್ಸ್ ವಿರೋಧಿ ಘೋಷಣೆಗಳಿರುವ ಫಲಕಗಳನ್ನು ಹಿಡಿದು ಬಿ.ಸಿ.ರೋಡ್ವರೆಗೆ ಕಾಲ್ನಡಿಗೆ ಜಾಥಾ ನಡೆಸಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದರು.