ಬೆಳ್ತಂಗಡಿ, ಜೂ. 26: ಪರಿಶ್ರಮ, ದೃಢ ಸಂಕಲ್ಪ ಹಾಗೂ ನಿರಂತರ ಅಭ್ಯಾಸದ ಮೂಲಕ ಯಾವುದೇ ಗುರಿಯನ್ನು ಸಾಧಿಸಬಹುದು. ಸಿಎ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಯಶಸ್ಸು ಗಳಿಸಲು ನಿಖರವಾದ ಅಧ್ಯಯನ, ಸಮರ್ಪಕ ಮಾರ್ಗದರ್ಶನ ಹಾಗೂ ಸಂಶೋಧನಾತ್ಮಕ ಕಲಿಕೆಯ ಮನೋಭಾವ ಅಗತ್ಯ ಎಂದು ಯುವ ಲೆಕ್ಕಪರಿಶೋಧಕಿ (ಸಿಎ) ನಿರೀಕ್ಷಾ ನಾವರ ಹೇಳಿದರು.
ಗುರುವಾಯನಕೆರೆಯ ವಿದ್ವತ್ ಪಿಯು ಕಾಲೇಜಿನ ವಾಣಿಜ್ಯಶಾಸ್ತ್ರ ವಿಭಾಗದ ವತಿಯಿಂದ ಜೂನ್ 25ರಂದು ಕಾಲೇಜಿನ ಸಭಾಂಗಣದಲ್ಲಿ ಆಯೋಜಿಸಿದ್ದ ಸಿಎ ಸ್ಪರ್ಧಾತ್ಮಕ ಪರೀಕ್ಷೆ ಕುರಿತು ಮಾಹಿತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
“ಸಿಎ ಪರೀಕ್ಷೆ ಅತ್ಯಂತ ಕಠಿಣ ಎಂಬ ಅಭಿಪ್ರಾಯ ಸಾಮಾನ್ಯವಾಗಿದೆ. ಆದರೆ ಸೂಕ್ತ ಯೋಜನೆ, ದೀರ್ಘಕಾಲೀನ ತಯಾರಿ ಮತ್ತು ನಿರಂತರ ಅಭ್ಯಾಸದ ಮೂಲಕ ಈ ಪರೀಕ್ಷೆಯಲ್ಲಿ ಯಶಸ್ಸು ಸಾಧಿಸುವುದು ಸಾಧ್ಯ. ಸರಿಯಾದ ಮನಸ್ಥಿತಿ, ಶಿಸ್ತುಬದ್ಧ ಸಿದ್ಧತೆ ಹಾಗೂ ಉತ್ತಮ ಮಾರ್ಗದರ್ಶನ ಯಶಸ್ಸಿನ ಪ್ರಮುಖ ಅಂಶಗಳಾಗಿವೆ,” ಎಂದು ಅವರು ವಿದ್ಯಾರ್ಥಿಗಳಿಗೆ ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಅಧ್ಯಕ್ಷ ಸುಭಾಶ್ಚಂದ್ರ ಶೆಟ್ಟಿ ಮಾತನಾಡಿ, ವಿದ್ಯಾರ್ಥಿಗಳ ಪ್ರತಿಭೆ ಅನಾವರಣಗೊಳಿಸಲು ವಿದ್ವತ್ ಸಂಸ್ಥೆ ಎಲ್ಲಾ ರೀತಿಯ ಶೈಕ್ಷಣಿಕ ಅವಕಾಶಗಳನ್ನು ಕಲ್ಪಿಸುತ್ತಿದೆ. ಆ ಅವಕಾಶಗಳನ್ನು ಸಮರ್ಪಕವಾಗಿ ಬಳಸಿಕೊಂಡು ಭವಿಷ್ಯಕ್ಕೆ ಸಜ್ಜಾಗಬೇಕು. ಅವಕಾಶಗಳು ನಮ್ಮನ್ನು ಹುಡುಕಿಕೊಂಡು ಬರುವುದಿಲ್ಲ; ನಾವು ಅವುಗಳನ್ನು ಅರಸಿ ಅಗತ್ಯ ಪೂರ್ವತಯಾರಿ ನಡೆಸಬೇಕು ಎಂದು ಸಲಹೆ ನೀಡಿದರು.
ಶೈಕ್ಷಣಿಕ ನಿರ್ದೇಶಕ ಗಂಗಾಧರ್ ಇ.ಎಂ. ಮಾತನಾಡಿ, ವಿದ್ಯಾರ್ಥಿಗಳ ಶೈಕ್ಷಣಿಕ ಗುಣಮಟ್ಟ ಹೆಚ್ಚಿಸಲು ವೈಯಕ್ತಿಕ ಮಾರ್ಗದರ್ಶನ ಮತ್ತು ಆಪ್ತ ಸಮಾಲೋಚನೆಗೆ ಹೆಚ್ಚಿನ ಆದ್ಯತೆ ನೀಡುತ್ತಿರುವ ಮಾದರಿ ಶಿಕ್ಷಣ ಸಂಸ್ಥೆಯಾಗಿ ವಿದ್ವತ್ ಪಿಯು ಕಾಲೇಜು ಗುರುತಿಸಿಕೊಂಡಿದೆ. ವಿದ್ಯಾರ್ಥಿಗಳು ದುಶ್ಚಟಗಳಿಂದ ದೂರವಿದ್ದು ಧನಾತ್ಮಕ ಚಿಂತನೆ ಹಾಗೂ ಗುರಿಯತ್ತ ಪರಿಶ್ರಮಿಸಿದರೆ ನಿರೀಕ್ಷಾ ನಾವರ ಅವರಂತೆ ಸಾಧನೆ ಮಾಡಿ ಸಮಾಜಕ್ಕೆ ಮಾದರಿಯಾಗಬಹುದು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಸಂಸ್ಥೆಯ ಕಾರ್ಯದರ್ಶಿ ಪ್ರಜ್ವಲ್ ರೈ, ಟ್ರಸ್ಟಿ ಕಾಶಿನಾಥ್ ಎಂ.ಕೆ., ಆಡಳಿತಾಧಿಕಾರಿ ಅಶೋಕ್ ಶೆಟ್ಟಿ ಹಾಗೂ ವಾಣಿಜ್ಯ ವಿಭಾಗದ ಮುಖ್ಯಸ್ಥೆ ಮತ್ತು ಕಾರ್ಯಕ್ರಮದ ಸಂಯೋಜಕಿ ಡಾ. ಮಹಿತಾ ಉಪಸ್ಥಿತರಿದ್ದರು.
ವಿದ್ಯಾರ್ಥಿ ಸ್ಪಂದನ್ ಶೆಟ್ಟಿ ಸ್ವಾಗತಿಸಿದರು. ಮೈಲಾರ್ ಕಾಳಿಂಗೇಶ್ವರ್ ಚಿಳ್ಳಾಲೆ ಅತಿಥಿಗಳನ್ನು ಪರಿಚಯಿಸಿದರು. ಬುವಿ ಎಸ್. ಹೆಗಡೆ ಕಾರ್ಯಕ್ರಮ ನಿರೂಪಿಸಿದರು.