5 ವರ್ಷದೊಳಗಿನ ಮಕ್ಕಳಿಗೆ ಪೋಲಿಯೊ ಲಸಿಕೆ ನೀಡುವ ರಾಷ್ಟ್ರೀಯ ಪಲ್ಸ್ ಪೋಲಿಯೊ ಅಭಿಯಾನಕ್ಕೆ ಭಾನುವಾರ ಮಂಗಳೂರಿನ ಸರಕಾರಿ ಲೇಡಿಗೋಷನ್ ಆಸ್ಪತ್ರೆಯಲ್ಲಿ ಚಾಲನೆ ನೀಡಲಾಯಿತು.
ವಿಧಾನಪರಿಷತ್ ಸದಸ್ಯ ಐವನ್ ಡಿಸೋಜಾ ಅವರು ಮಗುವಿಗೆ ಪೋಲಿಯೊ ಹನಿ ಹಾಕುವ ಮೂಲಕ ಅಭಿಯಾನಕ್ಕೆ ಅಧಿಕೃತ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಭಾರತವು ಪೋಲಿಯೊ ಮುಕ್ತ ರಾಷ್ಟ್ರವಾಗಿ ಗುರುತಿಸಿಕೊಂಡಿದ್ದರೂ, ಆ ಸಾಧನೆಯನ್ನು ಉಳಿಸಿಕೊಳ್ಳಲು ಪ್ರತಿಯೊಬ್ಬ ಮಗುವಿಗೂ ಪೋಲಿಯೊ ಲಸಿಕೆ ನೀಡುವುದು ಅತ್ಯಗತ್ಯವಾಗಿದೆ. ಪಾಲಕರು ಯಾವುದೇ ನಿರ್ಲಕ್ಷ್ಯ ವಹಿಸದೆ ತಮ್ಮ 5 ವರ್ಷದೊಳಗಿನ ಮಕ್ಕಳಿಗೆ ತಪ್ಪದೇ ಪೋಲಿಯೊ ಲಸಿಕೆ ಹಾಕಿಸಬೇಕು ಎಂದು ಮನವಿ ಮಾಡಿದರು.


ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯಾಧಿಕಾರಿ ಡಾ. ಹೆಚ್.ಆರ್. ತಿಮ್ಮಯ್ಯ, ಲೇಡಿಗೋಷನ್ ಆಸ್ಪತ್ರೆಯ ಅಧೀಕ್ಷಕ ಡಾ. ದುರ್ಗಾಪ್ರಸಾದ್, ಆರ್‌ಎಂಒ ಡಾ. ಜಗದೀಶ್, ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಡಾ. ರಾಜೇಶ್ ಸೇರಿದಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.


