ಸಹಕಾರ ಚಳುವಳಿಯ ಮೂಲಕ ದೇಶದ ಸಮಗ್ರ ಅಭಿವೃದ್ಧಿ ಸಾಧ್ಯ: ಸಹಕಾರ ರತ್ನ ಡಾ. ಎಂ.ಎನ್. ರಾಜೇಂದ್ರ ಕುಮಾರ್

ಮಂಗಳೂರು: ಕೇಂದ್ರ ಸಹಕಾರ ಸಚಿವಾಲಯ ಸ್ಥಾಪನೆಯಾಗಿ ಐದು ಸಂವತ್ಸರಗಳು ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ., ಬೆಂಗಳೂರು, ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ನಿ., ಬೆಂಗಳೂರು, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ಎಸ್‌ಸಿಡಿಸಿಸಿ ಬ್ಯಾಂಕ್), ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಸಹಕಾರ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾದ ವಿಶೇಷ ಸಹಕಾರ ಸಪ್ತಾಹ ಉದ್ಘಾಟನಾ ಕಾರ್ಯಕ್ರಮ ಸೋಮವಾರ ನಗರದ ಎಸ್‌ಸಿಡಿಸಿಸಿ ಬ್ಯಾಂಕ್ ಸಭಾಂಗಣದಲ್ಲಿ ವಿಜೃಂಭಣೆಯಿಂದ ನಡೆಯಿತು.

ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದ ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ, ಸಹಕಾರ ರತ್ನ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಮಾತನಾಡಿ, ಸಹಕಾರ ಚಳುವಳಿಯು ಕೇವಲ ಆರ್ಥಿಕ ಚಟುವಟಿಕೆಗೆ ಸೀಮಿತವಾಗಿಲ್ಲ; ಅದು ಸಮಾಜದ ಎಲ್ಲಾ ವರ್ಗದ ಜನರನ್ನು ಒಗ್ಗೂಡಿಸಿ ಸ್ವಾವಲಂಬಿ ಬದುಕಿನತ್ತ ಕೊಂಡೊಯ್ಯುವ ಸಾಮಾಜಿಕ ಮತ್ತು ಆರ್ಥಿಕ ಪರಿವರ್ತನೆಯ ಮಹತ್ವದ ಸಾಧನವಾಗಿದೆ ಎಂದು ಹೇಳಿದರು.

“ನಮಗೆ ಯಾವುದೇ ರಾಜಕೀಯ ಪಕ್ಷವಿಲ್ಲ. ನಮ್ಮ ಪಕ್ಷವೇ ಸಹಕಾರಿ ಪಕ್ಷ. ಸಹಕಾರ ಚಳುವಳಿಯ ಮೂಲಕವೇ ದೇಶದ ಸಮಗ್ರ ಅಭಿವೃದ್ಧಿ ಸಾಧ್ಯ ಎಂಬ ನಂಬಿಕೆಯನ್ನು ನಾವು ಹೊಂದಿದ್ದೇವೆ. ರಾಜ್ಯದಲ್ಲಿ 47 ಸಾವಿರಕ್ಕೂ ಅಧಿಕ ಸಹಕಾರಿ ಸಂಘಗಳು ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿದ್ದು, ಗ್ರಾಮೀಣ ಪ್ರದೇಶದಿಂದ ನಗರ ಪ್ರದೇಶದವರೆಗೆ ಲಕ್ಷಾಂತರ ಜನರ ಬದುಕಿಗೆ ಆರ್ಥಿಕ ಭದ್ರತೆ ಒದಗಿಸುತ್ತಿವೆ. ವಾಣಿಜ್ಯ ಬ್ಯಾಂಕ್‌ಗಳಿಗೆ ಹೋಲಿಸಿದರೆ ಸಹಕಾರಿ ಬ್ಯಾಂಕ್‌ಗಳು ರೈತರು, ಕಾರ್ಮಿಕರು, ಮಹಿಳೆಯರು, ಸಣ್ಣ ವ್ಯಾಪಾರಿಗಳು ಹಾಗೂ ಮಧ್ಯಮ ವರ್ಗದ ಜನರಿಗೆ ಸುಲಭವಾಗಿ ಸಾಲ, ಉಳಿತಾಯ ಮತ್ತು ವಿವಿಧ ಹಣಕಾಸು ಸೇವೆಗಳನ್ನು ಒದಗಿಸುತ್ತಿವೆ. ಜನಸಾಮಾನ್ಯರ ವಿಶ್ವಾಸವನ್ನು ಗಳಿಸಿರುವ ಸಹಕಾರ ಕ್ಷೇತ್ರವನ್ನು ಇನ್ನಷ್ಟು ಬಲಪಡಿಸುವ ಮೂಲಕ ದೇಶದ ಅಭಿವೃದ್ಧಿಗೆ ಪ್ರತಿಯೊಬ್ಬರೂ ಕೈಜೋಡಿಸಬೇಕು,” ಎಂದು ಕರೆ ನೀಡಿದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ್ ಡಿ. ಕಾಮತ್ ಮಾತನಾಡಿ, ಸ್ವಾತಂತ್ರ್ಯೋತ್ತರ ಭಾರತದಲ್ಲಿ ಸಹಕಾರಿ ಚಳುವಳಿ ದೇಶದ ಆರ್ಥಿಕ ಬೆಳವಣಿಗೆಗೆ ಅಪಾರ ಕೊಡುಗೆ ನೀಡಿದೆ. ಕೃಷಿ, ಹೈನುಗಾರಿಕೆ, ಬ್ಯಾಂಕಿಂಗ್, ಗ್ರಾಮೀಣ ಅಭಿವೃದ್ಧಿ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಸಹಕಾರಿ ಸಂಸ್ಥೆಗಳು ನಿರ್ವಹಿಸಿರುವ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ಹೇಳಿದರು.

“2047ರ ವೇಳೆಗೆ ಅಭಿವೃದ್ಧಿ ಹೊಂದಿದ, ಆತ್ಮನಿರ್ಭರ ಮತ್ತು ಶಕ್ತಿಶಾಲಿ ಭಾರತ ನಿರ್ಮಿಸುವ ಗುರಿಯನ್ನು ಪ್ರಧಾನಿ ನರೇಂದ್ರ ಮೋದಿ ಹೊಂದಿದ್ದಾರೆ. ಈ ಕನಸಿನ ಸಾಕಾರಕ್ಕೆ ಕೇಂದ್ರ ಸಹಕಾರ ಸಚಿವಾಲಯ ಹಲವು ದೂರದೃಷ್ಟಿಯ ಯೋಜನೆಗಳನ್ನು ಜಾರಿಗೆ ತರುತ್ತಿದೆ. ಸಹಕಾರಿ ಸಂಸ್ಥೆಗಳ ಆಧುನೀಕರಣ, ಡಿಜಿಟಲೀಕರಣ ಹಾಗೂ ಪಾರದರ್ಶಕ ಆಡಳಿತಕ್ಕೆ ಒತ್ತು ನೀಡಲಾಗುತ್ತಿದೆ. ಇವುಗಳ ಮೂಲಕ ಗ್ರಾಮೀಣ ಆರ್ಥಿಕತೆಯನ್ನು ಮತ್ತಷ್ಟು ಸದೃಢಗೊಳಿಸುವ ಪ್ರಯತ್ನ ನಡೆಯುತ್ತಿದೆ,” ಎಂದು ಅವರು ತಿಳಿಸಿದರು.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಹಕಾರ ಕ್ಷೇತ್ರದ ಬೆಳವಣಿಗೆಯನ್ನು ಉಲ್ಲೇಖಿಸಿದ ಅವರು, “ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರ ದೂರದೃಷ್ಟಿಯ ನಾಯಕತ್ವದಿಂದ ಜಿಲ್ಲೆಯ ಸಹಕಾರಿ ಕ್ಷೇತ್ರದಲ್ಲಿ ಅಮೂಲಾಗ್ರ ಬದಲಾವಣೆ ಕಂಡುಬಂದಿದೆ. ವಿಶೇಷವಾಗಿ ಮಹಿಳಾ ಸ್ವಸಹಾಯ ಸಂಘಗಳು, ಮಹಿಳಾ ಸಹಕಾರಿ ಸಂಘಗಳು ಹಾಗೂ ವಿವಿಧ ಸ್ವಾವಲಂಬಿ ಯೋಜನೆಗಳ ಮೂಲಕ ಸಾವಿರಾರು ಮಹಿಳೆಯರು ಆರ್ಥಿಕವಾಗಿ ಸಬಲರಾಗಿದ್ದಾರೆ. ಮಹಿಳೆಯರನ್ನು ಆರ್ಥಿಕ ಮುಖ್ಯವಾಹಿನಿಗೆ ತರುವಲ್ಲಿ ಜಿಲ್ಲೆಯ ಸಹಕಾರಿ ಸಂಸ್ಥೆಗಳು ರಾಜ್ಯಕ್ಕೇ ಮಾದರಿಯಾಗಿವೆ. ಮುಂದಿನ ದಿನಗಳಲ್ಲಿಯೂ ಮಹಿಳೆಯರು ಸಹಕಾರಿ ಯೋಜನೆಗಳ ಸದುಪಯೋಗ ಪಡೆದು ಸಮಾಜದ ಅಭಿವೃದ್ಧಿಗೆ ತಮ್ಮ ಕೊಡುಗೆಯನ್ನು ನೀಡಬೇಕು,” ಎಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷ ರವಿರಾಜ್ ಹೆಗ್ಡೆ, ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ನಿರ್ದೇಶಕ ಜಯಕರ ಶೆಟ್ಟಿ ಬಿ. ಇಂದ್ರಾಳಿ, ಸಹಕಾರ ಸಂಘಗಳ ಉಪನಿಬಂಧಕ ಹೆಚ್.ಎನ್. ರಮೇಶ್, ಹಿರಿಯ ಸಹಕಾರಿ ಮುಖಂಡ ದೇವಿಪ್ರಸಾದ್ ಶೆಟ್ಟಿ ಬೆಳಪು, ಜಿಲ್ಲಾ ಸಹಕಾರಿ ಯೂನಿಯನ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಸ್.ವಿ. ಹಿರೇಮರ್, ಎಸ್‌ಸಿಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ವಿನಯ್ ಕುಮಾರ್ ಸೂರಿಂಜೆ, ಬ್ಯಾಂಕ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗೋಪಾಲಕೃಷ್ಣ ಭಟ್ ಸೇರಿದಂತೆ ಸಹಕಾರ ಕ್ಷೇತ್ರದ ಪ್ರಮುಖರು, ವಿವಿಧ ಸಹಕಾರಿ ಸಂಘಗಳ ಪದಾಧಿಕಾರಿಗಳು, ನಿರ್ದೇಶಕರು, ಸಿಬ್ಬಂದಿ ಹಾಗೂ ಗಣ್ಯರು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷ ರವಿರಾಜ್ ಹೆಗ್ಡೆ, ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ನಿರ್ದೇಶಕ ಜಯಕರ ಶೆಟ್ಟಿ ಬಿ. ಇಂದ್ರಾಳಿ, ಸಹಕಾರ ಸಂಘಗಳ ಉಪನಿಬಂಧಕ ಹೆಚ್.ಎನ್. ರಮೇಶ್, ದೇವಿಪ್ರಸಾದ್ ಶೆಟ್ಟಿ ಬೆಳಪು, ಜಿಲ್ಲಾ ಸಹಕಾರಿ ಯೂನಿಯನ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಸ್.ವಿ. ಹಿರೇಮರ್, ಎಸ್‌ಸಿಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ವಿನಯ್ ಕುಮಾರ್ ಸೂರಿಂಜೆ, ಬ್ಯಾಂಕ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗೋಪಾಲಕೃಷ್ಣ ಭಟ್ ಸೇರಿದಂತೆ ಹಲವಾರು ಗಣ್ಯರು ಉಪಸ್ಥಿತರಿದ್ದರು. ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಶಶಿಕುಮಾರ್ ರೈ ಬಾಲೊಟ್ಟು ಪ್ರಾಸ್ತಾವಿಕವಾಗಿ ಮಾತನಾಡಿ, ಅತಿಥಿಗಳನ್ನು ಸ್ವಾಗತಿಸಿದರು.

SHARE
Loading spinner

Leave a Reply

Your email address will not be published. Required fields are marked *

error: Content is protected !!