ಉಡುಪಿ: ಏಷ್ಯಾದ ಅತಿದೊಡ್ಡ ಸರ್ವಋತು ಮೀನುಗಾರಿಕಾ ಬಂದರು ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಮಲ್ಪೆ ಬಂದರಿನಲ್ಲಿ ಮೀನುಗಾರರ ಅನುಕೂಲಕ್ಕಾಗಿ ಸುಮಾರು 12 ವರ್ಷಗಳ ಹಿಂದೆ ನಿರ್ಮಿಸಲಾದ ಶೌಚಾಲಯಗಳು ನಿರ್ವಹಣೆಯ ಕೊರತೆಯಿಂದ ಇಂದಿಗೂ ಬಳಕೆಗೆ ಲಭ್ಯವಾಗದೆ ಪಾಳುಬಿದ್ದಿವೆ. ಮಹಿಳಾ ಮೀನುಗಾರ್ತಿಯರಿಗಾಗಿ ನಿರ್ಮಿಸಲಾಗಿದ್ದ ವಿಶ್ರಾಂತಿ ಕೊಠಡಿಯೂ ನಿರುಪಯುಕ್ತವಾಗಿದ್ದು, ಮೂಲಸೌಕರ್ಯಗಳ ಕೊರತೆಗೆ ಮೀನುಗಾರರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಮೀನುಗಾರಿಕೆ ಇಲಾಖೆಯು ಲಕ್ಷಾಂತರ ರೂಪಾಯಿ ವೆಚ್ಚದಲ್ಲಿ ಎರಡು ಶೌಚಾಲಯಗಳನ್ನು ನಿರ್ಮಿಸಿದ್ದರೂ, ಅವುಗಳ ನಿರ್ವಹಣೆಗೆ ಸಿಬ್ಬಂದಿಯನ್ನು ನೇಮಿಸದ ಕಾರಣ ಸಾರ್ವಜನಿಕ ಬಳಕೆಗೆ ತೆರೆಯಲಾಗಿಲ್ಲ ಎಂದು ಮೀನುಗಾರರು ಆರೋಪಿಸಿದ್ದಾರೆ.

ಮಲ್ಪೆ ಬಂದರಿನಲ್ಲಿ ಪ್ರತಿದಿನ ಸುಮಾರು 700ಕ್ಕೂ ಅಧಿಕ ಮೀನುಗಾರಿಕಾ ದೋಣಿಗಳು ಮೀನು ಇಳಿಸುತ್ತಿದ್ದು, ಸಾವಿರಾರು ಮೀನುಗಾರರು, ಮಹಿಳಾ ಮೀನುಗಾರ್ತಿಯರು ಹಾಗೂ ಕಾರ್ಮಿಕರು ಇಲ್ಲಿ ಕಾರ್ಯನಿರ್ವಹಿಸುತ್ತಾರೆ. ಆದರೆ ಶೌಚಾಲಯದ ವ್ಯವಸ್ಥೆ ಇಲ್ಲದ ಕಾರಣ ಅನೇಕರು ಕಿಲೋಮೀಟರ್‌ಗಳಷ್ಟು ದೂರ ತೆರಳಿ ಶೌಚಾಲಯ ಬಳಸಬೇಕಾದ ಅನಿವಾರ್ಯತೆ ಎದುರಿಸುತ್ತಿದ್ದಾರೆ.
ಕನ್ನಿ ಮೀನುಗಾರರ ಸಂಘದ ಅಧ್ಯಕ್ಷ ದಯಾಕರ ಸುವರ್ಣ ಮಾತನಾಡಿ, ಶೌಚಾಲಯಗಳ ನಿರ್ವಹಣೆಗಾಗಿ ಸಿಬ್ಬಂದಿಯನ್ನು ನೇಮಿಸುವಂತೆ ಮೀನುಗಾರಿಕೆ ಇಲಾಖೆಗೆ ಹಲವು ಬಾರಿ ಮನವಿ ಸಲ್ಲಿಸಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಜನಪ್ರತಿನಿಧಿಗಳೂ ಈ ಸಮಸ್ಯೆಯತ್ತ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಆರೋಪಿಸಿದರು.

ಇದೇ ವೇಳೆ ಬಂದರಿನಲ್ಲಿರುವ ಕುಡಿಯುವ ನೀರಿನ ಟ್ಯಾಂಕ್ ಕೂಡ ದುಸ್ಥಿತಿಯಲ್ಲಿದ್ದು, ನಿರ್ಮಿಸಲಾದ ಮೂಲಸೌಕರ್ಯಗಳು ನಿರ್ವಹಣೆಯ ಕೊರತೆಯಿಂದ ಹಾಳಾಗುತ್ತಿವೆ ಎಂದು ಅವರು ಹೇಳಿದರು.

ಕೂಡಲೇ ಶೌಚಾಲಯಗಳನ್ನು ದುರಸ್ತಿಗೊಳಿಸಿ ಸಾರ್ವಜನಿಕ ಬಳಕೆಗೆ ಮುಕ್ತಗೊಳಿಸಬೇಕು. ಅವುಗಳ ನಿರ್ವಹಣೆಗೆ ಸಿಬ್ಬಂದಿಯನ್ನು ನೇಮಿಸಬೇಕು. ಅದು ಸಾಧ್ಯವಾಗದಿದ್ದರೆ ಟೆಂಡರ್ ಮೂಲಕ ಸ್ಥಳೀಯರಿಗೆ ನಿರ್ವಹಣೆಯ ಜವಾಬ್ದಾರಿ ವಹಿಸಬೇಕು ಎಂದು ಮೀನುಗಾರರು ಒತ್ತಾಯಿಸಿದ್ದಾರೆ.
ಜನಪ್ರತಿನಿಧಿಗಳು ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ ಶೀಘ್ರ ಪರಿಹಾರ ಕ್ರಮ ಕೈಗೊಳ್ಳಬೇಕು ಎಂದು ಮೀನುಗಾರರು ಆಗ್ರಹಿಸಿದ್ದಾರೆ.

