ಮಂಗಳೂರು, ಜೂನ್ 29: ಕೇಂದ್ರ ಸಹಕಾರ ಸಚಿವಾಲಯ ಸ್ಥಾಪನೆಯ ಐದು ವರ್ಷಗಳ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ, ಎಸ್ಸಿಡಿಸಿಸಿ ಬ್ಯಾಂಕ್, ಜಿಲ್ಲಾ ಸಹಕಾರಿ ಯೂನಿಯನ್ ಹಾಗೂ ಸಹಕಾರ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ವಿಶೇಷ ಸಹಕಾರ ಸಪ್ತಾಹಕ್ಕೆ ಸೋಮವಾರ ಎಸ್ಸಿಡಿಸಿಸಿ ಬ್ಯಾಂಕ್ ಸಭಾಂಗಣದಲ್ಲಿ ಚಾಲನೆ ನೀಡಲಾಯಿತು.
ಕಾರ್ಯಕ್ರಮವನ್ನು ಉದ್ಘಾಟಿಸಿದ ಎಸ್ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಮಾತನಾಡಿ, ರಾಜ್ಯದಲ್ಲಿ 47 ಸಾವಿರಕ್ಕೂ ಹೆಚ್ಚು ಸಹಕಾರಿ ಸಂಘಗಳು ಕಾರ್ಯನಿರ್ವಹಿಸುತ್ತಿದ್ದು, ಬಡವರು ಮತ್ತು ಸಾಮಾನ್ಯ ಜನರ ಆರ್ಥಿಕ ಅಭಿವೃದ್ಧಿಗೆ ಸಹಕಾರಿ ಬ್ಯಾಂಕ್ಗಳ ಕೊಡುಗೆ ಅಪಾರವಾಗಿದೆ ಎಂದು ಹೇಳಿದರು. “ನಮಗೆ ರಾಜಕೀಯ ಪಕ್ಷವಿಲ್ಲ, ಸಹಕಾರಿ ಪಕ್ಷವೇ ನಮ್ಮ ಪಕ್ಷ. ಸಹಕಾರ ಕ್ಷೇತ್ರವನ್ನು ಇನ್ನಷ್ಟು ಬಲಪಡಿಸುವ ಮೂಲಕ ದೇಶದ ಅಭಿವೃದ್ಧಿಗೆ ಎಲ್ಲರೂ ಕೈಜೋಡಿಸಬೇಕು” ಎಂದು ಅವರು ಕರೆ ನೀಡಿದರು.




ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ್ ಡಿ. ಕಾಮತ್, ಸ್ವಾತಂತ್ರ್ಯೋತ್ತರ ಭಾರತದಲ್ಲಿ ಸಹಕಾರಿ ಚಳುವಳಿ ದೇಶದ ಅಭಿವೃದ್ಧಿಗೆ ಮಹತ್ವದ ಕೊಡುಗೆ ನೀಡಿದೆ ಎಂದು ಹೇಳಿದರು. 2047ರ ಶಕ್ತಿಶಾಲಿ ಭಾರತದ ನಿರ್ಮಾಣಕ್ಕೆ ಕೇಂದ್ರ ಸಹಕಾರ ಸಚಿವಾಲಯದ ವಿವಿಧ ಯೋಜನೆಗಳು ಪೂರಕವಾಗಲಿವೆ ಎಂದು ಅವರು ಅಭಿಪ್ರಾಯಪಟ್ಟರು.
ಜಿಲ್ಲೆಯಲ್ಲಿ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರ ನೇತೃತ್ವದಲ್ಲಿ ಸಹಕಾರಿ ಕ್ಷೇತ್ರದಲ್ಲಿ ಮಹತ್ವದ ಬದಲಾವಣೆಗಳು ಕಂಡುಬಂದಿದ್ದು, ಮಹಿಳೆಯರ ಆರ್ಥಿಕ ಸಬಲೀಕರಣದಲ್ಲಿ ಸಹಕಾರಿ ಸಂಘಗಳ ಪಾತ್ರ ಶ್ಲಾಘನೀಯವಾಗಿದೆ ಎಂದು ಶಾಸಕ ಕಾಮತ್ ಹೇಳಿದರು.
ಕಾರ್ಯಕ್ರಮದಲ್ಲಿ ರವಿರಾಜ್ ಹೆಗ್ಡೆ, ಜಯಕರ ಶೆಟ್ಟಿ ಬಿ. ಇಂದ್ರಾಳಿ, ಹೆಚ್.ಎನ್. ರಮೇಶ್, ದೇವಿಪ್ರಸಾದ್ ಶೆಟ್ಟಿ ಬೆಳಪು, ಎಸ್.ವಿ. ಹಿರೇಮರ್, ವಿನಯ್ ಕುಮಾರ್ ಸೂರಿಂಜೆ, ಗೋಪಾಲಕೃಷ್ಣ ಭಟ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು. ಶಶಿಕುಮಾರ್ ರೈ ಬಾಲೊಟ್ಟು ಪ್ರಾಸ್ತಾವಿಕವಾಗಿ ಮಾತನಾಡಿ ಅತಿಥಿಗಳನ್ನು ಸ್ವಾಗತಿಸಿದರು.


